ನವದೆಹಲಿ: 2020ರಲ್ಲಿ ನಡೆದಿದ್ದ ಯುಪಿಎಸ್‌ಸಿ ಪರೀಕ್ಷೆಗಳಿಗೆ 'ಕೋವಿಡ್ 19' ಸೋಂಕಿನ ಭೀತಿಯಿಂದಾಗಿ ಕೊನೆ ಕ್ಷಣದಲ್ಲಿ ಹಾಜರಾಗಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಪುನಃ ಅವಕಾಶ ನೀಡುವುದು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
ಕರೊನಾ ಭೀತಿಯಿಂದ ಪರೀಕ್ಷೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಮತ್ತೊಂದು ಅವಕಾಶ ನೀಡಬೇಕು ಎಂದು ಕೆಲವು ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದರು. ಆದರೆ ಇದಕ್ಕೆ ಯುಪಿಎಸ್‌ಸಿ ಸಾಧ್ಯವಾಗುವುದಿಲ್ಲ ಎಂದು ಹೇಳಿಕೆ ನೀಡಿದೆ.
ಕೇಂದ್ರ ಸರ್ಕಾರದ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಈ ಹೇಳಿಕೆಯನ್ನು ಸುಪ್ರೀಂಕೋರ್ಟ್‌ಗೆ ತಿಳಿಸಿದ್ದಾರೆ.
ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲು ಸರ್ಕಾರ ಸಿದ್ಧವಿಲ್ಲ. ಈ ಬಗ್ಗೆ ಗುರುವಾರ ರಾತ್ರಿ ಸರ್ಕಾರ ಸೂಚನೆ ನೀಡಿದೆ. ಈ ವಿಚಾರಕ್ಕೆ ಸಂಬಂಧಿಸದಿಂತೆ ಪ್ರಮಾಣ ಪತ್ರ ಸಲ್ಲಿಸಲು ಸ್ವಲ್ಪ ಕಾಲಾವಕಾಶ ನೀಡಬೇಕು ಎಂದು ಅವರು ಕೋರಿದರು.
ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎ.ಎಂ.ಖಾನ್ವಿಲ್ಕರ್ ನೇತೃತ್ವದ ಪೀಠ ಇದೇ 25ಕ್ಕೆ ಮುಂದೂಡಿದೆ. ಈ ಹಿಂದೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ಇಂಥ ನಾಗರಿಕ ಸೇವೆಗಳ ಆಕಾಂಕ್ಷಿಗಳಿಗೆ ಇನ್ನೂ ಒಂದು ಅವಕಾಶವನ್ನು ನೀಡುವ ವಿಷಯವನ್ನು ಸರ್ಕಾರ ಪರಿಗಣಿಸುತ್ತಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದ್ದರು.