ನ್ಯೂಸ್

ಹೋಬಳಿಗೊಂದು ವಸತಿ ಶಾಲೆ; ಸಿಎಂ ಸಿದ್ದರಾಮಯ್ಯ ಘೋಷಣೆ|Residential school

ಬೆಂಗಳೂರು: ಹೋಬಳಿಗೊಂದು ವಸತಿ ಶಾಲೆ(A residential school for Hobli), ಮೈಸೂರು ವಿ.ವಿ.ಯಲ್ಲಿ ಕಾನ್‌ಸ್ಟಿಟ್ಯೂಷನ್ ಚೇರ್, ಬೆಂಗಳೂರಲ್ಲಿ ಆಂಧ್ರಪ್ರದೇಶ ಮಾದರಿ ಅಂಬೇಡ್ಕರ್ ಮ್ಯೂಸಿಯಂ ಇವು ಅಂಬೇಡ್ಕರ್ ಜಯಂತಿ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಘೋಷಿಸಿದ ವಿನೂತನ ಕಾರ್ಯಕ್ರಮಗಳು.

ಅಷ್ಟೇ ಅಲ್ಲ, ದೇಶದಲ್ಲೇ ದೊಡ್ಡ ಅಂಬೇಡ್ಕರ್ ಪ್ರತಿಮೆ ಸ್ಥಾಪನೆ ಮಾಡುವುದಾಗಿ ಹೇಳಿದರು. ಪರಿಶಿಷ್ಟರಿಗೆ ನ್ಯಾಯ ದೊರಕಿಸಿಕೊಡಲು 33 ಜಿಲ್ಲೆಗಳಲ್ಲಿ ಡಿಸಿಆರ್‌ಇ ಪೊಲೀಸ್ ಠಾಣೆ ಉದ್ಘಾಟಿಸಿದರು ಹಾಗೂ ಅಂಬೇಡ್ಕರ್ ಸ್ಫೂರ್ತಿಸೌಧ ಶಿಲಾನ್ಯಾಸ ನೆರವೇರಿಸಿದರು.

ವಿಧಾನಸೌಧ ಗ್ರಾೃಂಡ್‌ಸ್ಟೆಪ್ ಮೇಲೆ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನ ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ, ಈ ವರ್ಷ 26 ವಸತಿ ಶಾಲೆ ಘೋಷಣೆ ಮಾಡಿದ್ದೇನೆ. ಮುಂದಿನ ವರ್ಷ ಎಲ್ಲ ಹೋಬಳಿ ಮಾಡುತ್ತೇವೆ ಎಂದರು.

ಬಜೆಟ್ ಗಾತ್ರ ಹೆಚ್ಚಾದಂತೆ ಎಸ್‌ಇಪಿ/ಟಿಎಸ್‌ಪಿ ಹಣ ಹೆಚ್ಚಾಗಬೇಕು. ಆದರೆ ಬಿಜೆಪಿ ಸರ್ಕಾರ ಕಡಿಮೆ ಮಾಡಿತ್ತು. ಆದರೆ ನಾವು ಅಧಿಕಾರಕ್ಕೆ ಬಂದ ಬಳಿಕ ಮತ್ತೆ ಯೋಜನಾಗಾತ್ರಕ್ಕೆ ತಕ್ಕಂತೆ ಹೆಚ್ಚಿಸಿದ್ದೇವೆ. ಈ ಬಾರಿ 42,018 ಕೋಟಿ ರೂ. ತೆಗೆದಿಟ್ಟಿದ್ದೀವೆ ಎಂದು ತಿಳಿಸಿದರು.

8300 ಕೋಟಿ ಎಸ್‌ಇಪಿ/ಟಿಎಸ್‌ಪಿ ಹಣ ದುರುಪಯೋಗ ಪಡಿಸಿಕೊಂಡಿದ್ದು ಬಿಜೆಪಿ. ಇವರು ನಾಚಿಕೆ ಇಲ್ಲದೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಅಂಬೇಡ್ಕರ್ ಆಶಯಗಳ ಜಾರಿಗಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ನಮ್ಮ ಜನರ ಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದ್ದೇವೆ ಎಂದು ಹೇಳಿದರು.

