ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಡಿಸಿ ಕಚೇರಿ ಎದುರು ರೈತ ಸಂಘ ನಡೆಸಿದ ಪ್ರತಿಭಟನೆಯಲ್ಲಿ ಎಚ್.ಆರ್.ಬಸವರಾಜಪ್ಪ ಮಾತನಾಡಿದರು. ಹಾಲೇಶಪ್ಪ, ಜಿ.ಎನ್.ಪಂಚಾಕ್ಷರಿ, ಎಂ.ಮಂಜಪ್ಪ, ಜ್ಞಾನೇಶ್, ಎಂ.ಮಹದೇವಪ್ಪ, ಹಿಟ್ಟೂರು ರಾಜು, ಕೆ.ರಾಘವೇಂದ್ರ ಇತರರಿದ್ದರು. 
ನ್ಯೂಸ್

ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ

ಶಿವಮೊಗ್ಗ: ರೈತ ವಿರೋಧಿ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯದೆ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಅನುಸರಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ರೈತ ಸಂಘ ಹಾಗೂ ಹಸಿರು ಸೇನೆ ಪ್ರಮುಖರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಚುನಾವಣಾ ಪ್ರಣಾಳಿಕೆಯಲ್ಲಿ ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯುವ ಭರವಸೆ ನೀಡಲಾಗಿತ್ತು. ವಿದ್ಯುತ್ ಖಾಸಗೀಕರಣ ಮಾಡುವುದಿಲ್ಲವೆಂದು ಭರವಸೆ ಕೊಟ್ಟಿದ್ದರು. ಆದರೆ ಈಗ ಅದನ್ನು ನೆರವೇರಿಸದೆ ರೈತರಿಗೆ ದ್ರೋಹ ಮಾಡಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ದಲಿತರಿಗೆ, ರೈತರಿಗೆ, ಕಾರ್ಮಿಕರಿಗೆ ನ್ಯಾಯ ಒದಗಿಸುತ್ತೇವೆ ಎಂದು ಹೇಳಿತ್ತು. ಆದರೆ ಈಗ ಅದ್ಯಾವುದನ್ನೂ ಮಾಡಿಲ್ಲ. ದಲಿತರಿಗೆ ಮೀಸಲಿಟ್ಟ ಹಣವನ್ನು ಬೇರೆ ಇಲಾಖೆಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ರಾಜ್ಯ ಸರ್ಕಾರ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು. ವಿದ್ಯುತ್ ಖಾಸಗೀಕರಣ ಮಾಡಬಾರದು. ಕಾನೂನಾತ್ಮಕವಾಗಿ ಕನಿಷ್ಠ ಬೆಂಬಲ ಬೆಲೆ ಯೋಜನೆ ಜಾರಿ ಮಾಡಬೇಕು. ರೈತರ ಮೇಲೆ ದಾಖಲಿಸಿರುವ ಪ್ರಕರಣ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ರೈತ ಸಂಘದ ರಾಜ್ಯಾಧ್ಯಕ್ಷ ಎಚ್.ಆರ್.ಬಸವರಾಜಪ್ಪ, ರಾಜ್ಯ ಉಪಾಧ್ಯಕ್ಷ ಹಿಟ್ಟೂರು ರಾಜು, ಜಿಲ್ಲಾಧ್ಯಕ್ಷ ಕೆ.ರಾಘವೇಂದ್ರ, ಜಿಲ್ಲಾ ಉಪಾಧ್ಯಕ್ಷ ಎಂ.ಮಂಜಪ್ಪ, ಎಂ.ಮಹದೇವಪ್ಪ, ಶಿವಮೊಗ್ಗ ತಾಲೂಕು ಪ್ರಧಾನ ಕಾರ್ಯದರ್ಶಿ ಜ್ಞಾನೇಶ್, ಭದ್ರಾವತಿ ತಾಲೂಕು ಅಧ್ಯಕ್ಷ ಜಿ.ಎನ್.ಪಂಚಾಕ್ಷರಿ, ಪ್ರಧಾನ ಕಾರ್ಯದರ್ಶಿ ಹನುಮಂತಪ್ಪ, ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಹಾಲೇಶಪ್ಪ ಇತರರಿದ್ದರು.