ಚಿಕ್ಕಮಗಳೂರು: ರಾಜ್ಯದಲ್ಲಿ ಜನಪರ ಆಡಳಿತ ನೀಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಎಎಪಿ ಜಿಲ್ಲಾ ಮಾಧ್ಯಮ ಉಸ್ತುವಾರಿ ಡಾ. ಕೆ.ಸುಂದರ ಗೌಡ ಆರೋಪಿಸಿದರು.
ದೆಹಲಿಯಲ್ಲಿ ಎಎಪಿ ಪಕ್ಷದ ನೇತೃತ್ವದಲ್ಲಿ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಅದೇ ಯೋಜನೆಗಳನ್ನು ಕಳೆದ ಚುನಾವಣೆಯಲ್ಲಿ ಪ್ರಣಾಳಿಕೆಯನ್ನಾಗಿಸಿಕೊಂಡಿದ್ದ ಕಾಂಗ್ರೆಸ್ ಕದ್ದು ಅಧಿಕಾರಕ್ಕೆ ಬಂದಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಟೀಕಿಸಿದರು.
ಚುನಾವಣೆ ಸಂದರ್ಭದಲ್ಲಿ ಎಎಪಿಯ ಪ್ರಣಾಳಿಕೆಯ ವಿಷಯಗಳನ್ನು ಮುಂದಿಟ್ಟುಕೊಂಡು ಜನರನ್ನು ಮರುಳು ಮಾಡಿ ಅಧಿಕಾರಕ್ಕೆ ಬಂದಿದೆ. ದೇಶ, ರಾಜ್ಯಕ್ಕೆ ಕಾಂಗ್ರೆಸ್ ಕೊಡುಗೆ ಶೂನ್ಯ. ಗ್ಯಾರಂಟಿ ಯೋಜನೆಗಳನ್ನು ಸಂಪೂರ್ಣವಾಗಿ ಜನರಿಗೆ ತಲುಪಿಸುವಲ್ಲಿ ವಿಫಲವಾಗಿದೆ. ಉಚಿತ ಯೋಜನೆಗಳಿಗೆ ಹಣ ಹೊಂದಿಸಲು ಬಡವರ ಜೇಬಿಗೆ ಕೈ ಹಾಕಿದೆ ಎಂದು ಟೀಕಿಸಿದರು.
ಪ್ರತಿ ಮನೆಗೂ 200 ಯುನಿಟ್‌ವರೆಗೆ ಉಚಿತ ವಿದ್ಯುತ್ ಪೂರೈಕೆ ಮಾಡುವುದಾಗಿ ಹೇಳಿ ಈಗ ಬಿಲ್ ನೀಡುತ್ತಿದೆ. ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗುತ್ತಿದ್ದು ರೈತರು ಬೆಳೆಗಳಿಗೆ ನೀರು ಹರಿಸಲಾಗದೆ ಸಂಕಷ್ಟದಲ್ಲಿದ್ದಾರೆ. ಇಂತಹ ಸಮಸ್ಯೆಗಳು ಸರ್ಕಾರದ ಗಮನದಲ್ಲಿದ್ದರೂ ಸಚಿವರು ಏನು ತಿಳಿಯದವರಂತೆ ವರ್ತಿಸುತ್ತಿದ್ದಾರೆ ಎಂದರು.
ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿ ಖಾತೆಗೆ 2 ಸಾವಿರ ರೂ ಜಮಾ ಮಾಡಲಾಗುತ್ತಿದೆ. ಇದಕ್ಕೆ ಹಣ ಎಲ್ಲಿಂದ ತರಲಾಗುತ್ತಿದೆ ಎಂಬುದರ ಬಗ್ಗೆ ಸರ್ಕಾರ ಸ್ಪಷ್ಟಪಡಿಸುತ್ತಿಲ್ಲ. ಮದ್ಯದ ದರ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದೆ. ಈ ರೀತಿ ಜನರನ್ನು ಸರ್ಕಾರ ಶೋಷಣೆ ಮಾಡುತ್ತಿದೆ. ಇದರ ವಿರುದ್ಧ ಈಗಲೇ ಎಚ್ಚೆತ್ತುಕೊಂಡು ಹೋರಾಟ ರೂಪಿಸಲಾಗುವುದು ಎಂದು ಹೇಳಿದರು.
ಭ್ರಷ್ಟಾಚಾರ ಮುಕ್ತ ರಾಜ್ಯ ನಿರ್ಮಾಣವೇ ನಮ್ಮ ಗುರಿ. ನಿರಂತರವಾಗಿ ಭ್ರಷ್ಟಚಾರದ ವಿರುದ್ಧ ಹೋರಾಟ ಮಾಡಲಾಗುತ್ತಿದೆ. ರಾಜ್ಯದಲ್ಲಿ ಆಳ್ವಿಕೆ ನಡೆಸಿದ ಸರ್ಕಾರಗಳು ಊಹಿಸಲಾರದಷ್ಟು ಭ್ರಷ್ಟಾಚಾರದಲ್ಲಿ ತೊಡಗಿವೆ. ಇಲಾಖಾ ಕಚೇರಿಗಳಲ್ಲಿ ಲಂಚ ಇಲ್ಲದೆ ಕೆಲಸಗಳು ಆಗುತ್ತಿಲ್ಲ. ಇದಕ್ಕೆ ಕಡಿವಾಣ ಹಾಕಲು ಜನರೇ ಮುಂದಾಗಬೇಕು ಎಂದು ಹೇಳಿದರು.
ಚಿಕ್ಕಮಗಳೂರು ಜಿಲ್ಲಾಧಿಕಾರಿ ಅವರನ್ನು ಭೇಟಿ ಮಾಡಲು ವಾರದಲ್ಲಿ ಮೂರು ದಿನ ಮಾತ್ರ ನಿಗದಿ ಮಾಡಿರುವುದು ಸರಿಯಲ್ಲ. ಜಿಲ್ಲಾ ಕೇಂದ್ರದಿಂದ ತಾಲೂಕು ಕೇಂದ್ರಗಳು ಬಹಳ ದೂರದಲ್ಲಿವೆ. ಅಲ್ಲಿಂದ ಚಿಕ್ಕಮಗಳೂರಿಗೆ ಬರಬೇಕಾದರೆ ಬಹಳ ಸಮಯ ತೆಗೆದುಕೊಳ್ಳುತ್ತದೆ. ಕೂಡಲೇ ಜಿಲ್ಲಾಧಿಕಾರಿ ನಿರ್ಧಾರವನ್ನು ಬದಲಾಯಿಸಿಕೊಂಡು ಸಾರ್ವಜನಿಕರ ಭೇಟಿಗೆ ಅವಕಾಶ ಕಲ್ಪಿಸಬೇಕು. ಇಲ್ಲದಿದ್ದರೆ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಎಎಪಿ ಜಿಲ್ಲಾಧ್ಯಕ್ಷ ಲಿಂಗಾರಾಧ್ಯ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ನಸೂರಾ ಬೇಗಂ ಇತರರಿದ್ದರು.