ನ್ಯೂಸ್

ಪ್ರಥಮ ದಲಿತ ಸಿಎಂ ಎಂಬ ಹೆಗ್ಗಳಿಕೆ ಪಡೆದಿದ್ದ ಕಾಂಗ್ರೆಸ್‌ ಹಿರಿಯ ಮುಖಂಡ ಜಗನ್ನಾಥ್‌ ಕೋವಿಡ್‌ಗೆ ಬಲಿ

ಜೈಪುರ: ರಾಜಸ್ಥಾನದ ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಪಾಲ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಜಗನ್ನಾಥ್ ಪಹಾಡಿಯಾ ಅವರು ಕೋವಿಡ್‌ನಿಂದಾಗಿ ಮೃತಪಟ್ಟಿದ್ದಾರೆ. ಇವರಿಗೆ 89 ವರ್ಷ ವಯಸ್ಸಾಗಿತ್ತು. ಇವರು ರಾಜಸ್ಥಾನದ ಮೊದಲ ದಲಿತ ಮುಖ್ಯಮಂತ್ರಿ ಎಂದೂ ಕರೆಸಿಕೊಂಡವರು.

ಕರೊನಾ ಸೋಂಕು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಇವರನ್ನು ದೆಹಲಿಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ. ಇವರ ಪತ್ನಿ ಕೂಡ ಕೋವಿಡ್‌ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜಗನ್ನಾಥ್‌ ಅವರು, 1980-81ರಲ್ಲಿ ರಾಜಸ್ಥಾನದ ಮುಖ್ಯಮಂತ್ರಿ ಹಾಗೂ ಹರಿಯಾಣ ಮತ್ತು ಬಿಹಾರದ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ್ದರು. ಇವರ ನಿಧನಕ್ಕೆ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‍ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಗೆಹ್ಲೋಟ್‌, ರಾಜ್ಯ ಸರ್ಕಾರದ ವತಿಯಿಂದ ಒಂದು ದಿನ ಶೋಕಾಚರಣೆಯನ್ನು ಘೋಷಿಸಲಾಗಿದೆ, ಜತೆಗೆ ಎಲ್ಲಾ ಸರ್ಕಾರಿ ಕಚೇರಿಗಳನ್ನು ಮುಚ್ಚಲಾಗಿದ್ದು, ರಾಷ್ಟ್ರಧ್ವಜವನ್ನು ಅರ್ಧದಷ್ಟು ಹಾರಿಸಲಾಗುತ್ತದೆ ಎಂದಿದ್ದಾರೆ.

ಇಂದು ಮಧ್ಯಾಹ್ನ 12 ಗಂಟೆಗೆ ಸಚಿವ ಸಂಪುಟದ ಸಭೆ ನಡೆಯಲಿದ್ದು, ಜಗನ್ನಾಥ್‌ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುತ್ತದೆ ಎನ್ನಲಾಗಿದೆ.