ಬೇಲೂರಿನ ಶ್ರೀ ಚನ್ನಕೇಶವಸ್ವಾಮಿ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವದ ಅಂಗವಾಗಿ ದೇಗುಲದ ಆವರಣದಲ್ಲಿ ಶಾಸಕ ಎಚ್.ಕೆ.ಸುರೇಶ್ ಆಹ್ವಾನ ಪತ್ರಿಕೆ ಅನಾವರಣಗೊಳಿಸಿದರು. ಎಂ.ಮಮತಾ, ಯೋಗೀಶ್, ಶ್ರೀನಿವಾಸ್, ಎಂ.ಎ.ನಾಗರಾಜ್, ಬಿ.ಬಿ.ಶಿವರಾಜ್ ಇತರರು ಇದ್ದರು. 
ನ್ಯೂಸ್

ಶ್ರೀ ಚನ್ನಕೇಶವಸ್ವಾಮಿ ಜಾತ್ರಾ ಮಹೋತ್ಸವಕ್ಕೆ ಅಗತ್ಯ ಸಿದ್ಧತೆ

ಬೇಲೂರು: ವಿಶ್ವವಿಖ್ಯಾತ ಬೇಲೂರು ಶ್ರೀ ಚನ್ನಕೇಶವಸ್ವಾಮಿ ದಿವ್ಯ ಬ್ರಹ್ಮ ರಥೋತ್ಸವ ಹಾಗೂ ನಾಡ ರಥೋತ್ಸವದ ಜಾತ್ರಾ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ಸೇರಿದಂತೆ ಸಂಬಂಧಿಸಿದ ಇಲಾಖೆಗಳು ಹೆಚ್ಚಿನ ಸಿದ್ಧತೆ ಕೈಗೊಂಡಿದ್ದು, ಭಕ್ತರು ಸಾರ್ವಜನಿಕರು ಹೆಚ್ಚಿನ ಸಹಕಾರ ನೀಡಬೇಕು ಎಂದು ಶಾಸಕ ಎಚ್.ಕೆ.ಸುರೇಶ್ ಕೋರಿದರು.

ಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ಚನ್ನಕೇಶವಸ್ವಾಮಿ ದಿವ್ಯ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವದ ಅಂಗವಾಗಿ ದೇಗುಲದ ಆವರಣ ಆಹ್ವಾನ ಪತ್ರಿಕೆ ಅನಾವರಣಗೊಳಿಸಿ ಮಾತನಾಡಿದ ಅವರು, 2025 ಏ.2ರಿಂದ 15 ರವರೆಗೆ ದೇಗುಲದಲ್ಲಿ ನಡೆಯುವ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವದಲ್ಲಿ ಏ.10 ರಂದು ಬ್ರಹ್ಮ ರಥೋತ್ಸವ ನಡೆಯಲಿದೆ. ಏ.11 ರಂದು ನಾಡ ಬ್ರಹ್ಮರಥೋತ್ಸವ ನಡೆಯಲಿದೆ. ಈ ರಥೋತ್ಸವ, ಜಾತ್ರ ಮಹೋತ್ಸವವು ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿದೆ. ಈ ಜಾತ್ರಾ ಮಹೋತ್ಸವದಲ್ಲಿ ಲಕ್ಷಾಂತರ ಭಕ್ತರು ಭಾಗವಹಿಸುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ, ದೇಗುಲ ಆಡಳಿತ, ಪೊಲೀಸ್ ಇಲಾಖೆ, ಪುರಸಭೆ ಸೇರಿದಂತೆ ವಿವಿಧ ಇಲಾಖೆಗಳ ಸಹಕಾರದೊಂದಿಗೆ ಭಕ್ತರ ಅನುಕೂಲಕ್ಕಾಗಿ ವ್ಯವಸ್ಥೆ ಕಲ್ಪಿಸಲಾಗಿದೆ. ಬೇಲೂರಿನಲ್ಲಿ ನಡೆಯುವ ಬ್ರಹ್ಮ ರಥೋತ್ಸವ ಮತ್ತು ನಾಡ ರಥೋತ್ಸವಗಳು ಇತಿಹಾಸದ ಪುಟಗಳಲ್ಲಿ ಸೇರುವಂತೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದರು.

ಪುರಸಭೆ ಅಧ್ಯಕ್ಷ ಎ.ಆರ್.ಅಶೋಕ್ ಮಾತನಾಡಿ, 14 ದಿನಗಳವರೆಗೆ ನಡೆಯುವ ಶ್ರೀ ಚನ್ನಕೇಶವಸ್ವಾಮಿ ಜಾತ್ರಾ ಮಹೋತ್ಸವ ಭಕ್ತರಿಗೆ ಮತ್ತು ಸಾರ್ವಜನಿಕರಿಗೆ ಮುದ ನೀಡುವಂತಿರಬೇಕು. ಪ್ರತಿನಿತ್ಯ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಲು ವೇದಿಕೆ ಸಿದ್ಧವಿದೆ. ಪುರಸಭೆಯಿಂದ ಈಗಾಗಲೇ ಕುಡಿಯುವ ನೀರು, ಸ್ವಚ್ಛತೆ ಮತ್ತು ಬೀದಿ ದೀಪಗಳ ನಿರ್ವಹಣೆಗೆ ಒತ್ತು ನೀಡಲಾಗಿದ್ದು, ಪಟ್ಟಣ ಆಕರ್ಷಣೀಯವಾಗಿ ಕಾಣುವಂತೆ ಮಾಡುವ ಮೂಲಕ ಈ ಬಾರಿಯ ಜಾತ್ರಾ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ತಿಳಿಸಿದರು.

ತಹಸೀಲ್ದಾರ್ ಎಂ.ಮಮತಾ, ದೇಗುಲ ಇಒ ಯೋಗೀಶ್, ಪುರಸಭೆ ಸದಸ್ಯ ಶ್ರೀನಿವಾಸ್, ಎಚ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಎ.ನಾಗರಾಜ್, ಪತ್ರಕರ್ತರ ಸಂಘದ ಕಾರ್ಯದರ್ಶಿ ಬಿ.ಬಿ.ಶಿವರಾಜ್, ಬಿಜೆಪಿ ನಗರಾಧ್ಯಕ್ಷ ವಿನಯ್ ಸೇರಿದಂತೆ ಇತರರಿದ್ದರು.