ಕಾರಟಗಿಯ ಆರ್‌ಜಿ ರಾಜ್ಯಹೆದ್ದಾರಿಲ್ಲಿ ಪೆಟ್ರೋಲ್, ಡೀಸೆಲ್ ಸಾಗಿಸುತ್ತಿದ್ದ ಲಾರಿಯ ಸೈಲೆನ್ಸರ್‌ನಲ್ಲಿ ಕಾಣಿಸಿಕೊಂಡ ಬೆಂಕಿ ನಂದಿಸುತ್ತಿರುವ ಅಗ್ನಿಶಾಮಕ ಠಾಣೆ ಸಿಬ್ಬಂದಿ.  
ನ್ಯೂಸ್

ಉರುಳಿ ಬಿದ್ದ ಪೆಟ್ರೋಲ್ ಟ್ಯಾಂಕರ್

ಮಂಜುನಾಥ.ಕೆ

ಬೆಂಗಳೂರು: ಪೆಟ್ರೋಲ್ ಟ್ಯಾಂಕರ್ ವಾಹನವೊಂದು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಉರುಳಿ ಬಿದ್ದ ಪರಿಣಾಮ ಭಾರೀ ಪ್ರಮಾಣದಲ್ಲಿ ಪೆಟ್ರೋಲ್ ಸೋರಿಕೆಯಾಗಿ, ಆತಂಕ ಸೃಷ್ಟಿಯಾಗಿತ್ತು.
ಎಲೆಕ್ಟ್ರಾನಿಕ್ ಸಿಟಿಯಲ್ಲಿ ಭಾನುವಾರ ಮುಂಜಾನೆ ಈ ಘಟನೆ ನಡೆದಿದೆ.
ಮುಂಜಾನೆ ೪ ಗಂಟೆ ಸುಮಾರಿಗೆ ಮಂಗಳೂರಿನಿಂದ ತಮಿಳುನಾಡಿಗೆ ಹೋಗುತ್ತಿದ್ದ ಪೆಟ್ರೋಲ್ ಟ್ಯಾಂಕರ್ ವಾಹನವೊಂದು ವೀರಸಂದ್ರ ಜಂಕ್ಷನ್ ಬಳಿ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು, ಉರುಳಿ ಬಿದ್ದಿತ್ತು. ಪರಿಣಾಮ ನೂರಾರು ಲೀಟರ್ ಪೆಟ್ರೋಲ್ ಸೋರಿಕೆಯಾಗಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮತ್ತು ಅಗ್ನಿಶಾಮಕ ದಳ ಅಧಿಕಾರಿಗಳು ಮುಂಜಾಗ್ರತ ಕ್ರಮಕೈಗೊಂಡು ಭಾರೀ ಅನಾಹುತ ತಪ್ಪಿಸಿದ್ದಾರೆ. ಬಳಿಕ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಠಾಣೆ ಪೊಲೀಸರು ಕ್ರೇನ್ ತರಿಸಿ ಟ್ಯಾಂಕರ್ ವಾಹನವನ್ನು ಮೇಲೆತ್ತಿದ್ದಾರೆ. ಈ ಘಟನೆಯಿಂದ ಕೆಲ ಕಾಲ ವೀರಸಂದ್ರ ಜಂಕ್ಷನ್ ಬಳಿ ಸಂಚಾರ ದಟ್ಟಣೆ ಉಂಟಾಗಿತ್ತು. ಬಳಿಕ ಸಂಚಾರ ಪೊಲೀಸರು ಪರ್ಯಾಯ ಮಾರ್ಗ ಸೂಚಿಸಿ ಸುಗಮ ಸಂಚಾರಕ್ಕೆ ಅವಕಾಶ ನೀಡಿದ್ದಾರೆ. ಘಟನೆ ಸಂಬಂಧ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.