ಬೆಂಗಳೂರು: ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ನರೇಶ್ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ ಅವರ ಚೊಚ್ಚಲ ನಿರ್ದೇಶನದಲ್ಲಿ ಮೂಡಿಬರಲಿರುವ ಚಿತ್ರಕ್ಕೆ ನಟ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿದ್ದು, ಈ ಸಿನಿಮಾಗೆ "ಚೀತಾ" ಎಂದು ಶೀರ್ಷಿಕೆ ಇಡಲಾಗಿದೆ. ನವೆಂಬರ್ 01 ಕನ್ನಡ ರಾಜ್ಯೋತ್ಸವದಂದು ಚಿತ್ರದ ಮುಹೂರ್ತ ಸಮಾರಂಭ ನಡೆಯಿತು.
ಚಿತ್ರದ ಮುಹೂರ್ತ ಸಮಾರಂಭ ಕನ್ನಡ ರಾಜ್ಯೋತ್ಸವದ ಶುಭದಿನದಂದು ಹೆಚ್.ಎಂ.ಟಿ ಶಾಲೆಯ ಆಟದ ಮೈದಾನದಲ್ಲಿ ನೆರವೇರಿತು. ಪ್ರಜ್ವಲ್ ದೇವರಾಜ್ ಕನ್ನಡ ಭಾವುಟ ಹಾರಿಸುವುದರ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ಮುಹೂರ್ತ ಸಮಾರಂಭದ ನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದ್ದಾರೆ.
ಕಳೆದ 23 ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಡ್ಯಾನ್ಸರ್ ಆಗಿ, ಡ್ಯಾನ್ಸ್ ಮಾಸ್ಟರ್ ಆಗಿ ಕಾರ್ಯ ನಿರ್ವಹಿಸಿದ್ದೇನೆ ಎಂದು ಮಾತನ್ನು ಆರಂಭಿಸಿದ ನಿರ್ದೇಶಕ ರಾಜ ಕಲೈ ಕುಮಾರ್, "ಇದು ನನ್ನ ನಿರ್ದೇಶನದ ಮೊದಲ ಚಿತ್ರ. ಪ್ರಜ್ವಲ್ ಅವರ 39ನೇ ಚಿತ್ರವನ್ನು ನಾನು ನಿರ್ದೇಶಿಸುತ್ತಿದ್ದೇನೆ. ಇನ್ನು ಚಿತ್ರದ ಕುರಿತು ಹೇಳುವುದಾದರೆ, ಇದೊಂದು ಮಾರ್ಕೆಟ್ನಲ್ಲಿ ನಡೆಯುವ ಕಥೆ. ಅಲ್ಲಿನ ವ್ಯಾಪಾರ, ವಹಿವಾಟು ಹಾಗೂ ಅಲ್ಲಿ ಕೆಲಸ ಮಾಡುವವರು ಎಲ್ಲಾ ಸೂಪರ್ ಫಾಸ್ಟ್. ನಮ್ಮ ಚಿತ್ರದ ನಾಯಕ ಕೂಡ ಚಿರತೆಯಷ್ಟೇ ವೇಗದವನು" ಎಂದರು.
"ಹಾಗಾಗಿ ನಮ್ಮ ಚಿತ್ರಕ್ಕೆ ಚೀತಾ ಎಂದು ಹೆಸರಿಟ್ಟಿದ್ದೇವೆ. ಕಲಾ ನಿರ್ದೇಶಕ ಶಿವು ಅವರು ಅದ್ದೂರಿ ಮಾರ್ಕೆಟ್ ಸೆಟ್ ನಿರ್ಮಾಣ ಮಾಡುತ್ತಿದ್ದಾರೆ. ಆ ಸೆಟ್ನಲ್ಲೇ ಚಿತ್ರದ ಬಹುತೇಕ ಚಿತ್ರೀಕರಣ ನಡೆಯುತ್ತದೆ. ಶೃತಿ ಹರಿಹರನ್, ಗುರುರಾಜ್ ಜಗ್ಗೇಶ್, ಶಿವರಾಜ ಕೆ.ಆರ್ ಪೇಟೆ, ತೆಲುಗು ನಟ ಸುನೀಲ್, ಗೋವಿಂದೇ ಗೌಡ, ಅಭಯ್ ಪುನೀತ್ ಮುಂತಾದವರು ನಮ್ಮ ಚಿತ್ರದಲ್ಲಿ ನಟಿಸುತ್ತಿದ್ದಾರೆ. ನವೆಂಬರ್ 6 ರಿಂದ ಚಿತ್ರೀಕರಣ ಆರಂಭವಾಗಲಿದೆ" ಎಂದರು.
"ಕಲೈ ಮಾಸ್ಟರ್ ನೃತ್ಯ ನಿರ್ದೇಶಕರಾದಾಗ ನೃತ್ಯ ಸಂಯೋಜಿಸಿದ ಮೊದಲ ಗೀತೆಗೂ ನಾನೇ ನಾಯಕನಾಗಿದ್ದೆ. ಈಗ ಅವರು ನಿರ್ದೇಶಿಸುತ್ತಿರುವ ಮೊದಲ ಚಿತ್ರಕ್ಕೂ ನಾನೇ ನಾಯಕ. ನಿರ್ದೇಶಕರು ಒಳ್ಳೆ ಕಥೆ ಸಿದ್ದ ಮಾಡಿಕೊಂಡಿದ್ದಾರೆ. ಮಾರ್ಕೆಟ್ನಲ್ಲೇ ಹುಟ್ಟಿ, ಅಲ್ಲೇ ಬೆಳೆಯುವ ಹುಡುಗನ ಪಾತ್ರ ನನ್ನದು" ಎಂದು ನಾಯಕ ಪ್ರಜ್ವಲ್ ದೇವರಾಜ್ ಹೇಳಿದರು.
ಈ ಚಿತ್ರದ ಮತ್ತೊಂದು ವಿಶೇಷವೆಂದರೆ ಮೊದಲ ಬಾರಿಗೆ ಸಿನಿಮಾದ ಅಷ್ಟು ತಂತ್ರಜ್ಞರ ಫೋಟೋ ಶೂಟ್ ಮಾಡಿಸುವುದರ ಮೂಲಕ ತೆರೆಯ ಹಿಂದೆ ದುಡಿಯುವ ತಂತ್ರಜ್ಞರಿಗೆ ವಿಶೇಷ ಗೌರವ ನೀಡಿದ್ದಾರೆ.