ನ್ಯೂಸ್

ಕಾಶ್ಮೀರದಲ್ಲಿ ಉಗ್ರರ ದಾಳಿ: ಸೌದಿ ಪ್ರವಾಸ ಮೊಟಕುಗೊಳಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ! PM Modi

PM Modi : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಿನ್ನೆ (ಏಪ್ರಿಲ್​ 22) ನಡೆದ ಮಾರಕ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ (ಏಪ್ರಿಲ್​ 23) ಬೆಳಗ್ಗೆ ಸೌದಿ ಅರೇಬಿಯಾ ಭೇಟಿಯನ್ನು ಮೊಟಕುಗೊಳಿಸಿ ರಾಜಧಾನಿ ನವದೆಹಲಿಗೆ ಮರಳಿದರು.

ಇಂದು ಬೆಳಗ್ಗೆ ಭದ್ರತೆ ಕುರಿತು ಸಚಿವ ಸಂಪುಟ ಸಮಿತಿ (ಸಿಸಿಎಸ್) ಸಭೆ ನಡೆಯುವ ಸಾಧ್ಯತೆ ಇದ್ದು, ಅದರ ಅಧ್ಯಕ್ಷತೆಯನ್ನು ಪ್ರಧಾನಿ ಮೋದಿ ವಹಿಸಲಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ಅಂದಹಾಗೆ ಪ್ರಧಾನಿ ಮೋದಿ ಅವರು ನಿಗದಿಯಂತೆ ಇಂದು ರಾತ್ರಿ ಸೌದಿಯಿಂದ ಹಿಂದಿರುಗಬೇಕಿತ್ತು. ಆದರೆ, ಕಾಶ್ಮೀರ ದಾಳಿಯ ಬಗ್ಗೆ ಗೊತ್ತಾಗುತ್ತಿದ್ದಂತೆ ಮಂಗಳವಾರ ತಡರಾತ್ರಿಯೇ ಜೆಡ್ಡಾದಿಂದ ಹೊರಟರು. ಸರ್ಕಾರಿ ಮೂಲಗಳ ಪ್ರಕಾರ, ಸೌದಿ ಅಧಿಕಾರಿಗಳು ಆಯೋಜಿಸಿದ್ದ ಅಧಿಕೃತ ಭೋಜನಕೂಟವನ್ನು ಸಹ ಬಿಟ್ಟು ಪ್ರಧಾನಿ ಮೋದಿ ತಾಯ್ನಾಡಿಗೆ ಮರಳಿದ್ದಾರೆ.

ಇನ್ನು ಜೆಡ್ಡಾದಲ್ಲಿ ನಡೆದ ದ್ವಿಪಕ್ಷೀಯ ಸಭೆಯಲ್ಲಿ ಪ್ರಧಾನಿ ಮೋದಿ ಮತ್ತು ಸೌದಿ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್, ಪಹಲ್ಗಾಮ್ ದಾಳಿಯ ಬಗ್ಗೆ ಚರ್ಚಿಸಿದರು ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಇದಕ್ಕೂ ಮೊದಲು, ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ಪ್ರಧಾನಿ ಮೋದಿ ಅವರಿಗೆ ವಿವರಿಸಿದರು. ಸೂಕ್ತ ಕ್ರಮಗಳನ್ನು ತೆಗೆದುಕೊಂಡು ಸ್ಥಳಕ್ಕೆ ಭೇಟಿ ನೀಡುವಂತೆ ಅಮಿತ್​ ಷಾರನ್ನು ಮೋದಿ ಕೇಳಿಕೊಂಡರು. ಪರಿಸ್ಥಿತಿಯನ್ನು ಅವಲೋಕಿಸಲು ಅಮಿತ್ ಷಾ ಪ್ರಸ್ತುತ ಶ್ರೀನಗರದಲ್ಲಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಬಾಧಿತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುತ್ತಿದೆ. ಈ ಹೇಯ ಕೃತ್ಯದ ಹಿಂದಿರುವವರನ್ನು ಸುಮ್ಮನೇ ಬಿಡುವುದಿಲ್ಲ. ಅವರ ದುಷ್ಟ ಕಾರ್ಯಸೂಚಿ ಎಂದಿಗೂ ಯಶಸ್ವಿಯಾಗುವುದಿಲ್ಲ. ಭಯೋತ್ಪಾದನೆಯ ವಿರುದ್ಧ ಹೋರಾಡುವ ನಮ್ಮ ಸಂಕಲ್ಪ ಅಚಲ ಮತ್ತು ಅದು ಇನ್ನಷ್ಟು ಬಲಗೊಳ್ಳುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಪಹಲ್ಗಾಮ್​ ದಾಳಿ ಹಿನ್ನೆಲೆ

