ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮುಂಗಾರು ಮಳೆ, ಇದೀಗ ಮತ್ತೆ ಚುರುಕುಗೊಳ್ಳುವ ಲಕ್ಷಣಗಳನ್ನು ತೋರಿಸಿದೆ.
ಮಂಗಳೂರು: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮುಂಗಾರು ಮಳೆ, ಇದೀಗ ಮತ್ತೆ ಚುರುಕುಗೊಳ್ಳುವ ಲಕ್ಷಣಗಳನ್ನು ತೋರಿಸಿದೆ. ಭಾನುವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗಿದ್ದು, ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾನುವಾರ ಬೆಳಗ್ಗಿನಿಂದಲೇ ಕರಾವಳಿ ಮತ್ತು ಗ್ರಾಮೀಣ ಭಾಗಗಳಲ್ಲಿ ಮೋಡ ಹಾಗೂ ಬಿಸಿಲಿನ ಮಿಶ್ರ ವಾತಾವರಣ ಕಂಡುಬಂದಿತ್ತು. ಆದರೆ ಸಂಜೆ ವೇಳೆಗೆ ವಾತಾವರಣದಲ್ಲಿ ದಿಢೀರ್ ಬದಲಾವಣೆಯಾಗಿ ಪುತ್ತೂರು, ಉಪ್ಪಿನಂಗಡಿ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗಿದೆ. ಕಡಬ ಹಾಗೂ ಕುಕ್ಕೆ ಸುಬ್ರಹ್ಮಣ್ಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿರುಗಾಳಿ ಮತ್ತು ಗುಡುಗು ಸಹಿತ ಭಾರಿ ಮಳೆಯಾದ ವರದಿಯಾಗಿದೆ. ಇದರಿಂದಾಗಿ ಬಿಸಿಲಿನ ಬೇಗೆಯಿಂದ ಕಂಗಾಲಾಗಿದ್ದ ಜನತೆಗೆ ತುಸು ತಂಪು ಸಿಕ್ಕಂತಾಗಿದೆ.
ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ಸೋಮವಾರದಿಂದ (ಜೂನ್ 22) ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬಿಸಿಲಿನ ತೀವ್ರತೆ ಕಡಿಮೆಯಾಗಲಿದೆ. ಜಿಲ್ಲೆಗಳಾದ್ಯಂತ ಮೋಡ ಕವಿದ ವಾತಾವರಣ ನಿರ್ಮಾಣವಾಗಲಿದ್ದು, ಅಲ್ಲಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ. ಅರಬ್ಬಿ ಸಮುದ್ರದಲ್ಲಿ ಮುಂಗಾರು ಮಾರುತಗಳ ಚಲನೆಗೆ ಪೂರಕವಾದ ವಾತಾವರಣ ಸೃಷ್ಟಿಯಾಗುತ್ತಿದೆ. ಜೂನ್ 24ರಿಂದ ಕರಾವಳಿಯುದ್ದಕ್ಕೂ ಸಾಮಾನ್ಯ ಮಳೆ ಆರಂಭವಾಗಲಿದ್ದು, ಜೂನ್ 26ರಿಂದ ಮುಂಗಾರು ಮಳೆ ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಗಳಿವೆ.