ನ್ಯೂಸ್

ಹೆಚ್ಚಿನ ಸದಸ್ಯತ್ವ ನೋಂದಣಿ ಮಾಡಿಸಿ

ಅವಿನಾಶ್ ಜೈನಹಳ್ಳಿ

ಮೈಸೂರು: ನಮ್ಮ ಪಕ್ಷದ ಕಾರ್ಯಕರ್ತರು ಸದಸ್ಯತ್ವ ಅಭಿಯಾನಕ್ಕೆ ಕೈ ಜೋಡಿಸಿ ಅತಿ ಹೆಚ್ಚು ಸದಸ್ಯರನ್ನು ನೋಂದಣಿ ಮಾಡಿಸಬೇಕು ಎಂದು ಬಿಜೆಪಿ ಮೈಸೂರು ಜಿಲ್ಲಾ ಬಿಜೆಪಿ ಗ್ರಾಮಾಂತರ ಘಟಕದ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ಮನವಿ ಮಾಡಿದರು.

ಮೈಸೂರು ಜಿಲ್ಲಾ ಬಿಜೆಪಿ ಗ್ರಾಮಾಂತರ ಎಸ್.ಸಿ. ಮೋರ್ಚಾ ವತಿಯಿಂದ ಪಕ್ಷದ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಜಿಲ್ಲಾ ಪದಾಧಿಕಾರಿಗಳ ಬಿಜೆಪಿ ಸದಸ್ಯತ್ವ ಕಾರ್ಯಗಾರ ಸಭೆಯಲ್ಲಿ ಅವರು ಮಾತನಾಡಿದರು.

ಈಗಾಗಲೇ ನಮ್ಮ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ್ದು, ದೇಶದ ಪ್ರತಿ ಕ್ಷೇತ್ರಗಳಲ್ಲೂ ಬಿಜೆಪಿಗೆ ಹೆಚ್ಚು ಮಂದಿ ಸದಸ್ಯತ್ವ ಪಡೆಯುತ್ತಿದ್ದಾರೆ. ಇದಕ್ಕೆ ಕೇಂದ್ರ ಸರ್ಕಾರದ ರೈತಪರ, ಮಹಿಳಾ ಪರ ಯೋಜನೆಗಳು, ಬಡ ಹಾಗೂ ಮಧ್ಯಮ ವರ್ಗಕ್ಕೆ ಅದರಲ್ಲೂ ಗ್ರಾಮೀಣ ಭಾಗಕ್ಕೆ ನೇರವಾಗಿ ತಲುಪುತ್ತಿರುವುದೇ ಇದಕ್ಕೆ ಕಾರಣ. ಪ್ರಧಾನಿ ನರೇಂದ್ರ ಮೋದಿ, ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನಾಯಕತ್ವ ಮೆಚ್ಚಿ ರಾಜ್ಯದ ಮೂಲೆಮೂಲೆಯಲ್ಲೂ ಯುವಕರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಸದಸ್ಯತ್ವವನ್ನು ಪಡೆಯುತ್ತಿದ್ದಾರೆ ಎಂದರು.

ಬಿಜೆಪಿ ಎಸ್.ಸಿ. ಮೋರ್ಚಾ ಪದಾಧಿಕಾರಿಗಳು ಕೂಡ ಸದಸ್ಯತ್ವ ಅಭಿಯಾನಕ್ಕೆ ಕೈ ಜೋಡಿಸಿ ಅತಿ ಹೆಚ್ಚು ಸದಸ್ಯರನ್ನು ನೋಂದಣಿ ಮಾಡಿಸುವ ಮೂಲಕ ಪಕ್ಷದಲ್ಲಿ ತಮ್ಮ ಪಾತ್ರವನ್ನು ಅಚ್ಚುಕಟ್ಟಾಗಿ ನಿಭಾಹಿಸಬೇಕು ಎಂದು ಮನವಿ ಮಾಡಿದರು.

ಮಾಜಿ ಶಾಸಕ ಹರ್ಷವರ್ಧನ್ ಮಾತನಾಡಿ, ನಮ್ಮ ರಾಷ್ಟ್ರವನ್ನು ಬಲಿಷ್ಠಗೊಳಿಸಲು ಹಾಗೂ ಭಾರತವನ್ನು ವಿಶ್ವಗುರುವಾಗಿ ಮಾಡಲು ನಾವೆಲ್ಲರೂ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಬೇಕಿದೆ. ಆ ಮೂಲಕ ಭಾರತ ನೆಲದಲ್ಲಿ ಬಿಜೆಪಿಯನ್ನು ಸುಭದ್ರಗೊಳಿಸಬೇಕು. ವಿಕಸಿತ ಭಾರತದ ಗುರಿಗೆ ನಾವೆಲ್ಲರೂ ಮೋದಿ ಅವರೊಟ್ಟಿಗೆ ಕೈ ಜೋಡಿಸಬೇಕು ಎಂದರು.

ಮಾಜಿ ಅಧ್ಯಕ್ಷೆ ಮಂಗಳಾ ಸೋಮಶೇಖರ್ ಮಾತನಾಡಿ, ಭಾರತೀಯ ಜನತಾ ಪಾರ್ಟಿಯಲ್ಲಿ ವಿವಿಧ ಮೋರ್ಚಾಗಳು ಸೇರಿದಂತೆ ಎಸ್.ಸಿ. ಮೋರ್ಚಾವು ಸಹ ಸಂಘಟನಾತ್ಮಕವಾಗಿ ಉತ್ತಮ ಕೆಲಸ ಮಾಡುತ್ತಾ ಪಕ್ಷ ಸಂಘಟಿಸುತ್ತಿದೆ. ಸದಸ್ಯತ್ವ ಅಭಿಯಾನದಲ್ಲಿ ಮೋರ್ಚಾದ ಪದಾಧಿಕಾರಿಗಳು ಅತಿ ಹೆಚ್ಚು ಸದಸ್ಯರ ನೋಂದಣಿ ಗುರಿ ಮುಟ್ಟಬೇಕು ಎಂದು ಮನವಿ ಮಾಡಿದರು. ಮುಖಂಡರಾದ ಎಸ್.ಮಹದೇವಯ್ಯ, ಅನಿಲ್ ಇದ್ದರು.