ನ್ಯೂಸ್

ಕೋಳಿ ತ್ಯಾಜ್ಯ ನಿರ್ವಹಣಾ ಘಟಕ ಬೇರೆಡೆಗೆ ಸ್ಥಳಾಂತರ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ದಕ್ಷಿಣ ಜಿಲ್ಲೆಯ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಂಡೂರ್ ಗ್ರಾಮದಲ್ಲಿ ಖಾಸಗಿ ವ್ಯಕ್ತಿಗಳು ನಡೆಸುತ್ತಿರುವ ಕೋಳಿ ತ್ಯಾಜ್ಯ ನಿರ್ವಹಣಾ ಘಟಕವನ್ನು ಬೇರೆಡೆಗೆ ಸ್ಥಳಾಂತರಿಸಲು ಆದೇಶಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಈ ಕುರಿತಂತೆ ಬಿ.ಪ್ರವೀಣ್ ಸೇರಿ 11 ಮಂದಿ ಸ್ಥಳೀಯ ನಿವಾಸಿಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್. ವಿ ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ ಪ್ರತಿವಾದಿಗಳಾದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಜಿಲ್ಲಾ ಆರೋಗ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಪುತ್ತೂರು ತಹಶೀಲ್ದಾರ್‌ಗೆ ನೋಟಿಸ್ ಜಾರಿಗೊಳಿಸಿತು.

ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಂಡೂರ್ ಗ್ರಾಮದಲ್ಲಿ ಕೇಶವ ಪಾಟಾಳಿ ಮತ್ತು ಪಿ.ಮನು ಪಟಾಳಿ ಎಂಬುವವರು ಕೋಳಿ ತ್ಯಾಜ್ಯ ನಿರ್ವಹಣಾ ಘಟಕವನ್ನು ನಿರ್ವಹಿಸುತ್ತಿದ್ದಾರೆ. ಘಟಕದಿಂದ ಸುಮಾರು ಎರಡು ಕಿ.ಮೀ ವ್ಯಾಪ್ತಿ ಪ್ರದೇಶದಲ್ಲಿ ದುರ್ವಾಸನೆ ಹೊರಹೊಮ್ಮುತ್ತಿದೆ. ಇದರಿಂದ ಪರಿಸರ ಹಾಗೂ ಗಾಳಿ ಕಲುಷಿತಗೊಂಡಿದೆ.

ಸಾರ್ವಜನಿಕರಿಗೆ ಉಸಿರಾಡಲು ಕಷ್ಟಕರವಾದ ವಾತಾವರಣ ನಿರ್ಮಾಣವಾಗಿದೆ. ಘಟಕದ ಸಮೀಪವೇ ಸರ್ಕಾರ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿ ಕೇಂದ್ರಗಳಿವೆ. ಅವುಗಳ ವಿದ್ಯಾರ್ಥಿಗಳು ದುರ್ವಾಸನೆಯಿಂದ ವಿವಿಧ ರೀತಿಯ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದರೆ. ಆದ್ದರಿಂದ ಘಟಕವನ್ನು ಬೇರೆಡೆಗೆ ಸ್ಥಳಾಂತರಿಸಲು ಸರ್ಕಾರಿ ಪ್ರಾಧಿಕಾರಗಳಿಗೆ ನಿರ್ದೇಶಿಸಬೇಕು ಎಂದು ಕೋರಿದರು.