ನ್ಯೂಸ್

ಹೆಣ್ಣುಮಕ್ಕಳ ಉನ್ನತ ಶಿಕ್ಷಣಕ್ಕೆ ಪ್ರತಿ ವರ್ಷ 30 ಸಾವಿರ ರೂ. ವಿದ್ಯಾರ್ಥಿವೇತನ: ಅಜೀಂ ಪ್ರೇಮ್ ಜಿ ಫೌಂಡೇಷನ್ ಘೋಷಣೆ

ಬೆಂಗಳೂರು ದೇಶದಲ್ಲಿ ಹೆಣ್ಣು ಮಕ್ಕಳ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸುವ ನಿಟ್ಟನಲ್ಲಿ ಅಜೀಂ ಪ್ರೇಮ್ ಜಿ ಪ್ರತಿಷ್ಠಾನವು ಮುಂದಡಿ ಇಟ್ಟಿದೆ. ಡಿಪ್ಲೊಮಾ ಹಾಗೂ ಪದವಿ ವ್ಯಾಸಂಗ ಮಾಡುವ ದೇಶದ 18 ರಾಜ್ಯಗಳ 2.5 ಲಕ್ಷ ವಿದ್ಯಾರ್ಥಿನಿಯರಿಗೆ ಪ್ರತಿ ವರ್ಷ 30 ಸಾವಿರ ರೂ. ವಿದ್ಯಾರ್ಥಿವೇತನ ನೀಡುವುದಾಗಿ ಘೋಷಿಸಿದೆ.

ಈ ಕುರಿತು ಗುರುವಾರ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನುರಾಗ್ ಬೆಹರ್ ಸುದ್ದಿಗೋಷ್ಠಿ ನಡೆಸಿ ವಿವರಗಳನ್ನು ಹಂಚಿಕೊಂಡರು.

2024-25ನೇ ಸಾಲಿನಲ್ಲಿ ಮಧ್ಯಪ್ರದೇಶ, ಉತ್ತರ ಪ್ರದೇಶ, ರಾಜುಸ್ಥಾನ ಮತ್ತು ಜಾರ್ಖಾಂಡ್‌ನ ಕೆಲವು ಜಿಲ್ಲೆಗಳಲ್ಲಿ 25 ಸಾವಿರಕ್ಕೂ ಹೆಚ್ಚಿನ ಹೆಣ್ಣುಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲಾಗಿದೆ. ಸರ್ಕಾರಿ ಶಾಲೆಗಳಲ್ಲಿ 10 ಮತ್ತು 12ನೇ ತರಗತಿ ಪೂರೈಸಿರುವ ಹೆಣ್ಣು ಮಕ್ಕಳು ಸರ್ಕಾರಿ/ಖಾಸಗಿ ಸಂಸ್ಥೆಗಳಲ್ಲಿ ಡಿಪ್ಲೊಮಾ/ಪದವಿ ವ್ಯಾಸಂಗಕ್ಕೆ ಸೇರಿರುವವರು ಇದಕ್ಕೆ ಅರ್ಹರಾಗಿರುತ್ತಾರೆ ಎಂದು ತಿಳಿಸಿದರು.

18 ರಾಜ್ಯದಲ್ಲಿ ಆಯ್ಕೆ:

2025-26ನೇ ಶೈಕ್ಷಣಿಕ ಸಾಲಿನ 2.5 ಲಕ್ಷ ಹೆಣ್ಣು ಮಕ್ಕಳನ್ನು ದೇಶದ 18 ರಾಜ್ಯಗಳಲ್ಲಿ ಆಯ್ಕೆ ಮಾಡಲಾಗುತ್ತದೆ. ಮುಂದಿನ ಸೆಪ್ಟೆಂಬರ್‌ನಲ್ಲಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಯೋಜನೆಯ ಸಂಪೂರ್ಣ ವಿವರಗಳನ್ನು ಪ್ರಕ್ರಿಯೆ ಆರಂಭವಾಗುವ ವೇಳೆಗೆ ತಿಳಿಸಲಾಗುತ್ತದೆ. ಮುಂದಿನ ವರ್ಷಗಳಲ್ಲಿ ದೇಶವ್ಯಾಪ್ತಿ ಯೋಜನೆಯನ್ನು ವಿಸ್ತರಿಸುವ ಆಲೋಚನೆ ಹೊಂದಲಾಗಿದೆ ಎಂದು ತಿಳಿಸಿದರು.

ಕರ್ನಾಟಕ, ಅರುಣಾಚಲ ಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ಜಾರ್ಖಾಂಡ್, ಮಧ್ಯಪ್ರದೇಶ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಒಡಿಶಾ, ರಾಜಸ್ಥಾನ, ಸಿಕ್ಕಿಂ, ತೆಲಂಗಾಣ, ತ್ರಿಪುರಾ, ಉತ್ತರ ಪ್ರದೇಶ ಮತ್ತು ಉತ್ತರಾಖಾಂಡ ರಾಜ್ಯಗಳ ಹೆಣ್ಣು ಮಕ್ಕಳು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

ಹೆಣ್ಣುಮಗುವು ನಾಲ್ಕು ವರ್ಷದ ಬಿಎಸ್‌ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರೆ, ಪ್ರತಿ ವರ್ಷ 30 ಸಾವಿರ ರೂ.ಗಳಂತೆ, 4 ವರ್ಷಕ್ಕೆ 1.20 ಲಕ್ಷ ರೂ.ಗಳನ್ನು ವಾರ್ಷಿಕ ಎರಡು ಕಂತಿನಲ್ಲಿ ನೇರವಾಗಿ ವಿದ್ಯಾರ್ಥಿನಿಯ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ತಿಳಿಸಿದರು.