ಬೆಂಗಳೂರು : (Rain in the state for 2 days) ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ತೇವಾಂಶ ಭರಿತ ಮೋಡಗಳು ಮುಂದಿನ 2 ದಿನ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಮಳೆ ಸುರಿಸಲಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ದಕ್ಷಿಣ ಕರ್ನಾಟಕ ಮತ್ತು ಕರಾವಳಿ ವ್ಯಾಪ್ತಿಯ ಜಿಲ್ಲೆಗಳಲ್ಲಿ ಬುಧವಾರ ಸಾಧಾರಣ ಮಳೆಯಾಯಿತು. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂ.ಗ್ರಾಮಾಂತರ, ಬೆಂ. ದಕ್ಷಿಣ, ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ನ.26, 27ರಂದು ಸಾಧಾರಣ ಮಳೆ ಬೀಳಲಿದೆ.
ಇದೇ ವೇಳೆ ಕೆಲವು ಜಿಲ್ಲೆಗಳಲ್ಲಿ ಬಿರುಗಾಳಿಯೂ ಬೀಸಲಿದೆ. ಬೆಂಗಳೂರಿನಲ್ಲಿ ಮುಂದಿನ 2 ದಿನ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳಲಿದೆ. ಈ ವೇಳೆ ಗುಡುಗು ಸಹಿತ ಮಳೆಯಾಗಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 20 ಡಿ.ಸೆ. ದಾಖಲಾಗಬಹುದು ಎಂದು ಇಲಾಖೆ ಮಾಹಿತಿ ನೀಡಿದೆ.
ಅರಬ್ಬಿ ಸಮುದ್ರ, ಬಂಗಾಳಕೊಲ್ಲಿಯಲ್ಲಿ ಏಕಕಾಲದಲ್ಲಿ ಉಂಟಾಗಿರುವ ತೇವಾಂಶ ಭರಿತ ಮೋಡಗಳು ಇರುವುದು ಮತ್ತು ಮೇಲ್ಮೈ ಸುಳಿಗಾಳಿಯಿಂದ ರಾಜ್ಯದಲ್ಲಿ 2 ದಿನ ಮಳೆ ಇರಲಿದೆ. ನ.28ರಿಂದ ಒಣಹವೆ ಮತ್ತೆ ಆರಂಭವಾಗಲಿದೆ. ಉತ್ತರ ಕರ್ನಾಟಕದಲ್ಲಿ ಎಂದಿನಂದತೆ ಒಣಹವೆ ಮುಂದುವರಿದಿದೆ.
ಡಾ.ಶ್ರೀನಿವಾಸರೆಡ್ಡಿ, ಹಿರಿಯ ಹವಾಮಾನ ತಜ್ಞ.