ನ್ಯೂಸ್

ಬಿಸಿಯೂಟ ತಯಾರಕರ ಅಹೋರಾತ್ರಿ ಧರಣಿ ಸತ್ಯಾಗ್ರಹ

ಬೆಂಗಳೂರು: ಬಿಸಿಯೂಟ ತಯಾರಕರಿಗೆ ಮಾಸಿಕ ೬ ಸಾವಿರ ರೂ.ವೇತನ ನೀಡಬೇಕೆಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಹಸ್ರಾರು ಬಿಸಿಯೂಟ ತಯಾರಕರು ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಸುತ್ತಿರುವ ಅನಿರ್ದಿಷ್ಟ ಕಾಲ ಅಹೋರಾತ್ರಿ ಧರಣಿ ಸತ್ಯಾಗ್ರಹ ನಾಲ್ಕನೆ ದಿನಕ್ಕೆ ಕಾಲಿಟ್ಟಿದೆ.
ರಾಜ್ಯ ಅಕ್ಷರದಾಸೋಹ ಬಿಸಿಯೂಟ ತಯಾರಕರ ಪೆಡರೇಷನ್ ರಾಜ್ಯ ಸಮಿತಿ ನೇತೃತ್ವದಲ್ಲಿ ಧರಣಿ ನಡೆಯುತ್ತಿದ್ದು, ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಿಂದ ಬಿಸಿಯೂಟ ತಯಾರಕರು ಆಗಮಿಸಿದ್ದಾರೆ.
ರಾಜ್ಯ ಸರ್ಕಾರ ಬಿಸಿಯೂಟ ಯೋಜನೆಯನ್ನು ಖಾಸಗೀಕರಣಗೊಳಿಸುವ ಹುನ್ನಾರ ಮಾಡುತ್ತಿದೆ. ೨೦೨೨ರ ಡಿಸೆಂಬರ್ ೮ರಂದು ಯೋಜನೆಯ ಆಯುಕ್ತರು ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಎಸ್‌ಡಿಎಂಸಿ ಅಧ್ಯಕ್ಷರ ಹೆಸರಿನಲ್ಲಿ ಜಂಟಿ ಖಾತೆ ತೆರೆಯುವಂತೆ ಆದೇಶಿಸಿದ್ದರು. ಕೂಡಲೇ ಆ ಆದೇಶ ಹಿಂಪಡೆದು ಮುಖ್ಯೋಪಾಧ್ಯಾಯ ಮತ್ತು ಮುಖ್ಯ ಅಡುಗೆಯವರ ಜಂಟಿ ಬ್ಯಾಂಕ್ ಖಾತೆ ಮುಂದುವರಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದ್ದಾರೆ.
ಬಿಸಿಯೂಟ ತಯಾರಕರನ್ನು ಮಾರ್ಚ್ ೩೧ಕ್ಕೆ ಬಿಡುಗಡೆಗೊಳಿಸಿ ಜೂನ್ ೧ಕ್ಕೆ ಪುನಃ ನೇಮಕಾತಿ ಮಾಡಿಕೊಳ್ಳುವ ಆದೇಶವನ್ನು ಹಿಂಪಡೆಯಬೇಕು. ಜತೆಗೆ ಸೇವಾ ಭದ್ರತೆ ನೀಡಬೇಕು ಎಂದು ಒತ್ತಾಯಿಸಿದ ಬಿಸಿಯೂಟ ನೌಕರರು, ಕೊಪ್ಪಳ, ಹಾವೇರಿ, ಉತ್ತರ ಕನ್ನಡ ಜಿಲ್ಲೆಯ ಶಾಲೆಯಲ್ಲಿ ಅಡುಗೆ ತಯಾರಿಸುವ ಸಂದರ್ಭದಲ್ಲಿ ಅವಘಡ ಸಂಭವಿಸಿ ನೌಕರರು ಮೃತಪಟ್ಟಿದ್ದಾರೆ. ರಾಜ್ಯ ಸರ್ಕಾರ ಅವರ ಕುಟುಂಬಗಳಿಗೆ ತಲಾ ೨೫ ಲಕ್ಷ ರೂ.ಪರಿಹಾರ ಹಾಗೂ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು ಆಗ್ರಹಿಸಿದರು.
೨೦ ವರ್ಷ ಕಾರ್ಯನಿರ್ವಹಿಸಿ ನಿವೃತ್ತಿಯಾದವರಿಗೆ ಮತ್ತು ಮಕ್ಕಳ ಸಂಖ್ಯೆ ಕಡಿಮೆ ಇದೆ ಎಂದು ಹೇಳಿ ಕೆಲಸದಿಂದ ತೆಗೆದು ಹಾಕಿದ ಬಿಸಿಯೂಟ ತಯಾರಕರಿಗೆ ೨.೫೦ ಲಕ್ಷ ರೂ. ಇಡಿಗಂಟು ನೀಡಬೇಕು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿಸಿಯೂಟ ತಯಾರಕರಿಗೆ ಹೆಚ್ಚುವರಿಯಾಗಿ ೧ ಸಾವಿರ ರೂ. ನೀಡುವಂತೆ ಬಜೆಟ್‌ನಲ್ಲಿ ಘೋಷಿಸಿದ್ದರು. ಅದನ್ನು ಜೂನ್ ತಿಂಗಳಿಂದ ಅನ್ವಯವಾಗುವಂತೆ ಜಾರಿಗೊಳಿಸಬೇಕು. ಅಡುಗೆ ಸಿಬ್ಬಂದಿಗೆ ವರ್ಷಕ್ಕೆ ಎರಡು ಬಾರಿ ಸಮವಸ, ಏಪ್ರಾನ್, ಟೋಪಿ ಮತ್ತು ಕೈಗವಸುಗಳನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ.