ನ್ಯೂಸ್

ಹುಟ್ಟುಹಬ್ಬ ಮುಗಿದ ಮೇಲೆ ವಿಚಾರಣೆ ಮುಂದುವರೆಸಿ: ಇ.ಡಿಗೆ ಮನವಿ ಪತ್ರ ಬರೆದ ರಾಹುಲ್​ ಗಾಂಧಿ!

suchetana

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸಹಸ್ರಾರು ಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಮಾಡಿರುವ ಆರೋಪ ಹೊತ್ತು ಇದೀಗ ಜಾರಿ ನಿರ್ದೇಶನಾಲಯದಿಂದ (ಇಡಿ) ವಿಚಾರಣೆ ಎದುರಿಸುತ್ತಿರುವ ಸಂಸದ ರಾಹುಲ್​ ಗಾಂಧಿ ಅವರು ಸೋಮವಾರದವರೆಗೆ (ಜೂನ್​ 20) ವಿಚಾರಣೆಯಿಂದ ವಿನಾಯಿತಿ ನೀಡುವಂತೆ ಕೋರಿ ಪತ್ರ ಬರೆದಿದ್ದಾರೆ.

ಜೂನ್​ 13ರಿಂದ ಮೂರು ದಿನಗಳವರೆಗೆ 30 ಗಂಟೆಗಳಿಗೂ ಅಧಿಕ ಅವಧಿಯವರೆಗೆ ವಿಚಾರಣೆ ಎದುರಿಸಿರುವ ರಾಹುಲ್​ ಗಾಂಧಿಯವರಿಗೆ ಗುರುವಾರ ವಿನಾಯಿತಿ ನೀಡಲಾಗಿತ್ತು. ಇದೀಗ ಇನ್ನೂ ಮೂರು ದಿನ ವಿನಾಯಿತಿ ನೀಡಿ ಎಂದು ಇಡಿ ಅಧಿಕಾರಿಗಳಿಗೆ ಮನವಿ ಪತ್ರ ಕಳುಹಿಸಿದ್ದಾರೆ ಎಂದು ವರದಿಯಾಗಿದೆ.

ಇಡಿ ಮುಂದೆ ಹಾಜರಾಗುವಂತೆ ನೋಟಿಸ್​ ಜಾರಿಯಾದ ಮರುದಿನವೇ ಕೋವಿಡ್​ಗೆ ಒಳಗಾಗಿ ಆಸ್ಪತ್ರೆ ಸೇರಿರುವ ಸೋನಿಯಾ ಗಾಂಧಿಯವರು ಇನ್ನೂ ಆಸ್ಪತ್ರೆಯಲ್ಲಿಯೇ ಇದ್ದಾರೆ. ಈ ಕುರಿತು ಪತ್ರದಲ್ಲಿ ಉಲ್ಲೇಖಿಸಿರುವ ರಾಹುಲ್​, ನಮ್ಮ ತಾಯಿ ದೆಹಲಿಯ ಗಂಗಾರಾಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರನ್ನು ನೋಡಿಕೊಳ್ಳಬೇಕಿದೆ. ಜೂನ್ ‌19ರಂದು ನನ್ನ ಹುಟ್ಟುಹಬ್ಬದ ಆಚರಣೆ ಇದೆ.‌ ಈ‌ ಹಿನ್ನೆಲೆಯಲ್ಲಿ ನಾಳಿನ ವಿಚಾರಣೆಯಿಂದ ವಿನಾಯಿತಿ ನೀಡಿ. ಸೋಮವಾರ ಅಂದರೆ ಜೂನ್ 20ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಪತ್ರದಲ್ಲಿ ಬರೆದಿರುವುದಾಗಿ ತಿಳಿದು ಬಂದಿದೆ.

ಆದರೆ ಈವರೆಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಯಾವುದೇ ಸೂಚನೆ ಬಂದಿಲ್ಲ ಎಂದು ಗೊತ್ತಾಗಿದೆ.

