ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ 2024-25 ನೇ ಸಾಲಿನ 15.48 ಕೋಟಿ ರೂ.ಗಳ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ನಾಲ್ಕನೇ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಯಿತು.
ಸಭೆ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂಗೊಳ್ಳಿ ರಾಯಣ್ಣ ಸಾಂಸ್ಕೃತಿಕ ಸಲಹಾ ಸಮಿತಿ ರಚನೆ ಮಾಡಲು ಪ್ರಸ್ತಾವನೆ ಸಲ್ಲಿಸಬೇಕು ಎಂದು ಹೇಳಿದರು.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ 179.30 ಕೋಟಿ ರೂ. ವೆಚ್ಚದ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ಕಾಮಗಾರಿಗಳ ಬಹುತೇಕ ಪೂರ್ಣಗೊಂಡಿದ್ದು ಇನ್ನುಳಿದ ಸಿವಿಲ್ ಕಾಮಗಾರಿಗಳನ್ನು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು. ಹಾಗೂ ಹೆಚ್ಚುವರಿಯಾಗಿ ವೆಚ್ಚ ಮಾಡಲಾಗಿರುವ 30 ಕೋಟಿ ರೂ. ಕಾಮಗಾರಿ ಅನುಷ್ಠಾನ ಕುರಿತು ಕುರಿತು ಜಿಲ್ಲಾಧಿಕಾರಿ ಹಾಗೂ ಲೋಕೋಪಯೋಗಿ ಇಲಾಖೆ ಎಕ್ಸಿಕ್ಯೂಟಿವ್ ಇಂಜಿನಿಯರ್ ಪರಿಶೀಲಿಸಿ ವರದಿಯನ್ನು ಸಲ್ಲಿಸಲು ಸೂಚಿಸಿದರು.
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಶೇ.67 ಮತ್ತು ಹೊರರಾಜ್ಯದ ವಿದ್ಯಾರ್ಥಿಗಳಿಗೆ ಶೇ.33 ರಷ್ಟು ಪ್ರವೇಶಾತಿ ನಿಗದಿಪಡಿಸುವ ಕುರಿತು ಕೇಂದ್ರ ರಕ್ಷಣಾ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಲು ಸಭೆ ನಿರ್ಧಾರಿಸಿತು.
ಕರ್ನಾಟಕ ರಾಜ್ಯದ ವಿದ್ಯಾರ್ಥಿಗಳಿಗೆ ಅನುಕೂಲವಾಗಲು ಒಂದನೇ ತರಗತಿಯಿಂದ ಐದನೇ ತರಗತಿವರೆಗೆ ವರ್ಟಿಕಲ್ ಶಾಲೆ ಪ್ರಾರಂಭಿಸುವ ಕುರಿತು ಪರಿಶೀಲನೆ ಮಾಡುವಂತೆ ಸಿಎಂ ಸೂಚಿಸಿದರು. ಸೈನಿಕ ಶಾಲೆಯಲ್ಲಿ ಖಾಯಂ ಶಿಕ್ಷಕರ ನೇಮಕಾತಿಗೆ ಕುರಿತು ಪ್ರಸ್ತಾವನೆ ಸಲ್ಲಿಸಬೇಕು.
ಪ್ರಾಧಿಕಾರದಿಂದ ಸಂಗೊಳ್ಳಿ ರಾಯಣ್ಣ ಸ್ಮಾರಕಗಳ ಅಭಿವೃದ್ಧಿ ಕುರಿತು ಮತ್ತು ಸೌಲಭ್ಯ ಕಲ್ಪಿಸುವ ಬಗ್ಗೆ ನೀಲ ನಕಾಶೆ ಸಲ್ಲಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ಅವರಿಗೆ ಸೂಚನೆ ನೀಡಿದರಲ್ಲದೆ, ಈ ಕುರಿತು ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಪರಿಶೀಲಿಸಿ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ 75.29 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಸಂಗೊಳ್ಳಿ ರಾಯಣ್ಣ ಮ್ಯೂಸಿಯಂ ಕಾಮಗಾರಿ ಬಹುತೇಕ ಅಂತಿಮ ಹಂತದಲ್ಲಿದ್ದು, ನವೆಂಬರ್ 2ನೇ ವಾರದ ಒಳಗಾಗಿ ಎಲ್ಲ ಕಾಮಗಾರಿ ಪೂರ್ಣಗೊಳಿಸಬೇಕು. ನಂದಗಡದಲ್ಲಿ ಕೆರೆ ಅಭಿವೃದ್ಧಿ ಹಾಗೂ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಸ್ಥಾಪನೆಯ ಕಾಮಗಾರಿಗಳನ್ನೂ ಇದೇ ಗಡುವಿನೊಳಗೆ ಪೂರ್ಣಗೊಳಿಸುವಂತೆ ತಾಕೀತು ಮಾಡಿದರು.
ಸಂಗೊಳ್ಳಿ ರಾಯಣ್ಣ ಮ್ಯೂಸಿಯಂಗೆ ಕಾಂಪೌಂಡ್ ನಿರ್ಮಾಣಕ್ಕೆ ಅಗತ್ಯವಾದ ಅಂದಾಜು ಪಟ್ಟಿಯನ್ನು ಸಲ್ಲಿಸಬೇಕು. ಸಂಗೊಳ್ಳಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಶೌರ್ಯಭೂಮಿಯನ್ನು ಈಗಾಗಲೇ ಲೋಕಾರ್ಪಣೆ ಮಾಡಲಾಗಿದ್ದು, ಉತ್ತಮ ಪ್ರವಾಸಿ ತಾಣವಾಗಿ ರೂಪುಗೊಂಡಿದೆ. ಇಲ್ಲಿ ಪ್ರವಾಸಿಗರಿಗೆ ಅನುಕೂಲ ಮಾಡುವ ಉದ್ದೇಶದಿಂದ ಪ್ರವಾಸಿ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಸಿದ್ದರಾಮಯ್ಯ ಸೂಚಿಸಿದರು.
ಸಚಿವರಾದ ಶಿವರಾಜ ತಂಗಡಗಿ, ಬೈರತಿ ಸುರೇಶ್, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ ಮತ್ತಿತರರು ಉಪಸ್ಥಿತರಿದ್ದರು.