ನ್ಯೂಸ್

ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ; ವಸ್ತುಸ್ಥಿತಿ ಗಣನೆಗೆ ತೆಗೆದುಕೊಳ್ಳಬೇಕೆಂದ ಸುಪ್ರೀಂ ಕೋರ್ಟ್ | Supreme Court

Supreme Court: ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ನೆಲದ ವಾಸ್ತವತೆಗಳನ್ನು ಗಣನೆಗೆ ತೆಗೆದುಕೊಳ್ಳಬೇಕು ಎಂದು ಗುರುವಾರ (ಆಗಸ್ಟ್​ 14) ಒತ್ತಿ ಹೇಳಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಕೆ. ವಿನೋದ್ ಚಂದ್ರನ್ ಅವರನ್ನೊಳಗೊಂಡ ಪೀಠವು, ವಿಚಾರಣೆಯ ಸಮಯದಲ್ಲಿ ಪಹಲ್ಗಾಮ್ ಘಟನೆಯನ್ನು ಉಲ್ಲೇಖಿಸಿತು. ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸುವ ಅರ್ಜಿಯ ಕುರಿತು ಎಂಟು ವಾರಗಳಲ್ಲಿ ಉತ್ತರವನ್ನು ಸಲ್ಲಿಸುವಂತೆ ನಿರ್ದೇಶಿಸಿ, ನ್ಯಾಯಾಲಯವು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ಎಂಟು ವಾರಗಳ ನಂತರ ಪ್ರಕರಣದ ವಿಚಾರಣೆಯನ್ನು ಮುಂದೂಡಿತು.

ಅರ್ಜಿಯಲ್ಲೇನಿದೆ..?

ಕಳೆದ ವರ್ಷ ಶಿಕ್ಷಣ ತಜ್ಞ ಜಹೂರ್ ಅಹ್ಮದ್ ಭಟ್ ಮತ್ತು ಸಾಮಾಜಿಕ ಕಾರ್ಯಕರ್ತ ಖುರ್ಷಾಯಿದ್ ಅಹ್ಮದ್ ಮಲಿಕ್ ಅವರು ಸಲ್ಲಿಸಿದ್ದ ಅರ್ಜಿಯಲ್ಲಿ, ಎರಡು ತಿಂಗಳೊಳಗೆ ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸಲು ಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶನ ನೀಡಬೇಕು ಎಂದು ಕೋರಲಾಗಿತ್ತು.

ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪನೆ ಮಾಡುವ ವಿಷಯದಲ್ಲಿ ಯಾವುದೇ ರೀತಿಯಲ್ಲೂ ವಿಳಂಬವಾಗ ಕೂಡದು. ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಜಾಸತಾತ್ಮಕವಾಗಿ ಆಯ್ಕೆಯಾದ ಸರ್ಕಾರದ ವಿಶ್ವಾಸಾರ್ಹತೆ ಕಡಿಮೆಯಾಗಲು ಇದು ಕಾರಣವಾಗುತ್ತದೆ ಮತ್ತು ಭಾರತದ ಒಕ್ಕೂಟ ರಚನೆಯ ಉಲ್ಲಂಘನೆಯಾಗುತ್ತದೆ ಎಂದರು. ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ವಿಧಾನಸಭಾ ಚುನಾವಣೆಗಳು ಮತ್ತು ಲೋಕಸಭಾ ಚುನಾವಣೆಗಳು ಯಾವುದೇ ಹಿಂಸಾಚಾರ, ಗಲಭೆಗಳು ನಡೆಯದೆ ಶಾಂತಿಯುತವಾಗಿ ಚುನಾವಣೆಗಳು ಮುಗಿದಿವೆ. ಸರ್ಕಾರ ಭರವಸೆ ನೀಡಿದಂತೆ ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡಲಿ ಎಂದು ವಾದಿಸಿದರು.

ಪತ್ರ ಬರೆದಿದ್ದ ಸಿಎಂ

ಇತ್ತೀಚೆಗೆ, ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಬಿಜೆಪಿ ಮತ್ತು ಕಾಂಗ್ರೆಸ್ ಸೇರಿದಂತೆ ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳ ನಾಯಕರಿಗೆ ಪತ್ರ ಬರೆದು, ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಪುನಃಸ್ಥಾಪಿಸಲು ಪ್ರಸ್ತುತ ನಡೆಯುತ್ತಿರುವ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸುವಂತೆ ಒತ್ತಾಯಿಸಿದರು.

ರಾಜ್ಯ ಸ್ಥಾನಮಾನದ ಪುನಃಸ್ಥಾಪನೆಯು ಒಂದು ಅತ್ಯಗತ್ಯ ತಿದ್ದುಪಡಿಯಾಗಿದ್ದು, ಒಂದು ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವಾಗಿ ಕೆಳದರ್ಜೆಗೇರಿಸಿರುವ ಕ್ರಮ ದೇಶದ ಮೇಲೆ ಅಹಿತಕರ ಪರಿಣಾಮಗಳನ್ನು ಬೀರುತ್ತದೆ ಎಂದು ಬರೆದಿದ್ದರು.(ಏಜೆನ್ಸೀಸ್)