ತೀರ್ಥಹಳ್ಳಿಯಲ್ಲಿ ಏರ್ಪಡಿಸಿದ್ದ ಬೂತ್ ಮಟ್ಟದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಬಿ.ವೈ.ರಾಘವೇಂದ್ರ ಮಾತನಾಡಿದರು. ಬೋಜೇಗೌಡ, ಟಿ.ಡಿ.ಮೇಘರಾಜ್, ಹೆದ್ದೂರು ನವೀನ್ ಇತರರಿದ್ದರು.  
ನ್ಯೂಸ್

ಮೋದಿ ಮತ್ತೊಮ್ಮೆ ಪ್ರಧಾನಿ ಶತಃಸಿದ್ಧ

ತೀರ್ಥಹಳ್ಳಿ: ಪಕ್ಷದ ಕಾರ್ಯಕರ್ತರ ಶ್ರಮದಿಂದ ಮೂರು ಬಾರಿ ಸಂಸತ್ ಸದಸ್ಯನಾಗುವ ದೊರೆತ ಅವಕಾಶದಲ್ಲಿ ಶಕ್ತಿ ಮೀರಿ ಕೆಲಸ ಮಾಡಿದ್ದೇನೆ. ನಿಮ್ಮೆಲ್ಲರ ಆಶೀರ್ವಾದದಿಂದ ನಾಲ್ಕನೇ ಬಾರಿಗೆ ಗೆಲ್ಲುವ ಭರವಸೆ ಇದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದ ಸಂಸ್ಕೃತಿ ಮಂದಿರದ ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕ್ಷೇತ್ರದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಭಾರತ ವಿಶ್ವಗುರು ಆಗುವ ನಿಟ್ಟಿನಲ್ಲಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವುದು ಶತಃಸಿದ್ಧ. ಪಕ್ಷಕ್ಕೆ ಶಕ್ತಿ ತುಂಬಿದ ಈ ಕ್ಷೇತ್ರದಲ್ಲಿ ಜೆಡಿಎಸ್ ಜತೆ ಬೆರೆತು ಮೋದಿ ಅವರ ಕೈ ಬಲಪಡಿಸಲು ಕಾರ್ಯಕರ್ತರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ರಾಷ್ಟ್ರದ ಭವಿಷ್ಯ ನಿರ್ಧಾರ ಮಾಡುವ ಚುನಾವಣೆ ಇದಾಗಿದೆ. ಕಾರ್ಯಕರ್ತರು ಸಂಕಲ್ಪ ತೊಡುವ ಮೂಲಕ ತಾವೇ ಅಭ್ಯರ್ಥಿಗಳಂತೆ ತಮ್ಮ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸಬೇಕಿದೆ. ಕ್ಷೇತ್ರವನ್ನು ಮಾದರಿಯಾಗಿ ಅಭಿವೃದ್ಧಿ ಪಥಕ್ಕೆ ಕೊಂಡೊಯ್ದಿರುವ ರಾಘವೇಂದ್ರ ಗೆಲುವು ಖಚಿತ. ದೇಶದ ಭವಿಷ್ಯದ ದೃಷ್ಟಿಯಿಂದ ಈ ಬಾರಿ ಕಾಂಗ್ರೆಸ್ ಮತದಾರರ ಒಲವು ಕೂಡ ಬಿಜೆಪಿ ಕಡೆಗೆ ವ್ಯಕ್ತವಾಗುತ್ತಿದೆ ಎಂದರು.
ತಾಲೂಕು ಜೆಡಿಎಸ್ ಅಧ್ಯಕ್ಷ ಕುಣಜೆ ಕಿರಣ್ ಮಾತನಾಡಿ, ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಗೌರವ ತಂದಿರುವ ನರೇಂದ್ರ ಮೋದಿ ಮತ್ತೊಮ್ಮೆ ಈ ದೇಶದ ಪ್ರಧಾನಿಯನ್ನಾಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕಿದೆ. ಕಾಂಗ್ರೆಸ್ ಈ ದೇಶಕ್ಕೆ ಮಾರಕವಾಗಿದ್ದು ಬಿಜೆಪಿಯಿಂದಾಗಿಯೇ ಭಾರತ ಉಳಿದಿದೆ. ರಾಘವೇಂದ್ರ ಅವರನ್ನು ಅತ್ಯಧಿಕ ಮತಗಳ ಅಂತರದಲ್ಲಿ ಗೆಲ್ಲಿಸಲು ಶ್ರಮಿಸುವುದಾಗಿ ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಬೋಜೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಮಂಡಲ ಅಧ್ಯಕ್ಷ ಹೆದ್ದೂರು ನವೀನ್, ಜೆಡಿಎಸ್ ಜಿಲ್ಲಾಧ್ಯಕ್ಷ ಕಡಿದಾಳು ಗೋಪಾಲ್, ಕ್ಷೇತ್ರದ ವೀಕ್ಷಕರಾದ ರಘುಪತಿ ಭಟ್, ಪುಣ್ಯಪಾಲ್, ಕೆ.ನಾಗರಾಜ ಶೆಟ್ಟಿ ಇತರರಿದ್ದರು. ರಕ್ಷಿತ್ ಮೇಗರವಳ್ಳಿ ನಿರೂಪಿಸಿದರು.