Parliament Special Session |  
ದೇಶ

ವಿಶೇಷ ಸಂಸತ್ ಅಧಿವೇಶನಕ್ಕೆ ಕಾಂಗ್ರೆಸ್ ಕೆಂಡ.. ಚುನಾವಣೆ ಹೊತ್ತಲ್ಲೇ ಸ್ಥಾನಗಳ ಹೆಚ್ಚಳಕ್ಕೆ ಸ್ಕೆಚ್..? | Parliament Special Session

ದೆಹಲಿ: ಕೇಂದ್ರ ಸರ್ಕಾರವು ಏಪ್ರಿಲ್ 16 ರಿಂದ ಮೂರು ದಿನಗಳ ಕಾಲ ಸಂಸತ್ತಿನ ವಿಶೇಷ ಅಧಿವೇಶನ (Parliament Special Session) ಕರೆದಿರುವುದನ್ನು ಕಾಂಗ್ರೆಸ್ ಪಕ್ಷ ಖಂಡಿಸಿದ್ದು, ಪಶ್ಚಿಮ ಬಂಗಾಳ ಮತ್ತು ತಮಿಳುನಾಡು ವಿಧಾನಸಭಾ ಚುನಾವಣೆಗಳ ಹೊತ್ತಲ್ಲೇ ಈ ನಿರ್ಧಾರ ಕೈಗೊಂಡಿರುವುದು ಮಾದರಿ ನೀತಿ ಸಂಹಿತೆಯ ನೇರ ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಅಧಿವೇಶನದ ಮೂಲಕ ಚುನಾವಣಾ ಸಂದರ್ಭದಲ್ಲಿ ರಾಜಕೀಯ ಲಾಭ ಪಡೆಯಲು ಸರ್ಕಾರ ಪ್ರಯತ್ನಿಸುತ್ತಿದೆ ಎಂಬುದು ಪ್ರತಿಪಕ್ಷಗಳ ವಾದವಾಗಿದೆ.
ಈ ವಿಶೇಷ ಅಧಿವೇಶನದಲ್ಲಿ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ ಇರುವ 543 ರಿಂದ 816 ಕ್ಕೆ ಹೆಚ್ಚಿಸುವ ಗುರಿಯನ್ನು ಹೊಂದಿರುವ ಪ್ರಮುಖ ಸಂವಿಧಾನ ತಿದ್ದುಪಡಿ ಮಸೂದೆಗಳನ್ನು ಮಂಡಿಸುವ ಸಾಧ್ಯತೆಯಿದೆ. ಈ ಮೂಲಕ ಮಹಿಳಾ ಮೀಸಲಾತಿ ಕಾನೂನನ್ನು ಆದಷ್ಟು ಬೇಗ ಜಾರಿಗೆ ತರಲು ಸರ್ಕಾರ ಯೋಜಿಸಿದೆ.
ಸರ್ಕಾರದ ಈ ಆತುರದ ಕ್ಷೇತ್ರ ವಿಂಗಡಣೆ ಪ್ರಕ್ರಿಯೆಯು ಅಪಾಯಕಾರಿ ಪರಿಣಾಮಗಳನ್ನು ಉಂಟುಮಾಡುತ್ತದೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಎಚ್ಚರಿಸಿದ್ದು, ಈ ವಿಶೇಷ ಅಧಿವೇಶನದ ಏಕೈಕ ಉದ್ದೇಶ ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ಚುನಾವಣೆಗಳ ಮೇಲೆ ಪ್ರಭಾವ ಬೀರುವುದು. ಅಧಿವೇಶನವನ್ನು 15 ದಿನಗಳ ನಂತರ ಕರೆಯಲು ಸಾಧ್ಯವಿರಲಿಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.
