ನವದೆಹಲಿ: ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ಕೊಟ್ಟಿರುವ ಹರ್ ಘರ್ ತಿರಂಗಾ ಅಭಿಯಾನ ಇಂದಿನಿಂದ ಆರಂಭವಾಗಿದ್ದು, ಇಂದು ಬೆಳಗ್ಗೆ ದೇಶದ ಹಲವಡೆ ಜನರು ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ದೇಶಪ್ರೇಮದ ಕಹಳೆಯನ್ನು ಮೊಳಗಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಅವರು ದೆಹಲಿಯಲ್ಲಿರುವ ತಮ್ಮ ನಿವಾಸದಲ್ಲಿ ತಮ್ಮ ಪತ್ನಿಯೊಂದಿಗೆ ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.
ಉತ್ತರಾಖಂಡದಲ್ಲಿ 14,000 ಅಡಿ ಎತ್ತರದಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ (ITBP) ಸಿಬ್ಬಂದಿ ರಾಷ್ಟ್ರಧ್ವಜ ಹಾರಿಸುವ ಮೂಲಕ ಆಕಾಶದ ಎತ್ತರಕ್ಕೂ ದೇಶಾಭಿಮಾನ ಮುಟ್ಟುವಂತೆ ಘೋಷಣೆ ಕೂಗಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೆಂಗಳೂರಿನ ತಮ್ಮ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಅಭಿಯಾನಕ್ಕೆ ಕೈಜೋಡಿಸಿದರು. ಸಚಿವ ಮುರುಗೇಶ್ ನಿರಾಣಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಅನೇಕ ನಾಯಕರು ತಮ್ಮ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿದ್ದಾರೆ.
ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಸಹ ತಮ್ಮ ಗೃಹ ಕಚೇರಿಯಲ್ಲಿ ಧ್ವಜಾರೋಹಣ ಮಾಡಿದರು. ದೇಶದ ಜನರು ಈ ಅಭಿಯಾನದಲ್ಲಿ ಪಾಲ್ಗೊಂಡಿದ್ದು, ತಮ್ಮ ಮನೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸುವ ಮೂಲಕ ರಾಷ್ಟ್ರಪ್ರೇಮವನ್ನು ಮೆರೆಯುತ್ತಿದ್ದಾರೆ.