ಶಿವಮೊಗ್ಗ: ಶಿವಮೊಗ್ಗದಲ್ಲಿ ಗಲಾಟೆ ಮಾಡಿಸೋದೇ ಕೆ.ಎಸ್.ಈಶ್ವರಪ್ಪ. ಒಬ್ಬರ ಮೇಲೆ ಮತ್ತೊಬ್ಬರನ್ನು ಎತ್ತಿಕಟ್ಟಿ ಗಲಭೆಗೆ ಕಾರಣರಾಗುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಸಿದ್ದರಾಮಯ್ಯ, ಹರ್ಷ ಎಂಬ ಯುವಕ ಹತ್ಯೆಯಾದ ಬಳಿಕ ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿತ್ತು. ಆದರೆ ಹರ್ಷನ ಶವದ ಮೆರವಣಿಗೆ ಮಾಡುವ ಮೂಲಕ ಕಾನೂನನ್ನೇ ಈಶ್ವರಪ್ಪ ಉಲ್ಲಂಘಿಸಿದ್ದರು. ಆ ಸಂದರ್ಭದಲ್ಲಿ ಹಿಂಸಾಚಾರ ಉಂಟಾಗಿತ್ತು. ಶಾಸಕರಾದವರೇ ಹೀಗೆ ವರ್ತಿಸಿದರೆ ಹೇಗೆ? ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಆರ್ಎಸ್ಎಸ್ ಕಾರ್ಯಕರ್ತರು ಕಾನೂನು ಕೈಗೆ ತೆಗೆದುಕೊಳ್ಳುತ್ತಿದ್ದಾರೆ. ಬಿಜೆಪಿ ಅಧಿಕಾರ ಬಲದಿಂದ ಸೇಡಿನ ರಾಜಕಾರಣ ನಡೆಸುತ್ತಿದೆ. ವಿರೋಧಿಗಳ ಮೇಲೆ ಸುಳ್ಳು ಕೇಸ್ ದಾಖಲಿಸಲಾಗುತ್ತಿದೆ. ಧರ್ಮ, ಜಾತಿ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ. ಹೆಣದ ಮೇಲೆ ರಾಜಕೀಯ ಮಾಡುವುದು ಬಿಜೆಪಿ ತಂತ್ರವಾಗಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದರು.
ಪರೇಶ್ ಮೇಸ್ತಾ ಸಾವಿನ ಪ್ರಕರಣವನ್ನು ನಾನು ಸಿಎಂ ಆಗಿದ್ದ ಸಂದರ್ಭದಲ್ಲಿ ಸಿಬಿಐ ತನಿಖೆಗೆ ವಹಿಸಿದ್ದೆ. ಆಗಲೂ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿದ್ದುದು ಬಿಜೆಪಿಯೇ. ಪರೇಶ್ ಮೇಸ್ತಾ ಕೊಲೆಯಾಗಿಲ್ಲ, ಆತನದ್ದು ಸಹಜ ಸಾವು ಎಂದು ಸಿಬಿಐ ವರದಿ ನೀಡಿದೆ. ಆಗ ಪರೇಶ್ ಮೇಸ್ತಾ ಹೆಣದ ಮೇಲೆ ರಾಜಕೀಯ ಮಾಡಿದ್ದ ಬಿಜೆಪಿಯವರು ಈಗ ಸಿದ್ದರಾಮಯ್ಯ ಸಾಕ್ಷ್ಯನಾಶ ಮಾಡಿದ್ದಾರೆ ಎಂದು ಹೇಳುತ್ತಾ ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನನ್ನ ಮಗ ಪ್ರತಿನಿಧಿಸುತ್ತಿರುವ ವರುಣಾದಿಂದ ಕಣಕ್ಕಿಳಿಯುವಂತೆ ಜನ ಒತ್ತಾಯ ಮಾಡುತ್ತಿದ್ದಾರೆ. ಕೋಲಾರದಿಂದ ಸ್ಪರ್ಧೆ ಮಾಡಿ ಎಂದು ಹಲವು ಕಾರ್ಯಕರ್ತರು ಒತ್ತಡ ಹೇರುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಬೇಕೆಂಬ ಬಗ್ಗೆ ನವೆಂಬರ್ ಅಂತ್ಯದೊಳಗೆ ತೀರ್ಮಾನಿಸುತ್ತೇನೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.