ಬಿಜೆಪಿಯಿಂದ ಅಪಪ್ರಚಾರ:

ಚುನಾವಣೆಯಲ್ಲಿ ನನ್ನ ಸೋಲಿಗೆ ಸಾವರ್ಕರ್ ಕಾರಣ ಎಂದು ಸ್ವತಃ ಅಂಬೇಡ್ಕರ್ ಅವರೇ ಹೇಳಿದ್ದಾರೆ. ಆದರೆ ಅಂಬೇಡ್ಕರ್ ಸೋಲಿಗೆ ಕಾಂಗ್ರೆಸ್ ಕಾರಣ ಎಂದು ಮನುವಾದಿಗಳು ಹಸಿ ಸುಳ್ಳಿನ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಮನುವಾದಿಗಳು ಇದ್ದಕಿದ್ದಂತೆ ಅಂಬೇಡ್ಕರ್ ಮೇಲೆ ಪ್ರೀತಿ ಬಂದಂತೆ ಆಡುತ್ತಿದ್ದಾರೆ. ಆದರೆ ಸಂವಿಧಾನವನ್ನು ಮೊದಲಿಗೆ ವಿರೋಧಿಸಿದ್ದು ಇವರೇ ಎಂದು ಆರೋಪಿಸಿದರು.

ಸಂವಿಧಾನ ಜಾರಿ ಆದ 75 ವರ್ಷಗಳ ಹಿಂದೆಯೇ ವೈರುದ್ಯ ಇರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ ಎಂದು ಅಂಬೇಡ್ಕರ್ ಹೇಳಿದ್ದರು. ಸಂವಿಧಾನದ ಆಶಯ ಈಡೇರಬೇಕಾದರೆ ಅಸಮಾನತೆ, ಅಸ್ಪ್ರಶ್ಯತೆ ಅಳಿಯಬೇಕು. ಜಾತಿ ವ್ಯವಸ್ಥೆ ಇರುವವರೆಗೆ ಸಮಾನತೆ ಬರುವುದಿಲ್ಲ. ಅಸ್ಪೃಶ್ಯತೆ ಅಳಿಯುವುದಿಲ್ಲ ಎಂದು ಅಂಬೇಡ್ಕರ್ ಹೇಳಿದ್ದಾರೆ. ಅಂಬೇಡ್ಕರ್ ಇಲ್ಲದೇ ಹೋಗಿದ್ದರೆ ಎಲ್ಲರಿಗೂ ಶಿಕ್ಷಣ ದೊರೆಯುತ್ತಿರಲಿಲ್ಲ ಎಂದರು.

ವಿದ್ಯಾವಂತರೇ ಹೆಚ್ಚು ಜಾತಿವಾದಿಗಳಾಗುತ್ತಿರುವುದು ಸರಿಯಲ್ಲ. ಶಿಕ್ಷಣದ ಉದ್ದೇಶ ಜಾತಿವಾದಿಗಳಾಗುವುದಲ್ಲ. ಈ ಬಗ್ಗೆ ಪ್ರತಿಯೊಬ್ಬರೂ ಎಚ್ಚರವಹಿಸಬೇಕು ಎಂದು ಸಲಹೆ ನೀಡಿದರು.

ಮುಸಲ್ಮಾನರು ಶಿಕ್ಷಣದಿಂದ ವಂಚಿತರಾಗಬಾರದು, ಅವಕಾಶಗಳಿಂದ ವಂಚಿತರಾಗಬಾರದು. ಹೀಗಾಗಿ ಸಂವಿಧಾನ ಹೇಳಿದಂತೆ ನಾವು ಎಲ್ಲ ಜಾತಿ, ಧರ್ಮದ ಬಡವರಿಗೆ ಅವಕಾಶ ಕಲ್ಪಿಸುತ್ತಿದ್ದೇವೆ. ಇಷ್ಟಕ್ಕೇ ಕಾಂಗ್ರೆಸ್ ಬರೀ ಮುಸಲ್ಮಾನರನ್ನು ಓಲೈಸುತ್ತಿದೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಬಿಜೆಪಿಗೆ ತಿರುಗೇಟು ನೀಡಿದರು.

ಇದಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಎದುರಿನ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪನಮನ ಸಲ್ಲಿಸಿದರು. ಜತೆಗೆ ಅಂಬೇಡ್ಕರ್ ಸ್ಫೂರ್ತಿಸೌಧ ಶಿಲಾನ್ಯಾಸ ನೆರವೇರಿಸಿದರು.

ಸಚಿವರಾದ ಕೆ.ಎಚ್. ಮುನಿಯಪ್ಪ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಂಸದ ರಾಧಾಕೃಷ್ಣ ದೊಡ್ಡಮನಿ, ಶಾಸಕರಾದ ರಿಜ್ವಾನ್ ಆರ್ಶದ್, ಸಲೀಂ ಅಹ್ಮದ್, ನಜೀರ್ ಅಹ್ಮದ್, ನರೇಂದ್ರಸ್ವಾಮಿ, ಮಾಜಿ ಸಚಿವರಾದ ಎಚ್.ಆಂಜನೇಯ, ಬಿ. ಸೋಮಶೇಖರ್, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಂಪತ್ ರಾಜ್ ಮತ್ತಿತರರು ಉಪಸ್ಥಿತರಿದ್ದರು.