ಭುವನೇಶ್ವರ್: ಒಡಿಶಾದ ಬಾಲಸೋರ್ ಜಿಲ್ಲೆಯ ಕಾಲೇಜೊಂದರ ವಿದ್ಯಾರ್ಥಿನಿಯೊಬ್ಬರು ಶಿಕ್ಷಕರ ವಿರುದ್ಧ ಲೈಂಗಿಕ ಕಿರುಕುಳ ದೂರು ದಾಖಲಿಸಿದ ಬಳಿಕ ಇಂದು (12) ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಒಡಿಶಾದ ಬಾಲಸೋರ್ನ ಫಕೀರ್ ಮೋಹನ್ ಕಾಲೇಜಿನಲ್ಲಿ ಇಂದು (ಜು.12) ಮಧ್ಯಾಹ್ನ ಈ ಘಟನೆ ನಡೆದಿದೆ.
ಕಾಲೇಜು ಸಮಿತಿ ಏಳು ದಿನಗಳಲ್ಲಿ ಕ್ರಮ ಕೈಗೊಳ್ಳುವುದಾಗಿ ವಿದ್ಯಾರ್ಥಿನಿಗೆ ಭರವಸೆ ನೀಡಲಾಗಿತ್ತು ಎನ್ನಲಾಗಿದೆ. ಏಳು ದಿನ ಕಳೆದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ವಿದ್ಯಾರ್ಥಿನಿ ತನ್ನ ಸಹಪಾಠಿಗಳೊಂದಿಗೆ ಕಾಲೇಜಿನ ಹೊರಗೆ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕಿರುಕುಳಕ್ಕೆ ಒಳಗಾದ ವಿದ್ಯಾರ್ಥಿನಿ ಇದ್ದಕ್ಕಿದ್ದಂತೆ ತನ್ನ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಕಾಲೇಜಿನ ಕಾರಿಡಾರ್‌ಗೆ ಓಡಿದ್ದಾಳೆ.
ಇಂಟಿಗ್ರೇಟೆಡ್ ಬಿ.ಎಡ್ ಪ್ರೋಗ್ರಾಂನ ವಿದ್ಯಾರ್ಥಿನಿಗೆ ಶಿಕ್ಷಕ ವಿಭಾಗದ ಮುಖ್ಯಸ್ಥ ಸಮೀರ್ ಕುಮಾರ್ ಸಾಹು ಎಂಬುವವರು ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಕೇಳಿದ್ದರಂತೆ. ಅದನ್ನು ಒಪ್ಪದಿದ್ದರೆ ಭವಿಷ್ಯವನ್ನೇ ಹಾಳು ಮಾಡುತ್ತೇನೆ ಎಂದು ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದರು ಎನ್ನಲಾಗಿದೆ. ಹಾಗಾಗಿ ವಿದ್ಯಾರ್ಥಿನಿ ಮಾನಸಿಕವಾಗಿ ಕುಗ್ಗಿದ್ದು, ಈ ಬಗ್ಗೆ ಜುಲೈ 1 ರಂದು ಕಾಲೇಜಿನ ಸಮಿತಿಗೆ ದೂರು ದಾಖಲಿಸಿದ್ದಾಳೆ.
(ಏಜೆನ್ಸೀಸ್)
ವಿದ್ಯಾರ್ಥಿನಿಗೆ ಶೇ.90ರಷ್ಟು ಸುಟ್ಟ ಗಾಯಗಳಾಗಿದ್ದು, ಆಕೆಯನ್ನು ಉಳಿಸಲು ಹೋದವನಿಗೆ 70% ರಷ್ಟು ಸುಟ್ಟ ಗಾಯಗಳಾಗಿವೆ ಎನ್ನಲಾಗಿದೆ. ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರಕರಣ ಸಂಬಂಧ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ಈ ಸಂಬಂಧ ಅವರನ್ನು ಬಂಧಿಸಲಾಗಿದ್ದು ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದೆ, ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಪೊಲೀಸರು ತಿಳಿಸಿದ್ದಾರೆ.