ನ್ಯೂಸ್

ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ : ಎಸ್‌ಐಟಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಅತ್ಯಾಚಾರ ಎಸಗಿದ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಕೋರಿ 2ನೇ ಬಾರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಈ ಕುರಿತಂತೆ ಪ್ರಜ್ವಲ್ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದು, ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ (ಸಿಐಡಿ ಎಸ್‌ಐಟಿ) ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರ ಪೀಠ ಸೂಚಿಸಿದೆ. ಅಲ್ಲದೆ, ಅರ್ಜಿಯಲ್ಲಿ ದೂರುದಾರೆಯನ್ನು ಪ್ರತಿವಾದಿಯನ್ನಾಗಿಸುವಂತೆ ಪ್ರಜ್ವಲ್ ಪರ ವಕೀಲರಿಗೆ ಸೂಚಿಸಿ, ವಿಚಾರಣೆಯನ್ನು ಏ.7ಕ್ಕೆ ಮುಂದೂಡಿತು.

ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪ್ರಜ್ವಲ್ ಮತ್ತು ಅವರ ತಂದೆ ಎಚ್.ಡಿ. ರೇವಣ್ಣ ವಿರುದ್ಧ ಅವರ ಮನೆ ಕೆಲಸ ಮಾಡುತ್ತಿದ್ದ ಮಹಿಳೆಯು ಮೊದಲ ಬಾರಿಗೆ ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ 2024ರ ಏಪ್ರಿಲ್‌ನಲ್ಲಿ ದೂರು ದಾಖಲಿಸಿದ್ದರು. ಇದೇ ಪ್ರಕರಣ ಸಂಬಂಧ ವಿಚಾರಣಾ ನ್ಯಾಯಾಲಯವು ಪ್ರಜ್ವಲ್‌ಗೆ ಎರಡು ಬಾರಿ, ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಒಂದೊಂದು ಬಾರಿ ಜಾಮೀನು ನಿರಾಕರಿಸಿವೆ. ಪ್ರಜ್ವಲ್ ವಿರುದ್ಧ ಒಟ್ಟು ನಾಲ್ಕು ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ.