ಬೆಂಗಳೂರು: ರಾಜ್ಯದಲ್ಲಿ ಕರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲೇ ಇದೆ. ನಿನ್ನೆ ಸಂಜೆ 5 ಗಂಟೆಯಿಂದ ಇಂದು ಮಧ್ಯಾಹ್ನ 12 ಗಂಟೆಯವರೆಗೆ 10 ಹೊಸ ಸೋಂಕಿತರು ಪತ್ತೆಯಾಗಿದ್ದು, ಈ ಮೂಲಕ ಸೋಂಕು ತಗುಲಿದವರ ಸಂಖ್ಯೆ 207 ಆಗಿದೆ.
30 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕರ್ನಾಟಕದಲ್ಲಿ ಸೋಂಕಿನಿಂದ ಇಲ್ಲಿಯವರೆಗೆ ಮೃತಪಟ್ಟವರು ಆರು ಮಂದಿ. ನಿನ್ನೆ ಸಂಜೆಯಿಂದ ಇಲ್ಲಿಯವರೆಗೆ ಮೈಸೂರಿನಲ್ಲಿ ಅತಿ ಹೆಚ್ಚು ಸೋಂಕು ಕಾಣಿಸಿಕೊಂಡಿದೆ. ಇಲ್ಲಿ ಒಂದೇ ದಿನಕ್ಕೆ ಐವರಲ್ಲಿ ಸೋಂಕು ಕಾಣಿಸಿಕೊಂಡಿದೆ.
ಉಳಿದಂತೆ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ತಲಾ ಇಬ್ಬರು ಹಾಗೂ ಕಲಬುರ್ಗಿಯಲ್ಲಿ ಒಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ.
ಕರೊನಾ ಸೋಂಕು ತಡೆಗಟ್ಟಲು ಮಸೀದಿಯಲ್ಲಿ ಯಾವುದೇ ಸಭೆ, ಪ್ರಾರ್ಥನೆ ನಡೆಸದಂತೆ ಹಾಗೂ ಮೃತ ವ್ಯಕ್ತಿಗಳನ್ನು ದಫನ್ ಮಾಡಲು ಅನುಮತಿ ನೀಡದಂತೆ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯು ರಾಜ್ಯದ ಎಲ್ಲ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಿರುತ್ತದೆ.
ಸೋಂಕಿತರ ಪ್ರಯಾಣದ ಮಾಹಿತಿ ಬೇಕಿದ್ದರೆ www.karnataka.gov.in. ಮೊಬೈಲ್ ಅಪ್ಲಿಕೇಷ್ ಡೌನ್‌ಲೋಡ್ ಮಾಡಿಕೊಳ್ಳುವಂತೆ ಸರ್ಕಾರದ ಪ್ರಕಟಣೆ ತಿಳಿಸಿದೆ. ಕರೊನಾ ವೈರಸ್ ಉಚಿತ ಆರೋಗ್ಯ ಸಹಾಯವಾಣಿ ಸಂಖ್ಯೆ: 104/ 9745697456.