ನ್ಯೂಸ್

ತಿರುಪತಿಯಿಂದ ಹಿಂದಿರುಗುವಾಗ ರಾಮನಗರದ ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು, ಕೆಲವರ ಸ್ಥಿತಿ ಗಂಭೀರ

ರಾಮನಗರ: ಮೈಸೂರು-ಬೆಂಗಳೂರು ನಡುವಿನ ದಶಪಥ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟಿಟಿ ವಾಹನ ಕ್ಯಾಂಟರ್​ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದು, ಅನೇಕ ಮಂದಿಗೆ ಗಂಭೀರ ಗಾಯಗಳಾಗಿವೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ಬಳಿಯ ದಶಪಥ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದೆ. ಮೃತರನ್ನು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿಕ್ಕಾಡೆ ಗ್ರಾಮದ ಕೃಷ್ಷ ಮತ್ತು ಮಹೇಶ್​ ಎಂದು ಗುರುತಿಸಲಾಗಿದೆ. ಟಿಟಿಯಲ್ಲಿದ್ದ ಪ್ರಯಾಣಿಕರೆಲ್ಲರೂ ಚಿಕ್ಕಾಡೆ ಗ್ರಾಮದವರು ಎಂದು ತಿಳಿದುಬಂದಿದೆ.

ತಿರುಪತಿ ತಿಮ್ಮಪ್ಪನ ದರ್ಶನ ಮುಗಿಸಿ ಹಿಂದಿರುಗುವಾಗ ಚನ್ನಪಟ್ಟಣದ ಮುದಗೆರೆ ಬಳಿ ಟಿಟಿ ವಾಹನ ಕ್ಯಾಂಟರ್​ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಟಿಟಿ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಮೃತದೇಹಗಳು ಹಾಗೂ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)