ಮುಂಬೈ: ನಟ ಸೈಫ್ ಅಲಿ ಖಾನ್ (Saif Ali Khan) ಮೇಲಿನ ದಾಳಿಗೆ ಸಂಬಂಧಿಸಿದಂತೆ ಪೊಲೀಸರು ಮನೆ ಕೆಲಸದಾಕೆ ಸೇರಿದಂತೆ ನಾಲ್ಕು ಮಂದಿ ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದು, ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಇನ್ನೂ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯ ಫೋಟೋವನ್ನು ಬಿಡುಗಡೆ ಮಾಡಿದ್ದಾರೆ.
ಆರೋಪಿಯು ಸೈಫ್ ಅಲಿ ಖಾನ್ ವಾಸಿಸುವ ಅಪಾರ್ಟ್ಮೆಂಟ್ನ ಆರನೇ ಮಹಡಿಯಲ್ಲಿ ಮೆಟ್ಟಿಲು ಹತ್ತುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಗುರುವಾರ (ಜನವರಿ 16) ನಸುಕಿನ 2.33 ಗಂಟೆ ಸುಮಾರಿಗೆ ದುಷ್ಕರ್ಮಿಗಳು ಅಪಾರ್ಟ್ಮೆಂಟ್ಗೆ ನುಗ್ಗಿರುವುದು ಬೆಳಕಿಗೆ ಬಂದಿದೆ.
ಇದನ್ನೂ ಓದಿ: 2ಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಮಾತ್ರ ಚುನಾವಣೆಯಲ್ಲಿ ಸ್ಫರ್ಧಿಸಲು ಅವಕಾಶ: Chandrababu Naidu
ಮುಂಬೈನ ಬಾಂದ್ರಾದಲ್ಲಿರುವ ಸೈಫ್ ಮನೆಗೆ ಕಳ್ಳನೊಬ್ಬ ನುಗ್ಗಿದ್ದಾನೆ. ಕಳ್ಳ ಮನೆಗೆ ಪ್ರವೇಶಿಸಿದನ್ನು ಅರಿತುಕೊಂಡ ಮನೆಯ ಸಿಬ್ಬಂದಿ ಎಚ್ಚರಗೊಂಡರು. ಮನೆಯಲ್ಲಿ ಗಲಾಟೆಯಿಂದ ನಿದ್ದೆಯಿಂದ ಎದ್ದ ಸೈಫ್ ಕಳ್ಳನನ್ನು ಹಿಡಿಯಲು ಯತ್ನಿಸಿದ್ದಾರೆ. ಇದೇ ವೇಳೆ ಕಳ್ಳ ಸೈಫ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ ಗಂಭೀರವಾಗಿ ಗಾಯಗೊಳಿಸಿದ್ದಾನೆ. ಈ ಘಟನೆ ಬಳಿಕ ಕಳ್ಳ ತಲೆಮರೆಸಿಕೊಂಡಿದ್ದಾನೆ. ಆತನನ್ನು ಹಿಡಿಯಲು ಮುಂಬೈ ಪೊಲೀಸರು ಮತ್ತು ಕ್ರೈಂ ಬ್ರಾಂಚ್ ಶ್ರಮಿಸುತ್ತಿದ್ದಾರೆ.
ಸೈಫ್ ಅಲಿ ಖಾನ್ (Saif Ali Khan) ಪತ್ನಿ, ನಟಿ ಕರೀನಾ ಕಪೂರ್ ಖಾನ್ ಮತ್ತು ಅವರ ಮಕ್ಕಳು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ. ಪ್ರಾಥಮಿಕ ತನಿಖೆಯ ನಂತರ ಪೊಲೀಸರು ಶೀಘ್ರದಲ್ಲೇ ಪ್ರಕರಣದ ವಿವರಗಳನ್ನು ಬಹಿರಂಗಪಡಿಸುವ ಸಾಧ್ಯತೆಯಿದೆ. ಮನೆಯ ಸುತ್ತ ಅಳವಡಿಸಲಾಗಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.