ನ್ಯೂಸ್

'ಒಂದು ರಾಷ್ಟ್ರ, ಒಂದು ಚುನಾವಣೆ' ಪ್ರಾಯೋಗಿಕವಲ್ಲ; ಜನರ ಗಮನ ಬೇರೆಡೆ ಸೆಳೆಯಲು ಬಿಜೆಪಿ ಯತ್ನ; ಖರ್ಗೆ

ನವದೆಹಲಿ: ಕೇಂದ್ರ ಸಚಿವ ಸಂಪುಟ ಇಂದು (ಸೆ.18) ರಂದು ಅಂಗೀಕರಿಸಿರುವ ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಒಂದು ರಾಷ್ಟ್ರ, ಒಂದು ಚುನಾವಣೆ ಯೋಜನೆ ಕಾರ್ಯಸಾಧುವಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟದ ಒಪ್ಪಿಗೆ ಸಿಕ್ಕಿದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಖರ್ಗೆ ಅವರು, ಕೆಲ ರಾಜ್ಯಗಳ ಚುನಾವಣೆ ಸಮೀಪದಲ್ಲಿರುವ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಜನರ ಗಮನ ಬೇರೆಡೆ ಸೆಳೆಯಲು ಇಂಥ ತಂತ್ರವನ್ನು ಹೂಡಿದೆ ಎಂದು ಹೇಳಿದ್ದಾರೆ.

ಇದು ಪ್ರಯೋಗಿಕವಾಗಿ ಅಸಾಧ್ಯ. ಚುನಾವಣೆ ಸಮೀಪಿಸುತ್ತಿರುವಾಗ ನೈಜ ಸಮಸ್ಯೆಗಳಿಂದ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ಇಂತಹ ವಿಷಯಗಳನ್ನು ಮುಂದಿಡುತ್ತದೆ ಎಂದು ಆರೋಪಿಸಿದರು.

ಒಂದು ರಾಷ್ಟ್ರ ಒಂದು ಚುನಾವಣೆಗೆ ಕೇಂದ್ರ ಸಚಿವ ಸಂಪುಟ ಅಸ್ತು: ಒಂದು ರಾಷ್ಟ್ರ, ಒಂದು ಚುನಾವಣೆ ಪ್ರಸ್ತಾವನೆಗೆ ಬುಧವಾರ ಕೇಂದ್ರ ಸಚಿವ ಸಂಪುಟದ ಒಪ್ಪಿಗೆ ಸಿಕ್ಕಿದೆ. ವರದಿ ಪ್ರಕಾರ ಕೇಂದ್ರ ಸರ್ಕಾರ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ಬಗ್ಗೆ ಮಸೂದೆಯನ್ನು ತರಲಿದೆ.

ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆಯ ವೇಳೆ ಮಾಡಿದ ಭಾಷಣದಲ್ಲಿ ಪ್ರಧಾನಿ ಮೋದಿ ಒಂದು ದೇಶ, ಒಂದು ಚುನಾವಣೆ ಕುರಿತು ಮಾತನಾಡಿದ ಬಳಿಕ ಈ ಬೆಳವಣಿಗೆ ನಡೆದಿದೆ. ಪದೇ ಪದೇ ಚುನಾವಣೆಗಳು ನಡೆಯುವುದರಿಂದ ದೇಶದ ಪ್ರಗತಿಗೆ ಅಡ್ಡಿಯಾಗುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದರು.

ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಈ ವರ್ಷದ ಮಾರ್ಚ್‌ 14 ರಂದು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ತನ್ನ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿತ್ತು. ಈ ವರದಿಗೆ ಸಂಪುಟ ಅನುಮೋದನೆ ನೀಡಿದೆ.191 ದಿನಗಳ ಸಮಯವನ್ನು ತೆಗೆದುಕೊಂಡು ಅಧ್ಯಯನ ನಡೆಸಿದ್ದ ಸಮಿತಿ 18,000 ಕ್ಕೂ ಅಧಿಕ ಪುಟಗಳ ವರದಿಯನ್ನು ತಯಾರಿಸಿತ್ತು. ವಿವಿಧ ರಾಜಕೀಯ ಪಕ್ಷಗಳು ಮತ್ತು ಪ್ರಮುಖ ಸಂಪನ್ಮೂಲ ವ್ಯಕ್ತಿಗಳಿಂದ ಸಲಹೆಯನ್ನು ಸಂಗ್ರಹಿಸಿತ್ತು.