ಪ್ರಧಾನಿ ನರೇಂದ್ರ ಮೋದಿ 
ದೇಶ

ಜಾಗತಿಮಟ್ಟದಲ್ಲಿ ಭಾರತಕ್ಕೆ ಹೆಮ್ಮೆ ತರುತ್ತಿದ್ದಾರೆ; ಮನ್​ ಕಿ ಬಾತ್​ನಲ್ಲಿ ಭಾರತೀಯ ಕ್ರೀಡಾಪಟುಗಳನ್ನು ಶ್ಲಾಘಿಸಿದ ಪ್ರಧಾನಿ ಮೋದಿ | PM Modi

ನವದೆಹಲಿ: ಪ್ರಸ್ತುತ ಭಾರತೀಯ ಅಥ್ಲೆಟಿಕ್ಸ್ ವಲಯವು ಗಮನಾರ್ಹವಾಗಿ ಪ್ರಗತಿ ಸಾಧಿಸಿದ್ದು, ಭಾರತೀಯ ಕ್ರೀಡಾಪಟುಗಳು ಜಾಗತಿಕ ಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವ ಮೂಲಕ ದೇಶಕ್ಕೆ ಹೆಮ್ಮೆ ತರುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ(PM Modi) ಶ್ಲಾಘಿಸಿದ್ದಾರೆ.
ಭಾನುವಾರ ನಡೆದ 'ಮನ್ ಕಿ ಬಾತ್' ನ 134 ನೇ ಸಂಚಿಕೆಯಲ್ಲಿ ಮಾತನಾಡಿರುವ ಅವರು, ಇತ್ತೀಚೆಗೆ ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ನಡೆದ ರಾಷ್ಟ್ರೀಯ ಹಿರಿಯ ಅಥ್ಲೆಟಿಕ್ಸ್ ಫೆಡರೇಶನ್ ಸ್ಪರ್ಧೆಗಳಲ್ಲಿ ಕ್ರೀಡಾಪಟುಗಳು ಅಸಾಧಾರಣ ಪ್ರತಿಭೆಯನ್ನು ತೋರಿಸಿದ್ದಾರೆ ಎಂದು ಹೇಳಿದ್ದಾರೆ.
ಭಾರತೀಯಾ ಕ್ರೀಡಾಪಟುಗಳು ವಿವಿಧ ವಿಭಾಗಗಳಲ್ಲಿ 4 ರಾಷ್ಟ್ರೀಯ ದಾಖಲೆಗಳನ್ನು ಸೃಷ್ಟಿಸಿದ್ದಾರೆ. ತಮ್ಮ ವಿಭಾಗಗಳಲ್ಲಿ ಹೊಸ ದಾಖಲೆಗಳನ್ನು ಸೃಷ್ಟಿಸಿದ್ದಕ್ಕಾಗಿ ಗುರಿಂದರ್‌ವೀರ್ ಸಿಂಗ್, ವಿಶಾಲ್ ಟಿಕೆ, ತೇಜಸ್ವಿನ್ ಶಂಕರ್, ದೇವ್ ಮೀನಾ ಮತ್ತು ಕುಲದೀಪ್ ಕುಮಾರ್ ಅವರನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ.
ಪುರುಷರ 100 ಮೀಟರ್ ಓಟದಲ್ಲಿ ನಡೆದ ಬೆಳವಣಿಗೆಯನ್ನು ಪ್ರಸ್ತಾಪಿಸಿದ ಪ್ರಧಾನಿ, ಕೇವಲ ಎರಡು ದಿನಗಳಲ್ಲಿ ಮೂರು ಬಾರಿ ರಾಷ್ಟ್ರೀಯ ದಾಖಲೆಯನ್ನು ಮುರಿಯುವುದು ಭಾರತೀಯ ಅಥ್ಲೆಟಿಕ್ಸ್ ಇತಿಹಾಸದಲ್ಲಿ ಅಪರೂಪದ ಘಟನೆಯಾಗಿದೆ. ಗುರಿಂದರ್‌ವೀರ್ ಸಿಂಗ್ ಮತ್ತು ಅನಿಮೇಶ್ ಕುಜುರ್ ಅವರಂತಹ ಯುವ ಕ್ರೀಡಾಪಟುಗಳ ಪ್ರದರ್ಶನವು ದೇಶದಲ್ಲಿ ಕ್ರೀಡೆಯಲ್ಲಿ ಹೆಚ್ಚುತ್ತಿರುವ ಆಸಕ್ತಿಗೆ ಸಾಕ್ಷಿಯಾಗಿದೆ. ಅವರ ಆಟವು ಯುವಕರಲ್ಲಿ ಹೊಸ ಆತ್ಮವಿಶ್ವಾಸವನ್ನು ತುಂಬುತ್ತದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ದೇಶಾದ್ಯಂತ ಬೀಸುತ್ತಿರುತ್ತಿರು ಬಿಸಿಗಾಳಿ ಬಗ್ಗೆ ಎಚ್ಚರಿಕೆ ನೀಡಿದ್ದು, ತಾಪಮಾನವು ದಾಖಲೆಯ ಗರಿಷ್ಠ ಮಟ್ಟವನ್ನು ತಲುಪುತ್ತಿರುವುದರಿಂದ ಎಲ್ಲರೂ ಮುನ್ನೆಚ್ಚರಿಕೆ ವಹಿಸುವಂತೆ ಅವರು ಸಲಹೆ ನೀಡಿದ್ದಾರೆ. ಸಾಕಷ್ಟು ನೀರು ಕುಡಿಯುವುದು, ದಿನದ ಅತ್ಯಂತ ಬಿಸಿಲಿನ ಸಮಯದಲ್ಲಿ ಹೊರಗೆ ಹೋಗುವುದನ್ನು ತಪ್ಪಿಸುವಂತೆ ಸೂಚಿಸಿದ್ದಾರೆ (ಏಜೆನ್ಸೀಸ್).