ನ್ಯೂಸ್

ಯೋಗೇಶ್ವರ್ ವಿರುದ್ಧ ಹೇಳಿಕೆ ನೀಡದಂತೆ ನಿರ್ಬಂಧ: ಪುತ್ರಿ ನಿಶಾಗೆ ಹೈಕೋರ್ಟ್ ತಡೆ

ಬೆಂಗಳೂರು: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ವಿರುದ್ಧ ಅವರ ಮೊದಲ ಪತ್ನಿಯ ಪುತ್ರಿ ನಿಶಾ ಯೋಗೇಶ್ವರ್ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಮಾನಹಾನಿಕರ ಅಥವಾ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ಹೈಕೋರ್ಟ್ ನಿರ್ಬಂಧ ವಿಧಿಸಿದೆ.

ಈ ಸಂಬಂಧ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಪತ್ನಿ ಪಿ.ವಿ.ಶೀಲಾ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ ಚಂದನಗೌಡರ್ ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

ನನ್ನ ಪತಿ ಸಿ.ಪಿ.ಯೋಗೇಶ್ವರ್ ಚುನಾವಣೆಗೆ ಸ್ಪರ್ಧಿಸಿರುವ ಬೆನ್ನಲ್ಲೇ ನಮ್ಮ ಮಲಮಗಳಾದ ನಿಶಾ ಯೋಗೇಶ್ವರ್ ಜಾಲತಾಣಗಳಲ್ಲಿ ನಮ್ಮ ಕುಟುಂಬದ ವಿರುದ್ಧ ಅವಹೇಳನಕಾರಿ, ಮಾನಹಾನಿಕಾರಕ, ಆಧಾರರಹಿತ ಮತ್ತು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ.

ಈ ಸಂಬಂಧ ಬೆಂಗಳೂರಿನ ಸಿಇಎನ್ ಠಾಣೆಯಲ್ಲಿ ದೂರು ದಾಖಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ಷೇಪಿಸಿಲಾಗಿದೆ.

ಅರ್ಜಿಯ ಮಧ್ಯಂತರ ಮನವಿಯನ್ನು ಪರಿಗಣಿಸಿರುವ ನ್ಯಾಯಪೀಠ, ಪ್ರತಿವಾದಿಗಳಾದ ಇನ್‌ಸ್ಟಾಗ್ರಾಂ, ಎಕ್ಸ್‌ಕಾರ್ಪ್ (ಟ್ವಿಟರ್), ಗೂಗಲ್ ಮತ್ತು ಯೂಟ್ಯೂಬ್ ಜಾಲತಾಣಗಳಲ್ಲಿ ನಿಶಾ ಯೋಗೇಶ್ವರ್ ನಿಂದನಾತ್ಮಕ ಹೇಳಿಕೆಗಳನ್ನು ಅಪ್‌ಲೋಡ್ ಮಾಡಬಾರದು ಮತ್ತು ಈಗಾಗಲೇ ಪ್ರಸಾರ ಮಾಡಲಾಗಿರುವ ತುಣಕುಗಳನ್ನು ತಡೆ ಹಿಡಿಯಬೇಕು ಎಂದು ಮಧ್ಯಂತರ ಆದೇಶ ನೀಡಿ ವಿಚಾರಣೆಯನ್ನು ಮುಂದೂಡಿದೆ.