ನ್ಯೂಸ್

ಬೆಂಗಳೂರು ಲಾಕ್​ ಮಾಡಿದ 'ಕೈ' ಪಡೆ- ಪ್ರತಿಭಟನಾಕಾರರಿಗೆ ಡಿಕೆಶಿ ಕೊಟ್ಟರೊಂದು 'ಟಿಪ್ಸ್​'

ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಬೆಂಗಳೂರಿನಲ್ಲಿ ರಾಜಭವನ ಚಲೋಗೆ ರೈತ ಸಮೂಹ ಮುಂದಾಗಿದೆ. ಈ ಹೋರಾಟವನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ, ಸಮಾವೇಶ ಹಮ್ಮಿಕೊಂಡಿರುವ ಕಾರಣ, ಬೆಂಗಳೂರಿನ ಬಹುತೇಕ ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ.

ಈ ನಡುವೆಯೇ ಕೆಲವು ಕಡೆಗಳಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ. ಅವರನ್ನು ತಡೆಯುತ್ತಿದ್ದಾರೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​, ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ಮತ್ತು ಜನ ವಿರೋಧಿ ಕಾಯ್ದೆಗಳ ವಿರುದ್ಧದ 'ರಾಜಭವನ ಚಲೋ' ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸುತ್ತಿರುವ ರೈತರು ಹಾಗೂ ಕಾಂಗ್ರೆಸ್ ಕಾರ್ಯಕರ್ತರನ್ನು ನಿನ್ನೆ ರಾತ್ರಿಯಿಂದಲೇ ಪೊಲೀಸರು ಮಾರ್ಗ ಮಧ್ಯದಲ್ಲೇ ತಡೆಯುತ್ತಿದ್ದಾರೆ. ಆ ಮೂಲಕ ರಾಜ್ಯ ಬಿಜೆಪಿ ಸರಕಾರ ದೌರ್ಜನ್ಯ ಮೆರೆಯುತ್ತಿದೆ ಎಂದು ಅವರು ಕಿಡಿ ಕಾರಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ಶಿವಕುಮಾರ್​, ರೈತಪರ ಹೋರಾಟ ನಡೆಸಲು ಬೆಂಗಳೂರಿಗೆ ಆಗಮಿಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ರೈತರನ್ನು ಪೊಲೀಸರು ಹೆದ್ದಾರಿಯಲ್ಲೇ ತಡೆಯುತ್ತಿರುವುದು ಖಂಡನೀಯ. ನಮ್ಮ ಹೋರಾಟದ ಹಕ್ಕು ಕಸಿಯುವ ಅಧಿಕಾರ ಯಾರಿಗೂ ಇಲ್ಲ. ಹೀಗಾಗಿ ಪೊಲೀಸರು ತಡೆದ ಕಡೆಯೇ ರಸ್ತೆಯಲ್ಲಿ ಪ್ರತಿಭಟನೆ ಮಾಡಿ, ರಸ್ತೆ ಬಂದ್ ಮಾಡಿ ಎಂದು ಕಾರ್ಯಕರ್ತರು ಹಾಗೂ ರೈತರಲ್ಲಿ ಮನವಿ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ.

ಪಶ್ಚಿಮ ವಿಭಾಗ ಡಿಸಿಪಿ, ಕೇಂದ್ರ ವಿಭಾಗ ಡಿಸಿಪಿ ನೇತೃತ್ವದಲ್ಲಿ 500ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. 6ಕ್ಕೂ ಹೆಚ್ಚು ಕೆಎಸ್​ಆರ್​​ಪಿ ತುಕಡಿ ನಿಯೋಜನೆಗೊಂಡಿದೆ.