ನ್ಯೂಸ್

ರಾಜ್ಯದಲ್ಲಿ ಇನ್ನು 3 ದಿನ ಮಳೆ ಇನ್ನಷ್ಟು ಬಿರುಸು?; ಹಲವು ಜಿಲ್ಲೆಗಳಲ್ಲಿ ಯೆಲ್ಲೋ/ಆರೆಂಜ್ ಅಲರ್ಟ್​

Webdesk - Ravikanth

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಮುಂದಿನ 3 ದಿನ ಇನ್ನಷ್ಟು ಬಿರುಸುಗೊಳ್ಳಲಿದೆ. ಶುಕ್ರವಾರ ಬೆಂಗಳೂರು ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಭರ್ಜರಿ ಮಳೆ ಸುರಿದಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಏ.16, 17ರಂದು ಗುಡುಗು ಮಿಂಚು ಸಹಿತ ಜೋರು ಮಳೆ ಬೀಳುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನದಲ್ಲಿ ಏ.17ರಂದು ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಇದ್ದರೆ, ಏ.16, 18ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.

ಅದೇ ರೀತಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ವಿಜಯಪುರ, ಬೆಳಗಾವಿ ಹಾಗೂ ಬಾಗಲಕೋಟೆಯಲ್ಲಿ ಮುಂದಿನ 48 ಗಂಟೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.