ಹನೂರು: ವಾಹನ ಸವಾರರು ಕಡ್ಡಾಯವಾಗಿ ರಸ್ತೆ ಸಂಚಾರ ಸುರಕ್ಷತಾ ನಿಯಮಗಳನ್ನು ಅನುಸರಿಸುವುದರ ಮೂಲಕ ಸುಗಮ ಸಂಚಾರಕ್ಕೆ ಸಹಕರಿಸಬೇಕು ಎಂದು ಇನ್ಸ್‌ಪೆಕ್ಟರ್ ಸಿ.ಆನಂದಮೂರ್ತಿ ತಿಳಿಸಿದರು.
ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹೆಚ್ಚು ಅಪಘಾತವಾಗುತ್ತಿರುವ ಸ್ಥಳಗಳಲ್ಲಿ ಬುಧವಾರ ಬ್ಯಾರಿಕೇಡ್ ಅಳವಡಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಕೊಳ್ಳೇಗಾಲದಿಂದ ಹನೂರಿನವರೆಗೆ ಕೆ.ಶಿಪ್ ಯೋಜನೆಯಡಿ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗಿದ್ದು, ಸುಗಮ ಸಂಚಾರಕ್ಕೆ ಅನುಕೂಲವಾಗಿದೆ. ಆದರೆ ವಾಹನ ಸವಾರರು ಅತೀ ವೇಗದಿಂದ ಸಂಚರಿಸುತ್ತಿದ್ದಾರೆ. ಇದರಿಂದ ಅಪಘಾತಗಳ ಸಂಖ್ಯೆ ಹೆಚ್ಚುತ್ತಿದ್ದು, ಸಾವು, ನೋವುಗಳು ಸಂಭವಿಸುತ್ತಿವೆ. ಇತ್ತ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೆಲವು ಬೈಕ್ ಸವಾರರು ಹೆಲ್ಮೆಟ್ ಧರಿಸುತ್ತಿಲ್ಲ. ಕಾರಿನ ಚಾಲಕರು ಸೀಟ್ ಬೆಲ್ಟ್ ಧರಿಸದಿರುವುದು ಕಂಡು ಬರುತ್ತಿದೆ. ಕೆಲವು ಪಾಲಕರು ಅಪ್ರಾಪ್ತರಿಗೆ ಬೈಕ್ ಚಲಾಯಿಸಲು ನೀಡುತ್ತಿದ್ದಾರೆ. ಈ ಬಗ್ಗೆ ಹಲವು ಬಾರಿ ಎಚ್ಚರಿಕೆ ನೀಡಲಾಗಿದೆ. ಜತೆಗೆ ಸಾರ್ವಜನಿಕರಿಗೆ ಸಂಚಾರ ನಿಯಮದ ಬಗ್ಗೆ ಅರಿವು ಮೂಡಿಸಲಾಗಿದೆ. ಆದರೆ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸುತ್ತಿಲ್ಲ. ಇದರಿಂದ ಅಪಘಾತಕ್ಕೆ ಕಾರಣವಾಗುತ್ತಿದೆ. ಆದ್ದರಿಂದ ವಾಹನ ಸವಾರರು ಈ ಬಗ್ಗೆ ಮನದಟ್ಟು ಮಾಡಿಕೊಂಡು ರಸ್ತೆ ಸಂಚಾರ ನಿಯಮಗಳನ್ನು ಪಾಲಿಸಬೇಕು. ಇಲ್ಲವಾದಲ್ಲಿ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.