ನ್ಯೂಸ್

ಪಿಯು ಇಂಗ್ಲಿಷ್ ಪರೀಕ್ಷೆ : ಪರೀಕ್ಷಾ ಕೇಂದ್ರ ಬದಲಾವಣೆಗೆ ಮುಂದಾದ 17 ಸಾವಿರ ವಿದ್ಯಾರ್ಥಿಗಳು

ಬೆಂಗಳೂರು: ಕೋವಿಡ್-19 ಭಯದಿಂದಾಗಿ ಅಂದಾಜು 16,957 ಪಿಯುಸಿ ವಿದ್ಯಾರ್ಥಿಗಳು ತಮ್ಮ ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಲು ಇಚ್ಛೆ ವ್ಯಕ್ತಪಡಿಸಿದ್ದಾರೆ.

ಪಿಯು ಶಿಕ್ಷಣ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾದ ಪಟ್ಟಿಯ ಪ್ರಕಾರ, ಜೂನ್ 18ರಂದು ನಡೆಯುವ ಇಂಗ್ಲಿಷ್ ಪರೀಕ್ಷೆಯನ್ನು ತಮ್ಮ ಸಮೀಪವಿರುವ ಕೇಂದ್ರಗಳಲ್ಲೇ ಬರೆಯಲು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಸೋಮವಾರ 16,229 ವಿದ್ಯಾರ್ಥಿಗಳು ತಮಗೆ ಸಮೀಪವಿರುವ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಆಸಕ್ತಿ ವ್ಯಕ್ತಪಡಿಸಿದ್ದಾರೆ ಮತ್ತು ಅವರಿಗೆ ಹತ್ತಿರದ ಕೇಂದ್ರಗಳಲ್ಲೇ ಅವರಿಗೆ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದ್ದರು.

ಗಡಿ ಜಿಲ್ಲೆಗಳಲ್ಲಿ ವಾಸಿಸುವ ವಿದ್ಯಾರ್ಥಿಗಳಿಗೆ ತಮಗೆ ಹತ್ತಿರವಿರುವ ಕರ್ನಾಟಕದ ಜಿಲ್ಲೆಯೊಂದರಲ್ಲಿ ಪರೀಕ್ಷೆ ಬರೆಯಲು ಸರ್ಕಾರ ವ್ಯವಸ್ಥೆ ಮಾಡುತ್ತಿದೆ.

ಪರೀಕ್ಷಾ ಕೇಂದ್ರದ ಬದಲಾವಣೆಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳಿಗೆ ಜೂನ್ 5 ರವರೆಗೆ ಅವಕಾಶವಿದೆ.

ಗಡಿ ಜಿಲ್ಲೆಗಳಲ್ಲಿನ ವಿದ್ಯಾರ್ಥಿಗಳ ಪಟ್ಟಿಯನ್ನು ಜೂನ್ 5ರಂದು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ.ತಿದ್ದುಪಡಿ ಮಾಡಲು ಕಾಲೇಜುಗಳ ಪ್ರಾಚಾರ್ಯರಿಗೆ ಒಂದು ದಿನ ಕಾಲಾವಕಾಶವಿರುತ್ತದೆ. ಪರೀಕ್ಷಾ ಕೇಂದ್ರದ ಪರಿಷ್ಕೃತ ಆಯ್ಕೆಯೊಂದಿಗೆ ವಿದ್ಯಾರ್ಥಿಗಳ ಅಂತಿಮ ಪಟ್ಟಿಯನ್ನು ಜೂನ್ 7 ರಂದು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳು ಈ ಅಂತಿಮ ಪಟ್ಟಿಯ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಂಡು ಪರೀಕ್ಷಾ ಕೇಂದ್ರದಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ 080-23083900 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.