ಶಿವಮೊಗ್ಗ: ಬೆಂಬಲ ಬೆಲೆ ಮೂಲಕ ಭತ್ತ ಹಾಗೂ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತ ವಿರೋಧಿ ನೀತಿ ಕೈಬಿಡಬೇಕು ಎಂದು ಒತ್ತಾಯಿಸಿ ರೈತ ಸಂಘದ ನೇತೃತ್ವದಲ್ಲಿ ರೈತರು ಗುರುವಾರ ನಗರದ ಎಂಆರ್‌ಎಸ್ ವೃತ್ತದಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
ಕೇರಳದ ಮಾದರಿಯಲ್ಲಿ ರಾಜ್ಯದಲ್ಲೂ ತರಕಾರಿ ಬೆಳೆಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡಬೇಕು. ಮೆಕ್ಕೆಜೋಳ ಪ್ರತಿ ಕ್ವಿಂಟಾಲ್‌ಗೆ 3 ಸಾವಿರ ರೂ. ಬೆಂಬಲ ಬೆಲೆ ನಿಗದಿಪಡಿಸಬೇಕು. ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಿ ರೈತರಿಗೆ ಅನುಕೂಲ ಕಲ್ಪಿಸಬೇಕೆಂದು ಒತ್ತಾಯಿಸಿದರು. ಸರ್ಕಾರ ರೈತ, ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುವ ಮೂಲಕ ದುಡಿಯುವ ಜನರನ್ನು ಬೀದಿಗೆ ತಳ್ಳುವ ಕೆಲಸ ಮಾಡುತ್ತಿವೆ. ಇದರಿಂದ ರೈತರು ಶಾಶ್ವತವಾಗಿ ಕೃಷಿಯಿಂದ ಹೊರಗುಳಿಯುವ ಆತಂಕ ಎದುರಾಗಿದೆ. ಭೂ ಸುಧಾರಣಾ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತಂದಿರುವುದರಿಂದ ಸಣ್ಣ ಮತ್ತು ಮಧ್ಯಮ ವರ್ಗದ ರೈತರು ಶ್ರೀಮಂತರಿಗೆ ಮಾರುವ ಅಪಾಯವಿದೆ. ಈ ಕಾಯ್ದೆಯನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಎಚ್.ಆರ್.ಬಸವರಾಜಪ್ಪ, ಜಿಲ್ಲಾಧ್ಯಕ್ಷ ಎಸ್.ಶಿವಮೂರ್ತಿ, ಪ್ರಧಾನ ಕಾರ್ಯದರ್ಶಿ ಇ.ಬಿ.ಜಗದೀಶ್, ಪ್ರಮುಖರಾದ ಟಿ.ಎಂ. ಚಂದ್ರಪ್ಪ, ಕೆ.ರಾಘವೇಂದ್ರ, ಜ್ಞಾನೇಶ್, ಹಿಟ್ಟೂರು ರಾಜು, ನಾಗರಾಜ್ ಪುರದಾಳು ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.