ಕ್ಷೇತ್ರ ಪುನರ್ವಿಂಗಡಣೆ ಕುರಿತು ಸರ್ಕಾರವು ವಿರೋಧ ಪಕ್ಷಗಳಿಗೆ ಯಾವುದೇ ಅಧಿಕೃತ ಸಂವಹನ ನಡೆಸಿಲ್ಲ, ಕೇವಲ ಮಹಿಳಾ ಮೀಸಲಾತಿ ಕಾನೂನು ತಿದ್ದುಪಡಿ ಬಗ್ಗೆ ಮಾತ್ರ ಪತ್ರದಲ್ಲಿ ಉಲ್ಲೇಖಿಸಿದೆ ಎಂದು ರಮೇಶ್ ದೂರಿದ್ದು, ಸಂಸತ್ತಿನ ಮತ್ತು ವಿಧಾನಸಭಾ ಕ್ಷೇತ್ರಗಳ ವಿಂಗಡಣೆಯು ಅತ್ಯಂತ ಸೂಕ್ಷ್ಮ ವಿಷಯವಾಗಿದ್ದು, ಆತುರದ ನಿರ್ಧಾರವು ದಕ್ಷಿಣ ಭಾರತದ ರಾಜ್ಯಗಳಾದ ತಮಿಳುನಾಡು, ಕೇರಳ ಹಾಗೂ ಈಶಾನ್ಯ ಮತ್ತು ಪಶ್ಚಿಮದ ರಾಜ್ಯಗಳಿಗೆ ಭಾರಿ ಅನಾನುಕೂಲತೆಯನ್ನುಂಟು ಮಾಡುತ್ತದೆ ಎಂದು ಕಾಂಗ್ರೆಸ್ ಎಚ್ಚರಿಸಿದೆ.
ಪ್ರಸ್ತಾವಿತ ಮಸೂದೆಯ ಅನ್ವಯ ಉತ್ತರ ಪ್ರದೇಶದ ಬಲ 120 ಕ್ಕೆ ಏರಿಕೆಯಾದರೆ, ಕೇರಳದ ಸ್ಥಾನಗಳು ಕೇವಲ 30 ಕ್ಕೆ ಸೀಮಿತವಾಗಲಿವೆ, ಇದು ಪ್ರಾದೇಶಿಕ ಅಸಮತೋಲನಕ್ಕೆ ಕಾರಣವಾಗಲಿದೆ ಎನ್ನುವುದು ಕಾಂಗ್ರೆಸ್​ನ ಕಳವಳ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಏಪ್ರಿಲ್ 16 ರ ಮೊದಲು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಹಿರಿಯ ಕಾಂಗ್ರೆಸ್ ಸಂಸದರು ಹಾಗೂ ಇತರ ವಿರೋಧ ಪಕ್ಷದ ನಾಯಕರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ ಎನ್ನಲಾಗಿದೆ.
ಏಪ್ರಿಲ್ 2 ರಂದು ಅನಿರ್ದಿಷ್ಟಾವಧಿಗೆ ಮುಂದೂಡಲ್ಪಟ್ಟಿದ್ದ ಸಂಸತ್ತನ್ನು ಮತ್ತೆ ಕರೆಯುವ ಸರ್ಕಾರದ ನಿರ್ಧಾರವು ಈಗ ದೊಡ್ಡ ರಾಜಕೀಯ ವಿವಾದಕ್ಕೆ ಕಾರಣವಾಗಿದ್ದು, ಪುದುಚೇರಿ, ಅಸ್ಸಾಂ ಮತ್ತು ಕೇರಳದಲ್ಲಿ ಏಪ್ರಿಲ್ 9 ರಂದು ಚುನಾವಣೆ ನಡೆಯಲಿದ್ದರೆ, ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 23 ಮತ್ತು 29 ರಂದು ಹಾಗೂ ತಮಿಳುನಾಡಿನಲ್ಲಿ ಏಪ್ರಿಲ್ 23 ರಂದು ಮತದಾನ ನಡೆಯಲಿದೆ(ಏಜೆನ್ಸೀಸ್​​).