ನ್ಯೂಸ್

15ರಂದು ಪ್ರಜಾಪ್ರಭುತ್ವ ದಿನ ಆಚರಿಸುವಂತೆ ಸೂಚನೆ

ಬೆಂಗಳೂರು ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ಸೆ.15ರಂದು ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ’ ಮಾಡುವಂತೆ ಶಾಲಾ ಶಿಕ್ಷಣ ಇಲಾಖೆಯು ಸೂಚನೆ ನೀಡಿದೆ.

ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪ್ರಾರ್ಥನಾ ಸಮಯದಲ್ಲಿ ಸಂವಿಧಾನ ಪೀಠಿಕೆಯನ್ನು ಓದುವುದು ಹಾಗೂ ಎಲ್ಲರೂ ಸಂವಿಧಾನದ ಪೀಠಿಕೆಗೆ ಬದ್ಧರಾಗಿರುವುದು, ಸಾಂವಿಧಾನಿಕ ತತ್ವಗಳನ್ನು ತಮ್ಮ ಜೀವನ ಹಾಗೂ ಕರ್ತವ್ಯಗಳಲ್ಲಿ ಅಳವಡಿಸಿಕೊಳ್ಳಲು ಪ್ರತಿಜ್ಞೆ ಮಾಡುವುದು ಎಂದು ತಿಳಿಸಿದ್ದಾರೆ.

ಹಾಗೆಯೇ, ಸೆ.15ರಂದು ಬೆಳಗ್ಗೆ 10 ಗಂಟೆಗೆ ಮುಖ್ಯಮಂತ್ರಿ ಹಾಗೂ ಸಂಪುಟ ಸಚಿವರು ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ 10 ಸಾವಿರ ವಿದ್ಯಾರ್ಥಿಗಳೊಂದಿಗೆ ಸಂವಿಧಾನ ಪೀಠಿಕೆಯನ್ನು ಓದಲಿದ್ದಾರೆ. ಇದೇ ವೇಳೆ ಡಿಜಿಟಲ್ ವೇದಿಕೆಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಸೆ.12ರ ವರೆಗೆ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಳ್ಳಲು ಅವಕಾಶವಿದೆ. ಸಂಬಂಧಪಟ್ಟ ಅಧಿಕಾರಿಗಳು ನೋಂದಣಿ ಪ್ರಕ್ರಿಯೆಯನ್ನು ಯಶಸ್ವಿಗೊಳಿಸುವಂತೆ ಇಲಾಖೆ ಆಯುಕ್ತೆ ಬಿ.ಬಿ. ಕಾವೇರಿ ತಿಳಿಸಿದ್ದಾರೆ.