ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ತಿಂಗಳು ಆಗಸ್ಟ್ 24ರಂದು ಕೈವ್‌ಗೆ ಭೇಟಿ ನೀಡುವ ಸಾಧ್ಯತೆಯಿದೆ. ರಷ್ಯಾ-ಯೂಕ್ರೇನ್ ಯುದ್ಧ ಆರಂಭವಾದ ನಂತರ ಮೊದಲ ಬಾರಿಗೆ ಯೂಕ್ರೇನಿಯನ್ ಸ್ವಾತಂತ್ರ್ಯ ದಿನದಂದು ಪ್ರಧಾನಿ ಮೋದಿ ಅವರು ಕೈವ್‌ಗೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ರಾಜತಾಂತ್ರಿಕ ಮೂಲಗಳನ್ನುಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ.
ಈ ಭೇಟಿಯಲ್ಲಿ ಪ್ರಧಾನಿ ಮೋದಿ ಯೂಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಭೇಟಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಕಳೆದ ತಿಂಗಳು ಇಟಲಿಯ ಅಪುಲಿಯಾದಲ್ಲಿ ನಡೆದ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಯೂಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಪ್ರಧಾನಿ ಮೋದಿ ಭೇಟಿ ಮಾಡಿದ್ದರು. ಲೋಕಸಭೆ ಚುನಾವಣೆಯಲ್ಲಿ ಸತತ ಮೂರನೇ ಬಾರಿಗೆ ಜಯ ಸಾಧಿಸಿದ ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ ಝೆಲೆನ್ಸ್ಕಿ ಅವರು ಯೂಕ್ರೇನ್‌ಗೆ ಭೇಟಿ ನೀಡುವಂತೆ ಆಹ್ವಾನಿಸಿದ್ದರು. ಆದರೆ ಮುಂದಿನ ತಿಂಗಳ ಪ್ರಧಾನಿ ಮೋದಿ ಅವರ ಕೈವ್ ಭೇಟಿ ಕುರಿತು ಭಾರತ ಅಥವಾ ಯೂಕ್ರೇನ್ನಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ.
ಮಾರ್ಚ್ 2024ರಲ್ಲಿ ಅಧ್ಯಕ್ಷ ಝೆಲೆನ್ಸ್ಕಿ ಅವರೊಂದಿಗೆ ದೂರವಾಣಿ ಕರೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು ಭಾರತ-ಯೂಕ್ರೇನ್ ಪಾಲುದಾರಿಕೆಯನ್ನು ಬಲಪಡಿಸುವ ಮಾರ್ಗಗಳ ಕುರಿತು ಚರ್ಚಿಸಿದರು. ಇದೇ ಸಮಯದಲ್ಲಿ ಸಂಘರ್ಷ ಪರಿಹಾರಕ್ಕೆ ಸಂವಾದ ಮತ್ತು ರಾಜತಾಂತ್ರಿಕ ಮಾರ್ಗವನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಅಲ್ಲದೆ ಶಾಂತಿಯುತವಾಗಿ ಪರಿಹರಿಸಲು ಭಾರತವು ತನ್ನ ಎಲ್ಲ ಪ್ರಯತ್ನಗಳನ್ನು ಮುಂದುವರಿಸುತ್ತದೆ ಎಂದು ಹೇಳಿದ್ದರು.
ಜುಲೈ 8-9 ರಂದು ಮೋದಿ ರಷ್ಯಾಕ್ಕೆ ಭೇಟಿ ನೀಡಿದ್ದರು. ಪ್ರಧಾನಿ ಮೋದಿ ಅವರ ಈ ಭೇಟಿಯನ್ನು ಅಮೆರಿಕ ಟೀಕಿಸಿತ್ತು. ಮೋದಿಯವರ ರಷ್ಯಾ ಭೇಟಿ ಬಗ್ಗೆ ಹಲವು ಪಾಶ್ಚಿಮಾತ್ಯ ರಾಷ್ಟ್ರಗಳು ಅಸಮಾಧಾನ ವ್ಯಕ್ತಪಡಿಸಿದ್ದವು. ಪ್ರಧಾನಿ ಮೋದಿಯವರ ರಷ್ಯಾ ಭೇಟಿಯ ಕುರಿತು ಅಮೆರಿಕದ ಕಳವಳವನ್ನು ತಿರಸ್ಕರಿಸಿರುವ ಭಾರತ, ಜಗತ್ತಿನ ಎಲ್ಲಾ ದೇಶಗಳಿಗೆ ಆದ್ಯತೆ ನೀಡುವ ಸ್ವಾತಂತ್ರ್ಯ ಇದೆ ಮತ್ತು ಅಂತಹ ವಾಸ್ತವಗಳ ಬಗ್ಗೆ ಎಲ್ಲರೂ ಜಾಗೃತರಾಗಿರಬೇಕು ಎಂದು ಹೇಳಿದೆ. (ಏಜೆನ್ಸೀಸ್)