ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆ ಹಕ್ಕು ಮಂಡಿಸಿರುವುದು.
ತಿರುವನಂತಪುರಂ: ಕೇರಳಂ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿಗೆ ಗೆಲುವು ಸಾಧಿಸಿ ಅಧಿಕಾರಕ್ಕೇರಿರುವ ಕಾಂಗ್ರೆಸ್ ನೇತೃತ್ವದ ಯುಡಿಎಫ್, ನೂತನ ಸಿಎಂ ಆಗಿ ವಿಡಿ ಸತೀಶನ್ ಅವರನ್ನು ಘೋಷಿಸಿದೆ. ನಿನ್ನೆ(ಮೇ 14) ತಡರಾತ್ರಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಭೇಟಿಯಾಗಿರುವ ಸತೀಶನ್, ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದು, ಮೇ 18ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಗುರುವಾರ ಮಾಜಿ ಮುಖ್ಯಮಂತ್ರಿ ದಿವಂಗತ ಉಮ್ಮನ್ ಚಾಂಡಿ ಅವರ ಮನೆಗೆ ಭೇಟಿ ನೀಡಿದ ನಂತರ ಸುದ್ದಿಗಾರರಿಗೆ ಮಾತನಾಡಿರುವ ಅವರು, ಮೇ 18 ರಂದು ಬೆಳಿಗ್ಗೆ 10 ಗಂಟೆಗೆ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಎಲ್ಲಾ ಕಾಂಗ್ರೆಸ್ ನಾಯಕರು ಹಾಜರಿರುತ್ತಾರೆ. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.
ತಿರುವನಂತಪುರದ ಸೆಂಟ್ರಲ್ ಕ್ರೀಡಾಂಗಣದಲ್ಲಿ ಸಮಾರಂಭ ನಡೆಯಲಿದೆ. ಇತರ ಸಚಿವರ ಬಗ್ಗೆ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಮತ್ತು ಶುಕ್ರವಾರ ಚರ್ಚೆ ಪ್ರಾರಂಭವಾಗಲಿದೆ ಎಂದು ತಿಳಿಸಿದ್ದಾರೆ.
2006 ರಿಂದ 2011 ರವರೆಗೆ ವಿರೋಧ ಪಕ್ಷದ ನಾಯಕರಾಗಿದ್ದಾಗ ವಿಧಾನಸಭಾ ಚಟುವಟಿಕೆಗಳಲ್ಲಿ ಹೆಚ್ಚಿನ ಅವಕಾಶಗಳನ್ನು ನೀಡಿದವರು ಚಾಂಡಿ. ನನ್ನ ರಾಜಕೀಯ ಜೀವನದಲ್ಲಿ ನನಗೆ ಆದ ದೊಡ್ಡ ನಷ್ಟವೆಂದರೆ ನಾನು ಸಚಿವನಾಗಲಿಲ್ಲ ಎಂಬುದಲ್ಲ, ಬದಲಿಗೆ ಉಮ್ಮನ್ ಚಾಂಡಿ ಸರ್ಕಾರದಲ್ಲಿ ಸಚಿವನಾಗಲು ಸಾಧ್ಯವಾಗದಿರುವುದು ಎಂದಿದ್ದಾರೆ (ಏಜೆನ್ಸೀಸ್).