ನಿನ್ನೆ (ಏಪ್ರಿಲ್​ 22) ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಕ್ರೂರ ದಾಳಿ ನಡೆಸಿದ್ದಾರೆ. ಕಾಶ್ಮೀರದ ಸೌಂದರ್ಯವನ್ನು ನೋಡಲು ಬಂದಿದ್ದ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಲಾಗಿದ್ದು, ಇಸ್ರೇಲ್ ಮತ್ತು ಇಟಲಿಯ ತಲಾ ಒಬ್ಬರು, ಇಬ್ಬರು ಸ್ಥಳೀಯರು, ಕರ್ನಾಟಕದ ಇಬ್ಬರು ಸೇರಿದಂತೆ ಒಟ್ಟು 28 ಜನರು ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಈ ದಾಳಿಯ ಹೊಣೆಯನ್ನು ಲಷ್ಕರ್ ಎ ತೊಯ್ಬಾ ಉಗ್ರ ಸಂಘಟನೆಯೊಂದಿಗೆ ಸಂಬಂಧ ಹೊಂದಿರುವ ‘ದಿ ರೆಸಿಸ್ಟನ್ಸ್ ಫ್ರಂಟ್’ ವಹಿಸಿಕೊಂಡಿದೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪಟ್ಟಣದಿಂದ 6 ಕಿ.ಮೀ ದೂರದಲ್ಲಿರುವ ಪ್ರಸಿದ್ಧ ಪ್ರವಾಸಿ ತಾಣ ಬೈಸರನ್ ಕಣಿವೆಯ ಹುಲ್ಲುಗಾವಲಿನ ಪ್ರದೇಶವನ್ನು ವೀಕ್ಷಿಸುವಾಗ ಮಂಗಳವಾರ ಮಧ್ಯಾಹ್ನ 2.30ರ ಸುಮಾರಿಗೆ ಪ್ರವಾಸಿಗರನ್ನು ಸುತ್ತುವರೆದ ಭಯೋತ್ಪಾದಕರು ಮನಬಂದಂತೆ ಗುಂಡು ಹಾರಿಸಿದರು. ಕೆಲವು ಭಯೋತ್ಪಾದಕರು, ಹೆಸರುಗಳನ್ನು ಕೇಳುತ್ತಾ ಮತ್ತು ಗುರುತಿನ ಚೀಟಿಗಳನ್ನು ನೋಡುತ್ತಾ, ಹಿಂದೂಗಳನ್ನು ಗುಂಡು ಹಾರಿಸಿ ಕೊಂದರು. ವಿಶೇಷವಾಗಿ ಹಿಂದೂಗಳನ್ನು ಗುರಿಯಾಗಿಸಿಕೊಂಡಂತೆ ತೋರುತ್ತದೆ. ಇಡೀ ಜಗತ್ತು ಈ ಘಟನೆಯನ್ನು ಖಂಡಿಸುತ್ತಿದೆ. ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಭಯೋತ್ಪಾದಕರನ್ನು ನಿರ್ಮೂಲನೆ ಮಾಡದೇ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. (ಏಜೆನ್ಸೀಸ್​)