ನ್ಯೂಸ್

ಒಬ್ಬ ಮಹಿಳೆಯಾಗಿ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡುವುದು ಸೂಕ್ತ; ಟ್ರೈನಿ ವೈದ್ಯೆ ಸಾವಿನ ಕುರಿತು ನಿರ್ಭಯಾ ತಾಯಿ ಕಿಡಿ

ನವದೆಹಲಿ: ರಾಷ್ಟ್ರವ್ಯಾಪಿ ತೀವ್ರ ಸಂಚಲನ ಮೂಡಿಸಿರುವ ಟ್ರೈನಿ ವೈದ್ಯೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಸಂಬಂಧ ಆಕ್ರೋಶ ವ್ಯಕ್ತವಾಗುತ್ತಿದ್ದು, ಇಂದು (ಆಗಸ್ಟ್ 17) ದೇಶವ್ಯಾಪಿ ವೈದ್ಯರು ಮುಷ್ಕರ ನಡೆಸಿದ್ದಾರೆ. ಇತ್ತ ಮುಷ್ಕರದ ಜೊತೆಗೆ ಮಮತಾ ಬ್ಯಾನರ್ಜಿ ರಾಜೀನಾಮೆಗೆ ಹೆಚ್ಚಿನ ಆಗ್ರಹ ಕೇಳಿ ಬರುತ್ತಿದ್ದು, ಇದೀಗ 2012ರ ದೆಹಲಿ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ನಿರ್ಭಯಾ ಅವರ ತಾಯಿ ಆಶಾ ದೇವಿ ಮಮತಾ ಬ್ಯಾನರ್ಜಿ ಅವರ ರಾಜೀನಾಮೆಗೆ ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿಗಳು ತಮ್ಮ ಅಧಿಕಾರವನ್ನು ಬಳಸಿಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವ ಬದಲು ಪ್ರತಿಭಟನೆ ನಡೆಸುವ ಮೂಲಕ ಜನರ ಗಮನವನ್ನು ಬೇರೆಡೆ ಸೆಳೆಯಲು ಯತ್ನಿಸುತ್ತಿದ್ದಾರೆ ಎಂದು ನಿರ್ಭಯಾ ತಾಯಿ ಆಶಾ ದೇವಿ ಕಿಡಿಕಾರಿದ್ದಾರೆ.

ಉತ್ತರಪ್ರದೇಶದ ಬಲಿಯಾದಲ್ಲಿ ಈ ಕುರಿತು ಮಾತನಾಡಿದ ಆಶಾ ದೇವಿ, ಜನರ ಗಮನವನ್ನು ಬೇರೆಡೆ ಸೆಳೆಯಲು ಮಮತಾ ಬ್ಯಾನರ್ಜಿ ಅವರು ಪ್ರತಿಭಟನೆ ನಡೆಸುತ್ತಿದ್ದಾರೆ. ಒಬ್ಬ ಮಹಿಳೆಯಾಗಿ, ರಾಜ್ಯದ ಮುಖ್ಯಮಂತ್ರಿಯಾಗಿ ಮಮತಾ ಬ್ಯಾನರ್ಜಿ ಅವರು ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕಿತ್ತು. ಪರಿಸ್ಥಿತಿ ನಿಭಾಯಿಸಲು ವಿಫಲರಾದ ಕಾರಣ ಅವರು ರಾಜೀನಾಮೆ ನೀಡುವುದು ಸೂಕ್ತ ಎಂದು ನಿರ್ಭಯಾ ಅವರ ತಾಯಿ ಆಶಾ ದೇವಿ ಆಗ್ರಹಿಸಿದ್ದಾರೆ.

ಆಗಸ್ಟ್​ 09ರಂದು ಕಲ್ಕತ್ತಾದ ಆರ್​ಜಿಕಾರ್​ ಮಡಿಕಲ್​ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ಟ್ರೈನಿ ವೈದ್ಯೆಯೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿತ್ತು. ಈ ವಿಚಾರ ಹೊರಬರುತ್ತಿದ್ದಂತೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ತಪ್ಪಿತಸ್ಥರನ್ನು ಗಲ್ಲಿಗೇರಿಸಬೇಕು ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಲ್ಲಿ ವಿಫಲರಾದ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಬೇಕೆಂದು ಆಗ್ರಹ ಕೇಳಿ ಬರುತ್ತಿದೆ.