ನವದೆಹಲಿ : ಬೆನ್ನು ನೋವಿನಿಂದ ಏಮ್ಸ್‌ಗೆ ದಾಖಲಾಗಿದ್ದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಶನಿವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಎರಡು ದಿನಗಳ ಹಿಂದೆ ಬೆನ್ನು ನೋವಿನ ಕಾರಣ ಆಸ್ಪತ್ರೆಯ ನರಶಸ್ತ್ರಚಿಕಿತ್ಸಾ ವಿಭಾಗಕ್ಕೆ ದಾಖಲಾಗಿದ್ದರು. ನೋವಿನ ತೀವ್ರತೆಯನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಏಮ್ಸ್ ವೈದ್ಯಕೀಯ ಕೋಶದ ಉಸ್ತುವಾರಿ ಡಾ.ರೀಮಾ ದಾದಾ ತಿಳಿಸಿದ್ದಾರೆ.
ಮೂರು ದಿನಗಳ ಹಿಂದೆ ರಾಜನಾಥ್ ಸಿಂಗ್ 73ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಆದರೆ ಅವರಿಗೆ ಇತ್ತೀಚಿನ ಸಾವ್ರತ್ರಿಕ ಚುನಾವಣೆಯಲ್ಲಿ ಹೆಚ್ಚು ಕೆಲಸ ಮಾಡಿದ್ದರಿಂದ ಬೆನ್ನು ನೋವು ಕಾಡುತ್ತಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು.
ಅವರು ಪ್ರಸ್ತುತ ಲಕ್ನೋ ಲೋಕಸಭೆಯನ್ನು ಪ್ರತಿನಿಧಿಸುತ್ತಿದ್ದಾರೆ. ಸತತ ಎರಡನೇ ಬಾರಿಗೆ ರಕ್ಷಣಾ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ.