ಕರ್ನಾಟಕ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂಗಾರು ಮಾರುತಗಳು ರಾಜ್ಯಾದ್ಯಂತ ಆವರಿಸಿಕೊಂಡಿದ್ದು, ಧಾರಾಕಾರ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಿಗೆ ಇಂದೂ ಕೂಡ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ರಾಜ್ಯದ 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗದಲ್ಲಿ ಇಂದು ಮತ್ತು ನಾಳೆ ರೆಡ್ ಅಲರ್ಟ್ ಇರಲಿದೆ. ಉಳಿದಂತೆ ಬಾಗಲಕೋಟೆ, ಹಾವೇರಿ, ಕೊಪ್ಪಳ, ವಿಜಯಪುರ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
ಕಲಬುರಗಿ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಳಗಾವಿ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಪ್ರತಿ ಗಂಟೆಗೆ ಚದುರಿದ ಗಾಳಿ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬೀಸಲಿದ್ದು, ಧಾರಾಕಾರ ಮಳೆಯ ಸಾಧ್ಯತೆ ಇದೆ. ಬಾಗಲಕೋಟೆ, ಕೊಪ್ಪಳ, ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ರಾಯಚೂರು, ಯಾದಗಿರಿ, ಕಲಬುರಗಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಗಾಳಿ ಮಳೆಯಾಗಲಿದೆ.
ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಮುಂದಿನ ದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ಡಿಗ್ರಿ ಮತ್ತು 21 ಡಿಗ್ರಿ ದಾಖಲಾಗುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಿದೆ.
ಮೀನುಗಾರರಿಗೆ ಎಚ್ಚರಿಕೆ..!
ಚಂಡಮಾರುತದಿಂದ ಗಂಟೆಗೆ 55 ಕಿ.ಮೀ ವರೆಗೆ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಕರ್ನಾಟಕ ಕರಾವಳಿಯ ಉದ್ದಕ್ಕೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಿದೆ.