ನವದೆಹಲಿ: ಪೌರತ್ವ ಕಾಯ್ದೆ ತಿದ್ದುಪಡಿ ಜಾರಿ ವಿರೋಧಿಸಿ ಈಶಾನ್ಯ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ವೇಳೆ ಸಂಭವಿಸಿದ ಹಿಂಸಾಚಾರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಮಂಗಳವಾರ ಸಭೆ ನಡೆಸಿದರು.
ಸಭೆಯಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್, ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, ಗುಪ್ತಚರ ಇಲಾಖೆ ನಿರ್ದೇಶಕ ಅರವಿಂದ ಕುಮಾರ್, ದೆಹಲಿ ಪೊಲೀಸ್ ಆಯುಕ್ತ ಅಮೂಲ್ಯ ಪಟ್ನಾಯಕ್, ಕಾಂಗ್ರೆಸ್ ಮುಖಂಡ ಸುಭಾಷ್ ಮಲ್ಹೋತ್ರಾ, ದೆಹಲಿ ಬಿಜೆಪಿ ಮುಖ್ಯಸ್ಥ ಮನೋಜ್ ತಿವಾರಿ ಸಭೆಯಲ್ಲಿ ಇದ್ದರು.
ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ಓರ್ವ ಮುಖ್ಯಪೇದೆ ಸೇರಿದಂತೆ 7 ಮಂದಿ ಬಲಿಯಾಗಿದ್ದಾರೆ. ಹಲವು ಕಟ್ಟಡಗಳಿಗೆ ಬೆಂಕಿ ಹಚ್ಚಲಾಗಿದೆ. ಈ ಹಿನ್ನೆಲೆಯಲ್ಲಿ ಅಮಿತ್ ಷಾ ಅವರು ಸಭೆ ನಡೆಸಿ ಚರ್ಚೆ ನಡೆಸಿದರು.
ಪ್ರತಿಭಟನೆಗೆ ಗಡಿಯಾಚೆಯಿಂದ ಜನರು ಬರುತ್ತಿದ್ದಾರೆ ಎಂಬ ಮಾಹಿತಿ ಇದೆ. ಗಡಿಗಳನ್ನು ಮುಚ್ಚಬೇಕು ಎಂದು ಸಭೆಯಲ್ಲಿ ಕೇಂದ್ರ ಗೃಹ ಸಚಿವರ ಗಮನ ಸೆಳೆದಿದ್ದೇನೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಭೆ ನಂತರ ಹೇಳಿದರು. (ಏಜೆನ್ಸೀಸ್)