ನ್ಯೂಸ್

ಡಿಸೆಂಬರ್ 1 ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ; ಈ ಎಲ್ಲ ವಿಷಯಗಳ ಕುರಿತು ಚರ್ಚೆ ನಡೆಸುವ ಸಾಧ್ಯತೆ | Parliament winter session

ದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನವನ್ನು (Parliament winter session) ಡಿಸೆಂಬರ್ 1 ರಿಂದ ಡಿಸೆಂಬರ್ 19 ರವರೆಗೆ ಕರೆಯುವ ಸರ್ಕಾರದ ಪ್ರಸ್ತಾವನೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅನುಮೋದಿಸಿದ್ದಾರೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಶನಿವಾರ (ನ 8) ತಿಳಿಸಿದ್ದಾರೆ.‘

ತಮ್ಮ ಅಧಿಕೃತ ಎಕ್ಸ್​ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಸಚಿವ ಕಿರಣ್​​ ರಿಜಿಜು, ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಡಿಸೆಂಬರ್ 1, 2025 ರಿಂದ ಡಿಸೆಂಬರ್ 19, 2025 ರವರೆಗೆ ಸಂಸದೀಯ ವ್ಯವಹಾರಗಳ ಅಗತ್ಯಗಳಿಗೆ ಒಳಪಟ್ಟು ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ಕರೆಯುವ ಸರ್ಕಾರದ ಪ್ರಸ್ತಾವನೆಯನ್ನು ಅನುಮೋದಿಸಿದ್ದಾರೆ, ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸುವ ಮತ್ತು ಜನರ ಆಕಾಂಕ್ಷೆಗಳನ್ನು ಪೂರೈಸುವ ರಚನಾತ್ಮಕ ಮತ್ತು ಅರ್ಥಪೂರ್ಣ ಅಧಿವೇಶನವನ್ನು ಎದುರು ನೋಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಡಿಸೆಂಬರ್ 1 ರಂದು ಪ್ರಾರಂಭವಾಗಿ ಡಿಸೆಂಬರ್ 19 ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯಲಿದ್ದು, 19 ದಿನಗಳಲ್ಲಿ ಒಟ್ಟು ಹದಿನೈದು ಅಧಿವೇಶನಗಳನ್ನು ನಿಗದಿಪಡಿಸಲಾಗಿದೆ. ಸಂಸತ್ತಿನ ಇತರ ಅಧಿವೇಶನಗಳಿಗೆ ಹೋಲಿಸಿದರೆ ಇದು ಕಡಿಮೆ ಅವಧಿ ಎನ್ನಲಾಗಿದೆ.

ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶದ ಅಧಿವೇಶನದಲ್ಲಿ ಸದ್ದು ಮಾಡಲಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದು, 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಎರಡನೇ ಹಂತದ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆ (SIR) ಗೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಹಾಗೆಯೇ ಮತದಾರರ ಪಟ್ಟಿಗಳಲ್ಲಿನ ಅಕ್ರಮಗಳ ಬಗ್ಗೆಯೂ ವಿರೋಧ ಪಕ್ಷಗಳು ತಮ್ಮ ಆತಂಕ ವ್ಯಕ್ತಪಡಿಸಬಹುದು.

ಈ ನಡುವೆ 129 ಮತ್ತು 130 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಗಳು, ಸಾರ್ವಜನಿಕ ಟ್ರಸ್ಟ್ ಮಸೂದೆ ಮತ್ತು ದಿವಾಳಿತನ ಮಸೂದೆ ಸೇರಿದಂತೆ ಹಲವಾರು ಪ್ರಮುಖ ಮಸೂದೆಗಳ ಅಂಗೀಕಾರಕ್ಕೆ ಸರ್ಕಾರ ಒತ್ತಾಯಿಸುವ ನಿರೀಕ್ಷೆಯಿದೆ.(ಏಜೆನ್ಸೀಸ್​)