ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯ ವಿಷ್ಣುಗಢ-ಪಿಪಲ್ಕೋಟಿ ಜಲವಿದ್ಯುತ್ ಯೋಜನೆಯ ನಿರ್ಮಾಣ ಹಂತದ ಸುರಂಗಕ್ಕೆ ಗುರುವಾರ(ಆ. 13) ಸಂಜೆ ನೀರು ನುಗ್ಗಿದ ಪರಿಣಾಮ ಸುರಂಗ ಕುಸಿದು(Tunnel collapse) ದುರಂತ ಸಂಭವಿಸಿದ್ದು, ಘಟನೆಯಲ್ಲಿ ಏಳು ಕಾರ್ಮಿಕರು ಮೃತಪಟ್ಟಿದ್ದು, 14 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಗುರುವಾರ ಸಂಜೆ 6.45ರ ಸುಮಾರಿಗೆ ಎಚ್‌ಸಿಸಿ ನಿರ್ಮಿಸುತ್ತಿರುವ ಸುರಂಗದೊಳಗೆ ದೊಡ್ಡ ಪ್ರಮಾಣದ ಅವಶೇಷಗಳು ಮತ್ತು ನೀರು ಇದ್ದಕ್ಕಿದ್ದಂತೆ ನುಗ್ಗಿದಾಗ ಈ ಅವಘಡ ಸಂಭವಿಸಿದೆ. ಈ ವೇಳೆ ಸ್ಥಳದಲ್ಲಿದ್ದ 22 ಕಾರ್ಮಿಕರು ಸುರಂಗದೊಳಗೆ ಸಿಲುಕಿಕೊಂಡಿದ್ದಾರೆ.
ತಕ್ಷಣವೇ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF), ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಮತ್ತು ಇತರ ಏಜೆನ್ಸಿಗಳ ತಂಡಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದವು.
ರಕ್ಷಣಾ ಕಾರ್ಯಾಚರಣೆಯಲ್ಲಿ 22 ಕಾರ್ಮಿಕರಲ್ಲಿ 14 ಮಂದಿ ಗಾಯಗೊಂಡಿದ್ದು, ಅವರನ್ನು ರಕ್ಷಣೆ ಮಾಡಿದ್ದು, ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಮತ್ತು ಒಬ್ಬರು ನಾಪತ್ತೆಯಾಗಿದ್ದಾರೆ. ಉಳಿದ 7 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಒಳಗೆ ಸಿಲುಕಿರುವ ಓರ್ವ ಕಾರ್ಮಿಕನಿಗಾಗಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಇನ್ನೂ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ರಕ್ಷಣಾ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದು, ಹಲವಾರು ಕಾರ್ಮಿಕರನ್ನು ರಕ್ಷಿಸಲಾಗಿದೆ ಮತ್ತು ಇನ್ನೂ ಒಳಗೆ ಸಿಲುಕಿರುವವರನ್ನು ರಕ್ಷಿಸಲು ಲಭ್ಯವಿರುವ ಎಲ್ಲಾ ಸಂಪನ್ಮೂಲಗಳನ್ನು ಬಳಸಲಾಗುತ್ತಿದೆ. ಮತ್ತು ಘಟನೆಯ ಬಗ್ಗೆ ಜಾರ್ಖಂಡ್ ಮತ್ತು ಛತ್ತೀಸ್‌ಗಢದ ಸಿಎಂಗಳ ಜೊತೆ ಮಾತನಾಡಿದ್ದೇನೆ ಎಂದು ತಿಳಿಸಿದ್ದಾರೆ (ಏಜೆನ್ಸೀಸ್).