ಬೆಂಗಳೂರು: ಬೆಂಗಳೂರು ವಕೀಲರ ಸಂಘದ ಚುನಾವಣೆ ನಿಮಿತ್ತ ಈಗಾಗಲೇ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಮತದಾನಕ್ಕೆ ಸಿದ್ಧತೆ ನಡೆದಿದೆ. ಈ ಹಂತದಲ್ಲಿ ಪ್ರತ್ಯೇಕ ಮತಗಟ್ಟೆ ವ್ಯವಸ್ಥೆ ಮಾಡಲು ಮುಖ್ಯ ಚುನಾವಣಾಧಿಕಾರಿ ಅಥವಾ ಉನ್ನತಾಧಿಕಾರ ಸಮಿತಿಗೆ (ಎಚ್‌ಪಿಸಿ) ನಿರ್ದೇಶಿಸಲಾಗದು ಎಂದು ಹೈಕೋರ್ಟ್ ಹೇಳಿದೆ.
ಎಂ.ಚಾಮರಾಜ ಮತ್ತಿತರರು ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ದೇವದಾಸ್ ಅವರ ಏಕಸದಸ್ಯ ಪೀಠ ಈ ಆದೇಶ ಮಾಡಿದೆ. ಮುಂದಿನ ಚುನಾವಣೆ ವೇಳೆಗೆ ಎಎಬಿಯು ಹೈಕೋರ್ಟ್ ಘಟಕದಲ್ಲಿ ಹೆಚ್ಚುವರಿ ಮತಗಟ್ಟೆ ಸ್ಥಾಪಿಸುವುದನ್ನು ಖಾತರಿಪಡಿಸಬೇಕು. ಇದರಿಂದ ಹೆಚ್ಚುವರಿ ಮತಗಟ್ಟೆ ಸ್ಥಾಪಿಸಲು ಸಕ್ಷಮ ಪ್ರಾಧಿಕಾರಕ್ಕೆ ಅಗತ್ಯವಾದ ಸಮಯ ಇರಲಿದೆ ಎಂದು ನ್ಯಾಯಪೀಠ ತಿಳಿಸಿದೆ.
16ರಂದು ಚುನಾವಣೆ ನಿಗದಿಯಾಗಿದ್ದು, ಸಿಟಿ ಸಿವಿಲ್ ಕೋರ್ಟ್‌ನಲ್ಲಿ ಮತದಾನಕ್ಕೆ ಏರ್ಪಾಡು ಮಾಡಲಾಗಿದೆ. ಹೀಗಿರುವಾಗ ಹೈಕೋರ್ಟ್ ಆವರಣದಲ್ಲಿ ಪ್ರತ್ಯೇಕ ಮತಗಟ್ಟೆ ಸ್ಥಾಪಿಸಲು ಉನ್ನತಾಧಿಕಾರ ಸಮಿತಿಗೆ ನಿರ್ದೇಶಿಸಿದಲ್ಲಿ ಚುನಾವಣೆಯಲ್ಲಿ ಮಧ್ಯಪ್ರವೇಶಿಸಿದಂತಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ.
ಚುನಾವಣೆ ಮುಗಿದ ಬಳಿಕ ಉನ್ನತಾಧಿಕಾರ ಸಮಿತಿಯು ಈ ಸಂಬಂಧ ವರದಿ ಸಲ್ಲಿಸಬೇಕು ಎಂದು ಆದೇಶಿಸಿರುವ ಹೈಕೋರ್ಟ್, ವಿಚಾರಣೆಯನ್ನು 24ಕ್ಕೆ ಮುಂದೂಡಿದೆ.