ನ್ಯೂಸ್

ಬೆಂಗಳೂರಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

ಬೆಂಗಳೂರು: ಯಲಹಂಕದ ಪಾಲನಹಳ್ಳಿ ಸಮೀಪ ಕಾಂಗ್ರೆಸ್ ಕಾರ್ಯಕರ್ತರೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ‌ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

ಪಾಲನಹಳ್ಳಿ ನಿವಾಸಿ ಚನ್ನಕೇಶವ (36) ಕೊಲೆಯಾದವರು. ಗುರುವಾರ ರಾತ್ರಿ 10 ಗಂಟೆ ಸುಮಾರಿನಲ್ಲಿ ಪಾಲನಹಳ್ಳಿಯ ಅಪಾರ್ಟ್‌ಮೆಂಟ್‌ವೊಂದರ ಎದುರಿಗಿನ ಕಾಂಪೌಂಡ್ ಬಳಿ ಕಾರು ನಿಲ್ಲಿಸಿಕೊಂಡು ಚನ್ನಕೇಶವ ಒಬ್ಬರೇ ಮದ್ಯ ಸೇವಿಸುತ್ತಿದ್ದರು. ಈ ವೇಳೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಚನ್ನಕೇಶವರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಇದನ್ನೂ ಓದಿರಿ ಕ್ವಾರಂಟೈನ್ ಅಂದ್ರೆ ಹೀಗಿರಬೇಕು… ರಜೆಗೆ ಬಂದ ಸೈನಿಕರು ಹೊಲದಲ್ಲೇ ಏಕಾಂತ ವಾಸ

ದುಷ್ಕರ್ಮಿಗಳಿಂದ ತಪ್ಪಿಸಿಕೊಳ್ಳಲು ಕಾರಿನಿಂದ ಇಳಿದು ಓಡಿದರೂ ಹಿಂಬಾಲಿಸಿ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಚನ್ನಕೇಶವ ಸ್ಥಳದಲ್ಲೇ ಅಸುನೀಗಿದ್ದಾರೆ.

ಚನ್ನಕೇಶವಗೆ ಪತ್ನಿ ಮತ್ತು ಇಬ್ಬರು ಮಕ್ಕಳಿದ್ದಾರೆ. ವಾಟರ್ ಟ್ಯಾಂಕ್ ನೀರು ಸರಬರಾಜು ಮಾಡುವ ವ್ಯವಹಾರ ನಡೆಸುತ್ತಿದ್ದರು. ಸ್ವಂತ ಅಪಾರ್ಟ್‌ಮೆಂಟ್ ಕೂಡ ಇದೆ. ಕಾಂಗ್ರೆಸ್​ ಚಟುವಟಿಕೆಯಲ್ಲಿ ಸಕ್ರಿಯ ಕಾರ್ಯಕರ್ತರಾಗಿದ್ದರು.

ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಯೋಚಿಸಿದ್ದರು. ಇದೇ ನಿಟ್ಟಿನಲ್ಲಿ ಸಾರ್ವಜನಿಕವಾಗಿ ಕೆಲಸಗಳನ್ನು ಮಾಡುತ್ತಿದ್ದರು. ತಮ್ಮ ಊರಿನಲ್ಲಿ ಯಾವುದೇ ಕುಟುಂಬದ ಗಲಾಟೆಯಾದರೂ ಮುಂದೆ ನಿಂತು ರಾಜೀ ಸಂಧಾನ ಮಾಡಿಸುತ್ತಿದ್ದರು.

ಕೆಲ ದಿನಗಳ ಹಿಂದೆ ಯುವಕರ ಗಲಾಟೆಗೆ ಸಂಬಂಧಿಸಿದಂತೆ ರಾಜೀಸಂಧಾನ ಮಾಡುವಾಗ ಹೊಡೆದಿದ್ದರು ಎನ್ನಲಾಗಿದೆ. ಇದೇ ವಿಚಾರಕ್ಕೆ ಯಾರೋ ದ್ವೇಷದಿಂದ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಹತ್ಯೆ ನಡೆದ ಸ್ಥಳದಲ್ಲಿ ಸಿಸಿ ಕ್ಯಾಮರಾ ದೃಶ್ಯಗಳನ್ನು ಪರಿಶೀಲನೆ ನಡೆಸಲಾಗಿದೆ. ಉದ್ದೇಶಪೂರ್ವಕವಾಗಿ ಸಂಚು ರೂಪಿಸಿ ಹತ್ಯೆ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಕೆಲ ಆರೋಪಿಗಳ‌ ಮುಖ ಚಹರೆ ಗುರುತಿಸಲಾಗಿದ್ದು, ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಯಲಹಂಕ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ಎಸಿಪಿ ನೇತೃತ್ವದಲ್ಲಿ ಎರಡು ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ ಎಂದು ಈಶಾನ್ಯ ವಿಭಾಗ ಡಿಸಿಪಿ ಡಾ. ಭೀಮಾ ಶಂಕರ್ ಗುಳೇದ್ ತಿಳಿಸಿದ್ದಾರೆ‌.