ನ್ಯೂಸ್

ರನ್ಯಾ 'ಚಿನ್ನ'ಕಾಲ: ನಟಿ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್​, ಸೆರೆಮನೆಯೇ ಗತಿ | Ranya Rao

Ranya Rao: ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಬೆಂಗಳೂರಿನ ಅಪರಾಧಗಳ ನ್ಯಾಯಾಲಯ, ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಆರೋಪದಡಿ ಕಸ್ಟಮ್ಸ್​ ಅಧಿಕಾರಿಗಳಿಗೆ ಸಿಕ್ಕಿಬಿದ್ದ ನಟಿ ರನ್ಯಾ ರಾವ್​, ಬರೋಬ್ಬರಿ 14.2 ಕೆಜಿ ಚಿನ್ನದ ಬಿಸ್ಕೆಟ್​ ಅನ್ನು ತಮ್ಮ ಸೊಂಟದಲ್ಲಿ ಬಚ್ಚಿಟ್ಟುಕೊಂಡಿರುವುದು ವಿಚಾರಣೆ ವೇಳೆ ಪತ್ತೆಯಾಯಿತು. ತಕ್ಷಣವೇ ಬಂಧಿತರಾದ ನಟಿ ಇದೀಗ ಇಡಿ, ಸಿಬಿಐ ತನಿಖೆಗೆ ಒಳಪಟ್ಟಿದ್ದಾರೆ.

ಪ್ರಸ್ತುತ ರನ್ಯಾ ರಾವ್​ ಪ್ರಕರಣವನ್ನು ಕೈಗೆತ್ತಿಕೊಂಡಿರುವ ಸಿಬಿಐ, ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದೆ. ಈ ಮಧ್ಯೆ ಇಡಿ ಕೂಡ ಪ್ರಕರಣದಲ್ಲಿ ಅಧಿಕೃತವಾಗಿ ಪ್ರವೇಶಿಸಿದೆ. ನಟಿಯ ಚಿನ್ನ ಕಳ್ಳಸಾಗಣೆಯ ಹಿಂದೆ ಯಾರ ಕೈವಾಡವಿದೆ? ಯಾವ ಪ್ರಭಾವಿ ರಾಜಕಾರಣಿಗಳು ಈ ಗೋಲ್ಡ್​ ಸ್ಮಂಗ್ಲಿಂಗ್​ ಕೇಸ್​ನಲ್ಲಿ ಶಾಮೀಲಾಗಿದ್ದಾರೆ ಎಂಬುದನ್ನು ತನಿಖೆ ಮೂಲಕ ಬಯಲಿಗೆಳೆಯಲು ತನಿಖಾ ಸಂಸ್ಥೆಗಳು ಪಣತೊಟ್ಟಿವೆ.

ಏನಿದು ಪ್ರಕರಣ?

ಮಾ.03ರಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನ್ನಡ ನಟಿ ರನ್ಯಾ ರಾವ್​ ಅವ​ರಿಂದ 14.56 ಕೋಟಿ ರೂ. ಮೌಲ್ಯದ 14 ಕೆಜಿ ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಂಡ ಪೊಲೀಸರು, ಕೆಲವೇ ಕ್ಷಣದಲ್ಲಿ ನಟಿಯನ್ನು ಬಂಧಿಸಿ, ತನಿಖೆಗೆ ಒಳಪಡಿಸಿದರು. ಒಂದೇ ವರ್ಷದಲ್ಲಿ 27 ಬಾರಿ ದುಬೈಗೆ ಭೇಟಿ ನೀಡಿದ್ದ ಚೆಲುವೆ, 14.2 ಕೆಜಿ ಚಿನ್ನದ ಗಟ್ಟಿಗಳನ್ನು ಅಕ್ರಮವಾಗಿ ಸಾಗಿಸುವಾಗ ಸಿಕ್ಕಿಬಿದ್ದರು. ಅಧಿಕಾರಿಗಳ ಕಣ್ತಪ್ಪಿಸಿ ಇಷ್ಟೊಂದು ಚಿನ್ನವನ್ನು ಹೇಗೆ ಸಾಗಿಸುತ್ತಿದ್ದರು? ಇಂಥಾ ಕೆಲಸಕ್ಕೆ ‘ಮಾಣಿಕ್ಯ’ ನಟಿ ಕೈಹಾಕಿದ್ದೇಕೆ? ಎಂಬ ಗೊಂದಲ ಹಲವರಲ್ಲಿ ಮೂಡಿದೆ. ಸದ್ಯ ಇದಕ್ಕೆ ಉತ್ತರ ಹುಡುಕುತ್ತಿರುವ ಖಾಕಿ ಪಡೆ, ಪಾತ್ರಧಾರಿ ಹಿಂದಿರುವ ಸೂತ್ರಧಾರಿಗಾಗಿ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ,(ಏಜೆನ್ಸೀಸ್).