ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದಲ್ಲಿ ಮುಂದಿನ 5 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲ ಭಾಗಗಳಲ್ಲಿ ಮುಂದಿನ 2 ದಿನ ಸಾಧಾರಣ ಮಳೆಯಾಗಲಿದ್ದು, ನ.1ರಿಂದ ಮೂರು ದಿನ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಮುಂದಿನ 2 ದಿನ ಒಣಹವೆ ಮುಂದುವರಿಯಲಿದ್ದು, ನ.1ರಿಂದ ಮಳೆ ಬೀಳುವ ಸಾಧ್ಯತೆ ಇದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಮಾರುತಗಳು ಉತ್ತರ ತಮಿಳುನಾಡು ಹಾಗೂ ದಕ್ಷಿಣ ಆಂಧ್ರದ ಕರಾವಳಿ ಭಾಗದತ್ತ ಚಲಿಸುತ್ತಿವೆ. ಈ ಹಿನ್ನೆಲೆಯಲ್ಲಿ ಆ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ. ಚನ್ನೈನಲ್ಲಿ ಮಳೆಯಾಗುತ್ತಿರುವ ಪರಿಣಾಮ ಬೆಂಗಳೂರಿನಲ್ಲಿ ಮುಂದಿನ 48 ಗಂಟೆ ಮಳೆಯಾಗಲಿದೆ. ಆದರೆ, ರಾಜ್ಯದಲ್ಲಿ ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ತೀರ ಕಡಿಮೆ ಇದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ಮಾಹಿತಿ ನೀಡಿದರು. ದೇಶದಲ್ಲಿ ಬುಧವಾರ (ಅ.28) ಹಿಂಗಾರು ಪ್ರವೇಶವಾಗಿದೆ ಎಂದರು.