ಏನಿದು ನ್ಯಾಷನಲ್​ ಹೆರಾಲ್ಡ್​ ಕೇಸ್​?

ಜವಾಹರಲಾಲ್ ನೆಹರು ಮತ್ತು ಇತರ ಕೆಲವು ಸ್ವಾತಂತ್ರ್ಯ ಹೋರಾಟಗಾರರು ಜತೆಗೂಡಿ 1938ರಲ್ಲಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಹುಟ್ಟುಹಾಕಿದ್ದರು. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಸ್ವತಂತ್ರ ದಳದ ಕಳವಳಗಳಿಗೆ ಧ್ವನಿಯಾಗುವುದು ಇದರ ಉದ್ದೇಶವಾಗಿತ್ತು. ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ (ಎಜೆಎಲ್) ಪ್ರಕಾಶನದ ಈ ಪತ್ರಿಕೆಯು, ಸ್ವಾತಂತ್ರ್ಯದ ಬಳಿಕ ಕಾಂಗ್ರೆಸ್ ಮುಖವಾಣಿಯಾಗಿತ್ತು.

2010ರಲ್ಲಿ ಕಾಂಗ್ರೆಸ್ ಪಕ್ಷದ ಆಗಿನ ಪ್ರಧಾನ ಕಾರ್ಯದರ್ಶಿಯಾಗಿದ್ದ ರಾಹುಲ್ ಗಾಂಧಿ ಯಂಗ್ ಇಂಡಿಯಾ ಲಿಮಿಟೆಡ್ ಸ್ಥಾಪಿಸಿದ್ದರು. ಈ ಕಂಪೆನಿಯು ಯಂಗ್ ಇಂಡಿಯಾ ಲಿಮಿಟೆಡ್ (ವೈಐಎಲ್), ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್‌ನ ಷೇರುಗಳನ್ನು ಖರೀದಿ ಮಾಡುವಲ್ಲಿ ವಂಚನೆ ಹಾಗೂ ನಂಬಿಕೆ ದ್ರೋಹ ಎಸಗಿದೆ. ಇದರಲ್ಲಿ ಅನೇಕ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದಾರೆ ಎಂದು 2012ರಲ್ಲಿ ಬಿಜೆಪಿ ನಾಯಕ ಹಾಗೂ ವಕೀಲ ಸುಬ್ರಮಣಿಯನ್ ಸ್ವಾಮಿ ವಿಚಾರಣಾ ನ್ಯಾಯಾಲಯದಲ್ಲಿ ದೂರು ನೀಡಿದ್ದರು.

ಬಳಕೆಯಲ್ಲಿ ಇಲ್ಲದ ಮಾಧ್ಯಮ ಸಂಸ್ಥೆಯ ಆಸ್ತಿಗಳನ್ನು ಸ್ವಾಧೀನ ಪಡಿಸಿಕೊಂಡು ಸುಮಾರು 2 ಸಾವಿರ ಕೋಟಿ ರೂ ಲಾಭ ಹಾಗೂ ಆಸ್ತಿ ಸಂಪಾದಿಸಲು ಯಂಗ್ ಇಂಡಿಯಾ ಲಿ. ವಾಮಮಾರ್ಗ ಅನುಸರಿಸಿದೆ ಎಂದು ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿದ್ದು, ಜಾರಿ ನಿರ್ದೇಶನಾಲಯವು ರಾಹುಲ್​ ಮತ್ತು ಸೋನಿಯಾ ಅವರಿಗೆ ನೋಟಿಸ್​ ಜಾರಿ ಮಾಡಿ ಖುದ್ದು ಹಾಜರಿಗೆ ಆದೇಶಿಸಿದೆ. ಇದರ ಬೆನ್ನಲ್ಲೇ ಸೋನಿಯಾ ಗಾಂಧಿ ಅವರಿಗೆ ಕರೊನಾ ಕಾಣಿಸಿಕೊಂಡಿದೆ.