ನ್ಯೂಸ್

ಆರ್‌ಸಿಬಿ ಕಾಲ್ತುಳಿತ ಪ್ರಕರಣ: ವರದಿ ಬಹಿರಂಗ, ಸರ್ಕಾರಕ್ಕೆ ಗಡುವು

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿರುವ ಸ್ಥಿತಿಗತಿ ವರದಿಯನ್ನು ನಾಲ್ಕು ದಿನದಲ್ಲಿ ಬಹಿರಂಗಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ವಾದ-ಪ್ರತಿವಾದ ಆಲಿಸಿದ್ದ ಪೀಠವು ನಾಲ್ಕು ದಿನಗಳಲ್ಲಿ ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಸ್ಥಿತಿಗತಿ ವರದಿಯನ್ನು ಸಾರ್ವಜನಿಕಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ, ವಿಚಾರಣೆಯನ್ನು ಜು.16ಕ್ಕೆ ಮುಂದೂಡಿತು.

ಇದಕ್ಕೂ ಮುನ್ನ, ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಮುಚ್ಚಿದ ಲಕೋಟೆಯ ವರದಿ ಬಿಡುಗಡೆಗೆ ಸೀಮಿತವಾಗಿ ನ್ಯಾಯಾಲಯಕ್ಕೆ ಸಹಕರಿಸಲು ಅಮಿಕಸ್ ಕ್ಯೂರಿಯನ್ನು ನೇಮಕ ಮಾಡಲಾಗಿತ್ತು. ಪೂರ್ಣ ಪ್ರಕರಣಕ್ಕೆ ಅವರನ್ನು ಅಮಿಕಸ್ ಕ್ಯೂರಿಯನ್ನಾಗಿ ಮುಂದುವರಿಸಬೇಕು ಎಂದರು. ಇದನ್ನು ಸಮ್ಮತಿಸಿದ ಪೀಠವು ವಿಚಾರಣೆಯನ್ನು ಮುಂದೂಡಿತು.

ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗಳ ಸಂಬಂಧದ ಅಂತಿಮ ವರದಿಯನ್ನು ತನ್ನ ಅನುಮತಿ ಇಲ್ಲದೇ ಸಕ್ಷಮ ನ್ಯಾಯಾಲಯಕ್ಕೆ ಸಲ್ಲಿಸುವಂತಿಲ್ಲ ಹೈಕೋರ್ಟ್ ಆದೇಶಿಸಿದೆ.