Teacher teaching students in the classroom scene illustration 
ನ್ಯೂಸ್

ಶಿಕ್ಷಕರ ನೇಮಕಾತಿ: ನೇಮಕಾತಿ ಆದೇಶ ಪ್ರತಿ ನೀಡಲು ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು ಪದವೀಧರ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ (6ರಿಂದ 8ನೇ ತರಗತಿ)ಯಲ್ಲಿ ಹುದ್ದೆಗೆ ಆಯ್ಕೆಯಾಗಿ ಕೌನ್ಸೆಲಿಂಗ್‌ನಲ್ಲಿ ಭಾಗವಹಿಸಿ ಸ್ಥಳ ಆಯ್ಕೆ ಮಾಡಿಕೊಂಡಿರುವ ಅಭ್ಯರ್ಥಿಗಳಿಗೆ ಕೂಡಲೇ ಕರ್ತವ್ಯಕ್ಕೆ ಹಾಜರಾಗಲು ನೇಮಕಾತಿ ಆದೇಶ ಪ್ರತಿ ನೀಡುವಂತೆ ಶಿಕ್ಷಣ ಇಲಾಖೆಯು ಜಿಲ್ಲಾ ಉಪ ನಿರ್ದೇಶಕರಿಗೆ ಸೂಚನೆ ನೀಡಿದೆ.

ಕಳೆದ ಶುಕ್ರವಾರ (ಅ.4)ದಂದು ಸುಪ್ರೀಂಕೋರ್ಟ್‌ನಲ್ಲಿ ನಡೆದ ವಿಚಾರಣೆಯಲ್ಲಿ ಕೌನ್ಸೆಲಿಂಗ್‌ನಲ್ಲಿ ಭಾಗವಹಿಸಿರುವ ಅಭ್ಯರ್ಥಿಗಳಿಗೆ ನೇಮಕಾತಿ ಪ್ರಮಾಣಪತ್ರ ವಿತರಣೆಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಜ್ಞಾಪನ ಪತ್ರ ಹೊರಡಿಸಿದ್ದಾರೆ.

ಇದರಿಂದ ಕೌನ್ಸೆಲಿಂಗ್‌ನಲ್ಲಿ ಹಾಜರಾಗಿ ಆದೇಶ ಪ್ರತಿಗಾಗಿ ಕಳೆದ ಒಂದೂವರೆ ವರ್ಷದಿಂದ ಕಾಯುತ್ತಿದ್ದ ಅಭ್ಯರ್ಥಿಗಳು ನಿಟ್ಟುಸಿರು ಬಿಡುವಂತಾಗಿದೆ.

2022-23ನೇ ಸಾಲಿನಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿನ ಖಾಲಿ ಹುದ್ದೆಗಳಿಗೆ ಆಯ್ಕೆಯಾದ ಅರ್ಹ ಪದವೀಧರ ಪ್ರಾಥಮಿಕ ಶಿಕ್ಷಕರು ಹುದ್ದೆಗೆ ಕೌನ್ಸೆಲಿಂಗ್ ಮೂಲಕ ಸ್ಥಳ ಹಂಚಿಕೆ ಪ್ರಕ್ರಿಯೆ ನಡೆಸಲಾಗಿತ್ತು. ಪ್ರಕರಣದ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತೇವೆಂಬ ಲಿಖಿತ ಸ್ವೀಕೃತಿಯನ್ನು ಪಡದು 11,494 ಅಭ್ಯರ್ಥಿಗಳಿಗೆ ಆದೇಶ ಪ್ರತಿ ನೀಡಲಾಗಿತ್ತು. ಉಳದಿ ಅಭ್ಯರ್ಥಿಗಳು ಸಿಂಧುತ್ವ ಪ್ರಮಾಣಪತ್ರ ಸಲ್ಲಿಸುವ ಹೊತ್ತಿಗೆ ಆದೇಶ ಪ್ರತಿ ನೀಡದಂತೆ ನ್ಯಾಯಾಲಯವು ಮಧ್ಯಂತರ ಆದೇಶ ಹೊರಡಿಸಿತ್ತು. ಇದರಿಂದ ಅರ್ಹ ಅಭ್ಯರ್ಥಿಗಳಿಗೆ ಸಮಸ್ಯೆಯಾಗಿತ್ತು.

ಈಗ ಸುಪ್ರೀಂಕೋರ್ಟ್‌ನಲ್ಲಿನ ಮಧ್ಯಂತರ ಆದೇಶದ ಅನುಸಾರ ಈ ಹಿಂದೆ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಿ ಸ್ಥಳ ಆಯ್ಕೆ ಮಾಡಿಕೊಂಡಿದ್ದ ಅಭ್ಯರ್ಥಿಗಳಿಗೆ ವಿವಿಧ ಕಾರಣಗಳಿಂದಾಗಿ ಅಂದರೆ ಅಂಕಪಟ್ಟಿ, ನೈಜತೆ ಪ್ರಮಾಣಪತ್ರ, ಪೊಲೀಸ್ ದೃಢೀಕರಣ, ಕನ್ನಡ ಮಾಧ್ಯಮ/ಗ್ರಾಮೀಣ ವ್ಯಾಸಂಗ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಸಿಂಧುತ್ವ ಪ್ರಮಾಣ ಸ್ವೀಕೃತವಾಗದ ಮತ್ತು ನೇಮಕಾತಿ ಆದೇಶಗಳನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿತ್ತು. ಅಂತಹ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನಿಡಲು ಅನುಮತಿ ನೀಡಲಾಗಿದೆ.

ಈ ಹಿನ್ನೆಲೆಯಲ್ಲಿ ಈ ಹಿಂದೆ ಪ್ರಕ್ರಿಯೆಯಲ್ಲಿ ಭಾಗವಹಿಸಿ ಸ್ಥಳ ಆಯ್ಕೆ ಮಾಡಿಕೊಂಡಿದ್ದು, ಸಿಂಧುತ್ವ ಪ್ರಮಾಣಪತ್ರವನ್ನು ನೇಮಕಾತಿ ಪ್ರಾಧಿಕಾರಕ್ಕೆ ಪೂರ್ಣ ಪ್ರಮಾಣದಲ್ಲಿ ಸಲ್ಲಿಸಿ ಸ್ಥಳ ಆಯ್ಕೆ ಮಾಡಿಕೊಂಡಿರುವ ಅಭ್ಯರ್ಥಿಗಳಿಗೆ ಮಾತ್ರ ಶಾಲಾ ಕರ್ತವ್ಯಕ್ಕೆ ಹಾಜರಾಗಲು ಷರತ್ತು ಬದ್ಧವಾಗಿ ನೇಮಕಾತಿ ಆದೇಶ ನೀಡುವಂತೆ ಇಲಾಖೆ ಆಯುಕ್ತರು ಸೂಚಿಸಿದ್ದಾರೆ.